ಮೈಸೂರು: ಶೀಘ್ರವೇ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಸ್ಥಾಪನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೇಳಿದರು.
ಮೈಸೂರು ದಸರಾ (Mysuru Dasara) ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಸರಾ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆ ಎಂದರೇ ಸ್ವಾವಲಂಬನೆಯ ಪ್ರತೀಕ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ ಎಂದರು. ಇದನ್ನೂ ಓದಿ: ಸೆ.26ರಿಂದ 5 ದಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ – ಚಲುವರಾಯಸ್ವಾಮಿ
ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ಕಟ್ಟಿಕೊಡಬೇಕು. ದುಡಿಯುವ ಕೈಗಳಿಗೆ ಕೆಲಸ ಕೊಡಬೇಕು. ಮಹಿಳೆಯರು ಸ್ವಾವಲಂಬಿಯಾಗಿ ಜೀವಿಸಲು ಸಹಾಯ ಮಾಡಬೇಕು ಎಂಬ ಚಿಂತನೆಯನ್ನು ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯ (Siddaramaiah) ಅವರು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಹಿಳೆಯರನ್ನು ಕೇಂದ್ರೀಕೃತವಾಗಿ ಇಟ್ಟುಕೊಂಡು ಈ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಕೋಟ್ಯಂತರ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ನುಡಿದರು.
ಶೀಘ್ರವೇ ಗೃಹಲಕ್ಷ್ಮಿ ಹೆಸರಲ್ಲಿ ಸಹಕಾರ ಸಂಘಗಳ ಸ್ಥಾಪನೆ
ಮಹಿಳೆಯರಿಗೆ ಬ್ಯಾಂಕ್‌ಗಳಿಂದ ಸರಿಯಾಗಿ ಸಾಲ ಸೌಲಭ್ಯ ಸಿಗುತ್ತಿಲ್ಲ. ಇದರಿಂದ ಅವರಿಗೆ ಸ್ವಾವಲಂಬಿಯಾಗಿ ಜೀವನ ಕಟ್ಟಿಕೊಳ್ಳಲು ಕಷ್ಟವಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಆರಂಭಿಸಲು ಚಿಂತನೆ ನಡೆಸಿದೆ. ಈ ಮೂಲಕ ಮಹಿಳೆಯರಿಗೆ ಸಾಲ ಸೌಲಭ್ಯ ನೀಡಿ ಅವರನ್ನು ಸ್ವಾವಲಂಬಿಗಳಾಗಿ ಮಾಡಲಾಗುವುದು ಎಂದು ತಿಳಿಸಿದರು.
ಮಹಿಳೆಯರ ಸ್ವಾಭಿಮಾನ, ಸಮೃದ್ಧಿ, ತಾಳ್ಮೆ, ಶಕ್ತಿಯ ಪ್ರತೀಕವೇ ದಸರಾ ಹಬ್ಬ. ನವ ದೇವಿಯ ಆರಾಧನೆ ಮಾಡಿ, ದುಷ್ಟರ ವಿರುದ್ಧ ಶಿಷ್ಟರ ರಕ್ಷಣೆ ಮಾಡುವ ದೇವಿಯ ಆರಾಧನೆ ಮಾಡುವುದೇ ವಿಜಯದಶಮಿ. ಇಡೀ ವಿಶ್ವಕ್ಕೆ ಸಂಸ್ಕೃತಿಯ ರುಚಿಯನ್ನು ಕೊಟ್ಟವರು ಮಹಿಳೆಯರು. ಹಿಂದೆ ರಾಜರು ಆಳ್ವಿಕೆ ಮಾಡುತ್ತಿದ್ದರು. ಆದರೆ ಈಗ ಸರ್ಕಾರ ಬಹಳ ವಿಜೃಂಭಣೆಯಿಂದ ದಸರಾ ಆಚರಿಸುತ್ತಾ ಬರುತ್ತಿದೆ ಎಂದರು.
ಐಸಿಡಿಎಸ್ ವ್ಯಾಪ್ತಿಗೆ ಬರುವ ಅಂಗನವಾಡಿ ಕೇಂದ್ರ ಆರಂಭವಾಗಿ ಐವತ್ತು ವರ್ಷ ಆಗಿದ್ದು, ಇದೀಗ ಸುವರ್ಣ ಮಹೋತ್ಸವ ಕಾರ್ಯಕ್ರಮ ಮಾಡಲು ಚಿಂತನೆ ನಡೆದಿದೆ. ಎಲ್‌ಕೆಜಿ, ಯುಕೆಜಿ ಆರಂಭಿಸುವ ಮೂಲಕ ಅಂಗನವಾಡಿಯನ್ನು ಮತ್ತೊಂದು ಹೆಜ್ಜೆ ಮುಂದಕ್ಕೆ ಕೊಂಡೊಯ್ಯಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರ್ ನಾಥ್, ಮಹಿಳಾ ದಸರಾ ಸಮಿತಿ ಅಧ್ಯಕ್ಷೆ ಮಲ್ಲಿಗೆ ವೀರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಹೇಶ್ ಬಾಬು ಸೇರಿದಂತೆ ಮಹಿಳಾ ದಸರಾ ಉಪ ಸಮಿತಿಯ ಎಲ್ಲಾ ಸದಸ್ಯರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.