
ಮೈಸೂರು: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಚಿರತೆ ದಾಳಿಗೆ ಒಳಗಾದ ಕುಟುಂಬಗಳ ಭೇಟಿ ಮಾಡಿ, ಸಾಂತ್ವನ ಹೇಳಿದ್ದಾರೆ.
ಟಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ಮೃತಪಟ್ಟ 11 ವರ್ಷದ ಬಾಲಕ ಜಯಂತ್ ನಿವಾಸ ಹಾಗೂ ಕನ್ನನಾಯಕನಹಳ್ಳಿ ಗ್ರಾಮದಲ್ಲಿ ಮೃತಪಟ್ಟ ಸಿದ್ದಮ್ಮ ಅವರ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಗ್ರಾಮಸ್ಥರ ಅಹವಾಲು ಆಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಚಿರತೆ ದಾಳಿ ತಡೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಅರಣ್ಯ ಅಧಿಕಾರಿಗಳು, ಜಿಲ್ಲಾಡಳಿತದೊಂದಿಗೆ ಸಭೆ ಕರೆಯಲಾಗಿದೆ. ಸ್ಥಳೀಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತರಲಿದ್ದಾರೆ. ಕಬ್ಬು ಕಟಾವು, ರಸ್ತೆ ಬದಿಯ ಮರದ ರೆಂಬೆ ಕಟಾವು, ಗ್ರಾಮಕ್ಕೆ ಬಸ್ ಸೌಕರ್ಯ, ಬೀದಿದೀಪಗಳ ವ್ಯವಸ್ಥೆ ಕಲ್ಪಿಸುವುದು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವುದರ ಕುರಿತು ಜಿಲ್ಲಾಧಿಕಾರಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತರಲಿದ್ದಾರೆ ಎಂದರು. ಇದನ್ನೂ ಓದಿ: PublicTV Explainer: ಆಹಾರಕ್ಕಾಗಿ ಹೊಡೆದಾಟ.. ಟ್ರಕ್ ಹಿಂದೆ ಓಟ – ಪಾಕ್‌ನಲ್ಲಿ ತುತ್ತು ಕೂಳಿಗೂ ತತ್ವಾರ
ಮುಖ್ಯಮಂತ್ರಿಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಕಠಿಣ ನಿರ್ಧಾರ ಕೈಗೊಳ್ಳಲಿದ್ದಾರೆ. ಮತ್ತೆ ಈ ರೀತಿಯ ಅನಾಹುತ ಮರುಕಳಿಸದಂತೆ ಎಲ್ಲಾ ರೀತಿಯ ಕ್ರಮಕೈಗೊಳ್ಳಲಾಗುವುದು. ಮೃತರ ಕುಟುಂಬ ಸದಸ್ಯರಿಗೆ ಪರಿಹಾರ ಕಲ್ಪಿಸಲಾಗಿದೆ. ಚಿರತೆ ದಾಳಿ ತಡೆಗೆ ಜಿಲ್ಲಾಡಳಿತದ ಜೊತೆ ವಿಶೇಷ ಸಭೆ ನಡೆಸಿ ಪರಿಹಾರ ದೊರಕಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ರಾತ್ರಿ ವೇಳೆ ಬೀದಿದೀಪಗಳ ವ್ಯವಸ್ಥೆ, ಶಾಲೆಗೆ ತೆರಳಲು ಮಕ್ಕಳಿಗೆ ಬಸ್ ಸೌಕರ್ಯ ಕಲ್ಪಿಸಬೇಕು ಎಂಬುದು ಸೇರಿದಂತೆ ನಾನಾ ಸಮಸ್ಯೆಗಳನ್ನು ಗ್ರಾಮಸ್ಥರು ಬಿಚ್ಚಿಟ್ಟರು. ಇದೇ ವೇಳೆ ಗ್ರಾಮಸ್ಥರಿಗೆ ಧೈರ್ಯ ತುಂಬಿದ ಸಚಿವರು, ಚಿರತೆ ದಾಳಿ ತಡೆಗೆ ಶಾಶ್ವತ ಪರಿಹಾರ ದೊರಕಿಸಲು ಕ್ರಮಕೈಗೊಳ್ಳಲಾಗುವುದು.
ಶಾಸಕರಾದ ಎಂ.ಅಶ್ವಿನ್ ಕುಮಾರ್, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಸೇರಿದಂತೆ ಅನೇಕ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.
Live Tv
Join our Whatsapp group by clicking the below link
https://chat.whatsapp.com/E6YVEDajTzH06LOh77r25k