Sunday, 22nd September 2019

ಕೊಡಗಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ- ಹಾಲೇರಿಯಲ್ಲಿ ಭೂ ಕುಸಿತ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯಾಗುತ್ತಿದ್ದು ಗುಡ್ಡ ಕುಸಿತ ಉಂಟಾಗಿ ಮಡಿಕೇರಿ – ಸೋಮವಾರಪೇಟೆ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಡಿಕೇರಿ ತಾಲೂಕಿನ ಹಾಲೇರಿಯಲ್ಲಿ ಭೂಕುಸಿತ ಸಂಭವಿಸಿದೆ

ಸ್ಥಳಕ್ಕೆ ಕೊಡಗು ಜಿಲ್ಲಾಡಳಿತದ ಅಧಿಕಾರಿಗಳು ದೌಡಾಯಿಸಿದ್ದು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಳೆದ ವರ್ಷವೂ ಇದೇ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದ್ದು ಇದೀಗ ಮತ್ತೊಮ್ಮೆ ಗುಡ್ಡ ಕುಸಿದಿದೆ. ರಸ್ತೆಗೆ ಬಿದ್ದ ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ. ಮಡಿಕೇರಿ- ಸೋಮವಾರಪೇಟೆ ಮಾರ್ಗ ಬಂದ್ ಆಗಿರುವುದರಿಂದ ವಾಹನ ಸವಾರರು ಪರ್ಯಾಯ ಮಾರ್ಗವನ್ನು ಬಳಕೆ ಮಾಡುತ್ತಿದ್ದಾರೆ. ಮಡಿಕೇರಿಯಿಂದ ಸಿಂಕೋನ ಮಾರ್ಗವಾಗಿ ಸೋಮವಾರಪೇಟೆ ತೆರಳಬಹುದಾಗಿದೆ. ಇದನ್ನೂ ಓದಿ:ಗುಡ್ಡ ಕುಸಿತ: ಮಡಿಕೇರಿ-ಸೋಮವಾರಪೇಟೆ ನಡುವಿನ ರಾಜ್ಯ ಹೆದ್ದಾರಿ ಬಂದ್

ಅಷ್ಟೇ ಅಲ್ಲದೇ ಬೆಳಿಗ್ಗೆಯಿಂದಲೂ ಮಡಿಕೇರಿ ಸುತ್ತಮುತ್ತಲೂ ಎಡೆಬಿಡದೆ ಮಳೆಯಾಗುತ್ತಿದ್ದು, ಜನರು ಕಂಗಲಾಗಿದ್ದಾರೆ. ಮಳೆಗೆ ಕೊಡಗಿನ ಬ್ರಹ್ಮಗಿರಿ ಬೆಟ್ಟದಲ್ಲೂ ಬಿರುಕು ಕಾಣಿಸಿಕೊಂಡಿದ್ದು, ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇದನ್ನೂ ಓದಿ:ಪ್ರವಾಹದಲ್ಲಿ ಕೊಚ್ಚಿಹೋಗಿದ್ದ ಸೇತುವೆ ಮೇಲೆಯೇ ಜನರ ‘ಸಾವಿನ ನಡಿಗೆ’

ಮುಂಜಾಗೃತ ಕ್ರಮವಾಗಿ ಬೆಟ್ಟದ ತಪ್ಪಲಲ್ಲಿರುವ ಅಂಗಡಿಗಳನ್ನು ತೆರವು ಮಾಡುವಂತೆ ಸೂಚಿಸಲಾಗಿದೆ. ಮಳೆ ಮುಂದುವರಿಯುವ ಕುರಿತಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರಿಂದ ಕೊಡಗು ಜಿಲ್ಲಾಡಳಿತ ಸೂಕ್ತ ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

Leave a Reply

Your email address will not be published. Required fields are marked *