ಹಾಸನ: ಹಗಲು ಹೊತ್ತಿನಲ್ಲೇ ಚಿರತೆಯೊಂದು ಹೊಲ, ಮನೆಗಳ ಸಮೀಪ ಓಡಾಡುತ್ತಿದ್ದು, ಗ್ರಾಮಸ್ಥರು ಕಂಗಾಲಾಗಿದ್ದಾರೆ. ಜೀವ ಕೈಯಲ್ಲೇ ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಗಾನಗರ ಗ್ರಾಮದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಚಿರತೆ ಓಡಾಡುವ ದೃಶ್ಯವನ್ನು ಗ್ರಾಮಸ್ಥರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಹಗಲು ಹೊತ್ತಿನಲ್ಲೇ ಗ್ರಾಮದ ಸುತ್ತ-ಮುತ್ತ ಚಿರತೆ ಜನರ ಕಣ್ಣಿಗೆ ಕಾಣಿಸಿಕೊಳ್ಳುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆಗೆ ತಿಳಿಸಿ ಚಿರತೆ ಹಿಡಿಯುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
Advertisement
ಚಿರತೆಯ ಕಾಟದಿಂದ ಬೇಸತ್ತ ಗ್ರಾಮಸ್ಥರು, ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಹಗಲು ಹೊತ್ತಿನಲ್ಲೇ ಚಿರತೆ ಓಡಾಡುವ ದೃಶ್ಯವನ್ನು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದು, ಚಿರತೆ ದಾಳಿಯಿಂದ ಅನಾಹುತ ಸಂಭವಿಸುವ ಮುನ್ನ ಚಿರತೆ ಸೆರೆ ಹಿಡಿಯಿರಿ. ಇಲ್ಲವಾದಲ್ಲಿ ಆಗುವ ಅನಾಹುತಕ್ಕೆ ನೀವೇ ಹೊಣೆಗಾರರು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.