ಮಂಗಳೂರು: ಬಿಜೆಪಿ ಭದ್ರಕೋಟೆ ಎಂದೇ ಕರೆಸಿಕೊಳ್ಳುವ ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ (Brijesh Chowta) ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನರ ಮನಸ್ಸನ್ನು ಗೆದ್ದಿದ್ದಾರೆ.
ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ (Padmaraj R. Poojary) ವಿರುದ್ಧ ಸುಮಾರು 1 ಲಕ್ಷ 37 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯದ ಮಾಲೆಗೆ ಕೊರಳೊಡ್ಡಿದ್ದಾರೆ. ಈ ಮೂಲಕ ಚೌಟ ಅವರು ಮೊದಲ ಪ್ರಯತ್ನದಲ್ಲಿಯೇ ಸಂಸತ್ ಪ್ರವೇಶ ಮಾಡಲಿದ್ದಾರೆ.
Advertisement
Advertisement
ಲೋಕಸಭಾ ಚುನಾವಣೆಗೆ (Loksabha Elections 2024) ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ಈ ಬಾರಿ ಹೊಸ ಮುಖಗಳನ್ನೇ ಅಖಾಡಕ್ಕೆ ಇಳಿಸಿದ್ದವು. ಹೀಗಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಪದ್ಮರಾಜ್ ಪೂಜಾರಿ ಹೆಸರು ಕೇಳಿ ಬರುತ್ತಿದ್ದಂತೆಯೇ ಭಾರೀ ಪೈಪೋಟಿ ಇರುತ್ತದೆ ಎಂಬ ಮಾತುಗಳು ಕೇಳಿಬಂದಿತ್ತು. ಇದೀಗ ಚೌಟ ಅವರು 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಪೂಜಾರಿಯವರನ್ನು ಸೋಲಿಸಿದ್ದಾರೆ. ಇದನ್ನೂ ಓದಿ: ಅಂಜಲಿ ನಿಂಬಾಳ್ಕರ್ ವಿರುದ್ಧ ಕಾಗೇರಿಗೆ ಗೆಲುವು- ಉತ್ತರ ಕನ್ನಡದಲ್ಲಿ ಸಂಭ್ರಮಾಚರಣೆ
Advertisement
Advertisement
ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಮಿಥುನ್ ರೈ (Mithun Rai) ಹಾಗೂ ಬಿಜೆಪಿಯಿಂದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಕಣಕ್ಕಿಳಿದಿದ್ದರು. ಈ ವೇಳೆ ಕಟೀಲ್ ಅವರು ಮಿಥುನ್ ರೈ ವಿರುದ್ಧ 2,74,621 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ 57.55 %ರಷ್ಟು ಮತಗಳನ್ನು ಪಡೆದಿತ್ತು.
ದಕ್ಷಿಣ ಕನ್ನಡದಲ್ಲಿ 1951 ರಿಂದ 2019 ರವರೆಗೆ ಒಟ್ಟು 16 ಚುನಾವಣೆಗಳು ನಡೆದಿದೆ. ಇಲ್ಲಿಯವರೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ 8 ಬಾರಿ ಬಿಜೆಪಿ ಅಭ್ಯರ್ಥಿ ಗೆಲುವನ್ನು ಸಾಧಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ 9 ಬಾರಿ ಈ ಕ್ಷೇತ್ರದಿಂದ ಗೆಲುವನ್ನು ಸಾಧಿಸಿದ್ದಾರೆ.