ಬೆಂಗಳೂರು: ಭೋವಿ ಸಮುದಾಯಕ್ಕೆ ಟಿಕೆಟ್ ನೀಡಿಲ್ಲ ಅಂದ್ರೆ ಪಕ್ಷಕ್ಕೆ ರಾಜೀನಾಮೆ ನೀಡುತ್ತೇವೆ ಎಂದು ಬಿಜೆಪಿಯ ಇಬ್ಬರು ಶಾಸಕರು ಎಚ್ಚರಿಕೆ ನೀಡಿದ್ದಾರೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಭೋವಿ ಸಮುದಾಯದ ಅಭ್ಯರ್ಥಿಗೆ ಅವಕಾಶ ನೀಡಬೇಕು ಎಂದು ಜಿಲ್ಲೆಯ ಶಾಸಕರಾದ ಎಂ.ಚಂದ್ರಪ್ಪ ಹಾಗೂ ಗೂಳಿಹಟ್ಟಿ ಶೇಖರ್ ಒತ್ತಡ ಹೇರಿದ್ದಾರೆ. ಒಂದು ವೇಳೆ ನಮ್ಮ ಸಮುದಾಯಕ್ಕೆ ಟಿಕೆಟ್ ನೀಡದಿದ್ದರೆ ಪಕ್ಷಕ್ಕೆ ರಾಜೀನಾಮೆ ನೀಡುತ್ತೇವೆ ಎಂದು ನಾಯಕರಿಗೆ ಖಡಕ್ ಸಂದೇಶ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರವು ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಹೀಗಾಗಿ ಈ ಕ್ಷೇತ್ರದಿಂದ ಭೋವಿ ಸಮುದಾಯದ ನಾಯಕ ಆನೇಕಲ್ ನಾರಾಯಾಣಸ್ವಾಮಿ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಆದರೆ ಸಮುದಾಯದ ಯಾರಿಗೆ ಟಿಕೆಟ್ ನೀಡಿದರೂ ನಮಗೆ ಒಪ್ಪಿಗೆ ಇದೆ ಎಂದು ಶಾಸಕರು ಅಭ್ಯರ್ಥಿಯ ಹೆಸರು ಪ್ರಸ್ತಾಪಿಸದೆ ಬೇಡಿಕೆ ಇಟ್ಟಿದ್ದಾರಂತೆ.
ಚಿತ್ರದುರ್ಗದಲ್ಲಿ ಇತ್ತೀಚೆಗೆ ಭೋವಿ ಸಮಾವೇಶ ನಡೆಸಿ ರಾಜ್ಯದಲ್ಲಿ ಐದು ಮೀಸಲಾತಿ ಕ್ಷೇತ್ರಗಳಿವೆ. ಅವುಗಳಲ್ಲಿ ಒಂದು ಕ್ಷೇತ್ರದ ಟಿಕೆಟ್ ಅನ್ನು ಭೋವಿ ಸಮುದಾಯದ ನಾಯಕರಿಗೆ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗಿತ್ತು. ಆದರೂ ಸ್ಥಳೀಯ ಶಾಸಕರು, ಮುಖಂಡರ ಅಭಿಪ್ರಾಯ ಕೇಳದೆ ಟಿಕೆಟ್ ಫೈನಲ್ ಮಾಡಲಾಗಿದೆ ಎಂದು ಶಾಸಕರು ಅಸಮಾಧಾನ ಹೊರಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.