ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ತಗ್ಗಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಕಳೆದೊಂದು ತಿಂಗಳಿಂದ ಆತಂಕ ಸೃಷ್ಟಿಸಿದ್ದ ನಾಲ್ಕು ವರ್ಷದ ಗಂಡು ಚಿರತೆ (Leopard) ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಚಿರತೆ ಸೆರೆಯಿಂದಾಗಿ ಸ್ಥಳೀಯ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ತಗ್ಗಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಳೆದ ಒಂದು ತಿಂಗಳಿನಿಂದ ಚಿರತೆಯ ಸಂಚಾರ ಹೆಚ್ಚಾಗಿತ್ತು. ಜಾನುವಾರು ಹಾಗೂ ನಾಯಿಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ, ಗ್ರಾಮಸ್ಥರಲ್ಲಿ ಭಾರಿ ಭೀತಿಯನ್ನು ಹುಟ್ಟಿಸಿತ್ತು. ಸಂಜೆಯಾಗುತ್ತಿದ್ದಂತೆ ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಇದರಿಂದ ಕಂಗಾಲಾಗಿದ್ದ ಗ್ರಾಮಸ್ಥರು ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಚಿರತೆ ಓಡಾಟ ಹೆಚ್ಚಾಗಿದ್ದ ಸ್ಥಳವನ್ನ ಗುರುತಿಸಿ ಬೋನು ಇರಿಸಿ, ಅದರೊಳಗೆ ನಾಯಿಯನ್ನು ಕಟ್ಟಿದ್ದರು.
ಎಂದಿನಂತೆ ಆಹಾರ ಹುಡುಕಿಕೊಂಡು ಬಂದ ಚಿರತೆ, ಬೋನಿನಲ್ಲಿದ್ದ ನಾಯಿಯನ್ನು ತಿನ್ನಲು ಹೋಗಿ ಬೋನಿನೊಳಗೆ ಸಿಲುಕಿಕೊಂಡಿದೆ. ಸುಮಾರು ನಾಲ್ಕು ವರ್ಷ ಪ್ರಾಯದ ಭಾರಿ ಗಾತ್ರದ ಚಿರತೆ ಬೋನಿಗೆ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ವೀಕ್ಷಿಸಿದರು. ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಸಿಬ್ಬಂದಿ, ಸೆರೆಯಾದ ಚಿರತೆಯನ್ನು ಸುರಕ್ಷಿತವಾಗಿ ಕೊಂಡೊಯ್ದು, ಆರೋಗ್ಯ ತಪಾಸಣೆ ನಡೆಸಿದ ಬಳಿಕ ಬಂಡೀಪುರ ಅಥವಾ ನಾಗರಹೊಳೆ ಅರಣ್ಯ ಪ್ರದೇಶಕ್ಕೆ ಬಿಡಲು ಕ್ರಮ ಕೈಗೊಂಡಿದ್ದಾರೆ. ಚಿರತೆ ಸೆರೆಯಾಗುತ್ತಿದ್ದಂತೆ ಗ್ರಾಮಸ್ಥರು ನಿರಾಳರಾಗಿದ್ದಾರೆ.
