– ಕೈ ನಾಯಕನ ವಿರುದ್ಧ ರಾಹುಲ್ ಗಾಂಧಿಗಳಿಬ್ಬರು ಕಣಕ್ಕೆ
ತಿರುವನಂತಪುರಂ: ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಸುಮಲತಾ ಹೆಸರಿನ ಮೂವರನ್ನು ಕಣಕ್ಕೆ ಇಳಿಸಲಾಗಿದೆ. ಇದೇ ತಂತ್ರಕ್ಕೆ ಈಗ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಸಿಲುಕಿದ್ದಾರೆ.
ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ರಾಹುಲ್ ಗಾಂಧಿ ಹೆಸರಿನ ಮತ್ತಿಬ್ಬರು ವಯನಾಡು ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸ್‍ಗೆ ಬಿಗ್ ಶಾಕ್ ನೀಡಿದ್ದಾರೆ.
ಕೇರಳ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯಾಗಿರುವ ಎರುಮೆಲೆ ನಿವಾಸಿ ರಾಹುಲ್ ಗಾಂಧಿ ಕೆ.ಇ. ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೆ ಅಖಿಲ ಭಾರತ ಮಕ್ಕಳ್ ಘಟಕದಿಂದ ರಾಹುಲ್ ಗಾಂಧಿ ಕೆ. ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ನಾಯಕನ ವಿರುದ್ಧ ಇಬ್ಬರು ರಾಹುಲ್ ಗಾಂಧಿಗಳು ಸ್ಪರ್ಧೆ ಮಾಡುತ್ತಿದ್ದಾರೆ.
ವಯನಾಡು ಲೋಕಸಭಾ ಕ್ಷೇತ್ರದಿಂದ ಒಟ್ಟು ಮೂವರು ರಾಹುಲ್ ಗಾಂಧಿ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ ಅಲ್ಲದೆ ಕೆ.ಎಂ.ಶಿವಪ್ರಸಾದ್ ಗಾಂಧಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 25 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ವಯನಾಡುನಲ್ಲಿ ಕೂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿದೆ. ಸೋಲಾರ್ ಹಗರಣದ ಪ್ರಮುಖ ಆರೋಪಿ ಸರಿತಾ ಎಸ್ ನಾಯರ್ ಕೂಡ ಸ್ಪರ್ಧೆ ಮಾಡುತ್ತಿದ್ದು, ಕಾಂಗ್ರೆಸ್ ನಾಯಕರಿಗೆ ಬಿಗ್ ಶಾಕ್ ನೀಡಿದೆ.
ಇತ್ತ ರಾಜ್ಯದ ಕಲಬುರಗಿಯಲ್ಲೂ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಮತ ವಿಭಜಿಸಲು, ಜಾಧವ್ ಹೆಸರಿನ ಮೂವರು ಅಭ್ಯರ್ಥಿಗಳು ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ.