ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತದ ಹಿನ್ನೆಲೆ ರಾಜ್ಯದ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಐಎಂಡಿ (IMD) ಎಚ್ಚರಿಸಿದೆ.
ಬೆಂಗಳೂರಿನಲ್ಲಿ (Bengaluru) ತುಂತುರು ಮಳೆಯಾಗಿದ್ದು, ಹಿತವಾದ ಹವಾಮಾನ ಇದೆ. ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತವಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಒಳನಾಡಿನ ಕೆಲವು ಭಾಗಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಮೂರರಿಂದ ಆರು ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಿದ್ದರೆ, ಇನ್ನು ಕೆಲ ಪ್ರದೇಶಗಳಲ್ಲಿ ಮಂಜು ಕವಿದ ವಾತಾವರಣವಿರಲಿದೆ.
ಕಳೆದ 24 ಗಂಟೆಗಳಲ್ಲಿ ವಿಜಯಪುರದಲ್ಲಿ ಶೀತಗಾಳಿ ವಾತಾವರಣ ಕಂಡುಬಂದಿದೆ. ಏತನ್ಮಧ್ಯೆ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತವು ದುರ್ಬಲಗೊಂಡು ಉತ್ತರ ಶ್ರೀಲಂಕಾದ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ ತಿಳಿಸಿದೆ.

