ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ 9 ಗಂಟೆಗೆ ಸುವರ್ಣ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ದಲಿತ ಎಡಗೈ ಸಮುದಾಯಕ್ಕೆ ಹೆಚ್ಚುವರಿ ಮೀಸಲಾತಿ ಕಲ್ಪಿಸುವಂತೆ ಶಿಫಾರಸ್ಸು ಮಾಡಲಾಗಿರುವ ಸದಾಶಿವ ಅವರ ವರದಿ ಜಾರಿ ವಿಚಾರ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಕಾಂಗ್ರೆಸ್ ನ ಎಡಗೈ ಸಮುದಾಯದ ಶಾಸಕರು ಸದಾಶಿವ ಆಯೋಗದ ವರದಿ ಜಾರಿಯಾದರೆ ರಾಜಕೀಯವಾಗಿ ಲಾಭವಾಗುತ್ತೆ ಅನ್ನೋ ಒತ್ತಡ ತರುತ್ತಿದ್ದರು. ಆದ್ದರಿಂದ ಇಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಲಿದೆ.
Advertisement
Advertisement
ಸಾಮಾಜಿಕ ಆರ್ಥಿಕ ಗಣತಿ ಮತ್ತು ಜಾತಿ ಜನಗಣತಿ ವರದಿ ಬಿಡುಗಡೆ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದ್ದು, ಇದರ ಲಾಭ ನಷ್ಟಗಳ ಬಗ್ಗೆಯೂ ಗಂಭೀರ ಚರ್ಚೆ ನಡೆಯಲಿದೆ. ಚುನಾವಣಾ ಸಂದರ್ಭದಲ್ಲಿ ಬಿಡುಗಡೆ ಆಗುವುದರಿಂದ ಆಗುವ ಲಾಭ-ನಷ್ಟದ ಬಗ್ಗೆ ಚರ್ಚೆ ನಡೆಯುವ ನಿರೀಕ್ಷೆಯಿದೆ. ಎರಡು ವಿಚಾರದಲ್ಲಿ ಶಾಸಕರು ವ್ಯಕ್ತಪಡಿಸುವ ಅಭಿಪ್ರಾಯದ ಬಳಿಕ ಮುಂದಿನ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಕೈಗೊಳ್ಳಲಿದ್ದಾರೆ. ಎರಡು ವರದಿಗಳ ಜಾರಿ ಹಿಂದೆ ದಲಿತ ಪಾಲಿಟಿಕ್ಸ್ ನ ಲಾಭ ನಷ್ಟದ ಲೆಕ್ಜಾಚಾರವಿದೆ ಎನ್ನುವುದು ಸ್ಪಷ್ಟವಾಗಿದೆ.
Advertisement
ಇನ್ನು ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ ವಿಚಾರದಲ್ಲಿ ರಮೇಶ್ ಕುಮಾರ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಏನು ಉತ್ತರ ಕೊಡಲಿದ್ದಾರೆ ಎಂಬ ಕುತೂಹಲ ಸಹಜವಾಗಿದೆ. ಈ ತಿದ್ದುಪಡಿ ಕಾಯ್ದೆ ಜಾರಿ ಆಗದಿದ್ದರೆ ತಾವು ರಾಜೀನಾಮೆಗೂ ಸಿದ್ಧ ಎಂದು ರಮೇಶ್ ಕುಮಾರ್ ಈಗಾಗಲೇ ಸಿಎಂಗೆ ತಿಳಿಸಿದ್ದಾರೆ.
Advertisement
ಮೌಢ್ಯ ಪ್ರತಿಬಂಧಕ ಕಾಯ್ದೆ ಬಗ್ಗೆಯೂ ಚರ್ಚೆ ನಡೆಯಲಿದೆ. ಸದನದಲ್ಲಿ ವಿಪಕ್ಷಗಳ ತಂತ್ರಕ್ಕೆ ಪ್ರತಿತಂತ್ರದ ಬಗ್ಗೆಯೂ ಚರ್ಚೆ ನಡೆಯಲಿದ್ದು, ಚುನಾವಣೆ ಸಮೀಪ ಬರುತ್ತಿದ್ದಂತೆ ಕ್ಷೇತ್ರದಲ್ಲಿ ಸಕ್ರಿಯವಾಗಿರುವಂತೆ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡುವ ಸಾಧ್ಯತೆ ಇದೆ.