ತುಮಕೂರು: ಅನ್ನಭಾಗ್ಯದ ಅಕ್ಕಿಯ ಪ್ರಮಾಣವನ್ನು ಕಡಿಮೆ ಮಾಡಿರುವುದು ಸೂಕ್ತವಲ್ಲ. ಈ ಬಜೆಟ್ ಬಡವರಿಗೆ ಹೊರೆಯಾಗುವಂತಿದೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ತಿಪಟೂರು ತಾಲೂಕಿನ ನೊಣವಿನಕೆರೆಯ ಕಾಡುಸಿದ್ಧೇಶ್ವರ ಮಠದಲ್ಲಿ ರಾಜ್ಯ ಬಜೆಟ್ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದರು, ಅನ್ನಭಾಗ್ಯ ಯೋಜನೆಯಲ್ಲಿ 7 ಕೆ.ಜಿ.ಯಿಂದ 5 ಕೆ.ಜಿ.ಗೆ ಇಳಿಕೆ ಮಾಡಿ 2 ಕೆ.ಜಿ. ಅಕ್ಕಿಯನ್ನು ಕಡಿತ ಮಾಡಲಾಗಿದೆ. ಇದು ಬಡವರಿಗೆ ಹೊರೆಯಾಗಲಿದ್ದು, ಈ ನಿರ್ಧಾರವನ್ನು ಪುನರ್ ಪರಿಶೀಲನೆ ಮಾಡುವಂತೆ ಸಿಎಂ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿಕೊಳ್ಳುತ್ತೇನೆ. ರೈತರ ಸಾಲ ಮನ್ನಾ ಮಾಡಿರುವುದು ಸ್ವಾಗತಾರ್ಹ ಎಂದರು.
Advertisement
ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ಕೇಂದ್ರ ಸರ್ಕಾರದಿಂದ ಬರಬೇಕಾದ ಅನೇಕ ಅನುದಾನಗಳ ಪ್ರಮಾಣವನ್ನು ಕಡಿಮೆ ಮಾಡಲಾಗಿದೆ. ರೈತರು ಹೆಚ್ಚಿನ ನಿರೀಕ್ಷೆ ಮಾಡುತ್ತಿದ್ದಾರೆ. ಹೀಗಾಗಿ ಪೆಟ್ರೋಲ್, ಡೀಸೆಲ್ ಸೇರಿದಂತೆ ವಿವಿಧ ವಸ್ತುಗಳ ಬೆಲೆ ಏರಿಕೆ ಅನಿವಾರ್ಯವಾಗಿದೆ. ಅಷ್ಟೇ ಅಲ್ಲದೆ ರಾಜ್ಯದ ಸಂಪನ್ಮೂಲ ಕ್ರೋಢಿಕರಣ ಮಾಡುವುದು ಮುಖ್ಯಮಂತ್ರಿಗಳ ಜವಾಬ್ದಾರಿ. ಆದ್ದರಿಂದ ಕುಮಾರಸ್ವಾಮಿ ಅವರು ಬೆಲೆ ಏರಿಕೆ ಮಾಡಿದ್ದಾರೆ ಎಂದು ಹೇಳಿದರು.