ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ (NEET Paper Leak) ಸಂಬಂಧ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿಜೆಪಿ (CJP), ವಿದ್ಯಾರ್ಥಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ವಾರಾಂತ್ಯದವರೆಗೆ ಎಲ್ಲಾ ಮದ್ಯದಂಗಡಿಗಳನ್ನು ರಾತ್ರಿ 8 ಗಂಟೆಯೊಳಗೆ ಮುಚ್ಚುವಂತೆ ಸರ್ಕಾರ ಆದೇಶಿಸಿದೆ.
ಸಾಮಾನ್ಯವಾಗಿ ದೆಹಲಿಯ ಮದ್ಯದಂಗಡಿಗಳು (Liquor Shops) ರಾತ್ರಿ 10 ಗಂಟೆಯವರೆಗೆ ಕಾರ್ಯನಿರ್ವಹಿಸುತ್ತವೆ. ಜಂತರ್ ಮಂತರ್‌ನಲ್ಲಿ (Jantar Mantar) ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದೆಹಲಿ ಪೊಲೀಸರ ಸಲಹೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಸರ್ಕಾರದೊಂದಿಗೆ ಡೀಲ್ ಮಾಡಿಕೊಂಡಿಲ್ಲ, ನನ್ನ ಪ್ರಾಮಾಣಿಕತೆಗೆ ಪ್ರಮಾಣಪತ್ರ ಬೇಕೇ? – ಟೀಕಾಕಾರರಿಗೆ ವಾಂಗ್ಚುಕ್ ತಿರುಗೇಟು
ಕಳೆದ ಹಲವು ದಿನಗಳಿಂದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಅದರ ವಿರುದ್ಧ ವಿದ್ಯಾರ್ಥಿಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಭಾಗವಹಿಸಿರುವ ವಿದ್ಯಾರ್ಥಿಗಳು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಇದನ್ನೂ ಓದಿ: ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಖಾತೆ ಓಪನ್ – ಕಂಚು ಗೆದ್ದ ಪೋಲಿಯೊ ಪೀಡಿತ ಝಂದು
ಜುಲೈ 20ರಂದು ಸಿಜೆಪಿ ಕರೆ ನೀಡಿದ್ದ ‘ಸಂಸತ್ ಚಲೋ’ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದಿದ್ದು, ಪ್ರತಿಭಟನಾಕಾರರು ಹಾಗೂ ಕೆಲ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಈ ಬೆಳವಣಿಗೆಯ ಬಳಿಕ ಭದ್ರತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿರುವ ದೆಹಲಿ ಆಡಳಿತ, ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಮದ್ಯದಂಗಡಿಗಳ ಕಾರ್ಯಾಚರಣೆಯ ಅವಧಿಯನ್ನು ತಾತ್ಕಾಲಿಕವಾಗಿ ಕಡಿತಗೊಳಿಸಿದೆ. ಇದನ್ನೂ ಓದಿ: ಅಪರಿಚಿತರಿಂದ ಮನೆ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್ – ಮನೆ ಕಿಟಕಿ, ಕಾರಿನ ಗಾಜು ಪುಡಿಪುಡಿ
