ಭುವನೇಶ್ವರ: ಯುವ ಪ್ರೇಮಿಗಳಿಬ್ಬರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಒಡಿಶಾದ ನಬರಂಗ್ಪುರ್ ಜಿಲ್ಲೆಯಲ್ಲಿ ನಡೆದಿದೆ.
ಈ ಘಟನೆ ನಬರಾಂಗ್ಪುರ್ ಜಿಲ್ಲೆಯ ಚತಗುಡಾ ಗ್ರಾಮದ ಕೊಳದ ಸಮೀಪ ನಡೆದಿದೆ. ಮೃತರಿಬ್ಬರು 16 ವಯಸ್ಸಿನರಾಗಿದ್ದಾರೆ ಎಂದು ಗುರುತಿಸಲಾಗಿದೆ. ತಮ್ಮ ಪ್ರೀತಿಗೆ ಪೋಷಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಇಂದು ಮುಂಜಾನೆ ಕೆಲವು ಸ್ಥಳೀಯರು ಕೊಳದ ಸಮೀಪದ ಹೋದಾಗ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ತಕ್ಷಣ ಪೊಲೀಸರಿಗೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದಾರೆ. ನಂತರ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಬಂದು ಜಿಲ್ಲೆಯ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಪ್ರೇಮಿಗಳಿಬ್ಬರು ಬೇರೆ ಜಾತಿಯಾಗಿದ್ದರಿಂದ ಇವರ ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಮೃತ ಹುಡುಗ 8ನೇ ತರಗತಿವರೆಗೂ ವ್ಯಾಸಂಗ ಮಾಡಿದ್ದು, ನಂತರ ವಿದ್ಯಾಭ್ಯಾಸವನ್ನು ನಿಲ್ಲಿಸಿದ್ದಾನೆ. ಇತ್ತ ಮೃತ ಹುಡುಗಿ ಕೂಡ 10ನೇ ತರಗತಿವರೆಗೂ ಓದಿದ್ದಾಳೆ ಎಂದು ತಿಳಿದು ಬಂದಿದೆ. ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.