ಮಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಹಾಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಇದೀಗ ಮಂಗಳೂರು-ಚಿಕ್ಕಮಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ಸಹ ಭೂ ಕುಸಿತ ಸಂಭವಿಸಿದ್ದರಿಂದ ಸಂಚಾರ ಸ್ಥಗಿತವಾಗಿದೆ.
ಬೆಳ್ತಂಗಡಿ ತಾಲೂಕಿನ 3 ಮತ್ತು 10ನೇ ತಿರುವಿನಲ್ಲಿ ರಸ್ತೆಗೆ ಮಣ್ಣು ಕುಸಿದು ಬಿದ್ದಿದ್ದು, ರಸ್ತೆ ತುಂಬೆಲ್ಲ ಮಣ್ಣು ಬಿದ್ದಿದೆ. ಮಣ್ಣು ತೆರವು ಕಾರ್ಯಾಚರಣೆ ಚುರುಕುಗೊಂಡಿದ್ದು, ಕಾರ್ಯಾಚರಣೆ ಪೂರ್ಣಗೊಳ್ಳುವವರೆಗೆ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
Advertisement
Advertisement
ಇತ್ತ ಮಲೆನಾಡು ಭಾಗಗಳಾದ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನ ಆತಂಕಕ್ಕೀಡಾಗಿದ್ದಾರೆ. ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಎನ್.ಆರ್.ಪುರ, ಮೂಡಿಗೆರೆ, ಕೊಪ್ಪ ಹಾಗೂ ಶೃಂಗೇರಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Advertisement
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜೀವ ನದಿಗಳಿಗೆ ಕಳೆ ಬಂದಿದ್ದು, ತುಂಗಾ-ಭದ್ರಾ ಹಾಗೂ ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಕೊಟ್ಟಿಗೆಹಾರ, ಚಾರ್ಮಾಡಿಯಲ್ಲಿ ಮಳೆಯ ಅಬ್ಬರಕ್ಕೆ ಜನ ಕಂಗಾಲಾಗಿದ್ದಾರೆ. ಚಾರ್ಮಾಡಿಯಲ್ಲಿ ರಸ್ತೆ ಬದಿಯ ಗುಡ್ಡ ಕುಸಿತ ಉಂಟಾಗುತ್ತಿದ್ದು, ಮಳೆ-ಗಾಳಿಗೆ ಮರಗಳು ಧರೆಗುರುಳುತ್ತಿವೆ.
Advertisement
ಶಾಲಾ-ಕಾಲೇಜುಗಳಿಗೆ ರಜೆ:
ಮಹಾ ಮಳೆ, ಪ್ರವಾಹ ಹಿನ್ನೆಲೆ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ರಾಮದುರ್ಗ ತಾಲೂಕು ಹೊರತುಪಡಿಸಿ ಬೆಳಗಾವಿಯಾದ್ಯಂತ ಶಾಲಾ-ಕಾಲೇಜಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ, ಮಲೆನಾಡು, ಉತ್ತರ ಕನ್ನಡದಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಉತ್ತರ ಕನ್ನಡದ ಹಳಿಯಾಳ, ದಾಂಡೇಲಿ ತಾಲೂಕು ಹೊರತುಪಡಿಸಿ ಉಳಿದ 9 ತಾಲೂಕುಗಳ ಶಾಲೆಗಳಿಗೆ ರಜೆ ನೀಡಲಾಗಿದೆ.
ಇತ್ತ ದಕ್ಷಿಣ ಕನ್ನಡದ ಪುತ್ತೂರು, ಕಡಬ, ಬೆಳ್ತಂಗಡಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಫೋಷಿಸಲಾಗಿದೆ. ಮಲೆನಾಡಿನ ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿಯಲ್ಲೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಶಿವಮೊಗ್ಗದ ತೀರ್ಥಹಳ್ಳಿ, ಸಾಗರ, ಹೊಸನಗರ ತಾಲೂಕುಗಳಲ್ಲೂ ಶಾಲೆಗಳಿಗೆ ರಜೆ ನೀಡಲಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲಿಯೂ ರಜೆ ನೀಡಲಾಗಿದೆ. ಹಾಸನದ ಬೇಲೂರು ತಾಲೂಕಿನ ಅರೆಹಳ್ಳಿ, ಚೀಕನಹಳ್ಳಿ ನಾರ್ವೆ ಹೋಬಳಿ, ಆಲೂರು ತಾಲ್ಲೂಕಿನ ಹೊಸಕೋಟೆ, ಕುಂದೂರು, ಪಾಳ್ಯ ಹೋಬಳಿಗಳ ಶಾಲೆ ಕಾಲೇಜುಗಳಿಗೆ ರಜೆ ಫೋಷಿಸಲಾಗಿದೆ.