ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಲವಾರು ದಿನಗಳಿಂದ ಖಾಯಂ ವೈದ್ಯಾಧಿಕಾರಿಗಳು ಇಲ್ಲದೆ ರೋಗಗಳು ನರಳಾಡುತ್ತಿದ್ದಾರೆ.
ಕೂಡಿಗೆ ವ್ಯಾಪ್ತಿಯ ರೋಗಿಗಳು ಮಾತ್ರವಲ್ಲದೆ ಮೈಸೂರು ಮತ್ತು ಹಾಸನ ಜಿಲ್ಲೆಗಳಿಂದ ರೋಗಿಗಳು ದಿನಂಪ್ರತಿ ಇಲ್ಲಿಗೆ ಬರುತ್ತಿದ್ದಾರೆ. ಆದರೆ ಇತ್ತೀಚೆಗೆ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯಾಧಿಕಾರಿಗಳು ಇಲ್ಲದ ಕಾರಣ ಬಿಕೋ ಎನ್ನುತ್ತಿದೆ. ಕೂಡಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಒಟ್ಟು 20 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ವೈದ್ಯಾಧಿಕಾರಿಗಳು ಮತ್ತು ನರ್ಸ್ ಇಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ.
Advertisement
Advertisement
ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಚಿಕಿತ್ಸೆ ಲಭ್ಯವಾಗದೆ ದೂರದ ಕುಶಾಲನಗರ ಮತ್ತು ಮಡಿಕೇರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ತೆರಳಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಹಿಂದೆ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಸ್ಥಳೀಯರು ಹಾಗೂ ಅಕ್ಕಪಕ್ಕದ ಊರಿನ ಸುಮಾರು 200ಕ್ಕೂ ಹೆಚ್ಚು ರೋಗಿಗಳು ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಇತ್ತೀಚೆಗೆ ಕೂಡಿಗೆ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳು ಇಲ್ಲದೆ ಕೇವಲ 20 ರಿಂದ 30 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
ಸರ್ಕಾರ ಜನರ ಆರೋಗ್ಯದ ದೃಷ್ಟಿಯಿಂದ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಜನರಿಗೆ ಸರ್ಕಾರದಿಂದ ಉಚಿತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಅಲ್ಲಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ನಿರ್ಮಿಸಿದೆ. ಕೆಲವು ಕಡೆ ಹೊಸ ಆಸ್ಪತ್ರೆ ಕೂಡ ಮಂಜೂರು ಮಾಡಿದೆ. ಆದರೆ ಇದ್ದ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ಎದ್ದು ಕಾಣುತ್ತಿದೆ. ಸರಿಯಾಗಿ ವೈದ್ಯಾಧಿಕಾರಿಗಳು ಇಲ್ಲದೆ ರೋಗಿಗಳು ಪರದಾಡುವಂತಾಗಿದೆ. ಸರ್ಕಾರದ ಗಮನಕ್ಕೆ ಬಂದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕಾಯಿಲೆಯಿಂದ ಬಳಲುತ್ತಿರುವವರಿಗೆ ಸರ್ಕಾರಿ ಆರೋಗ್ಯ ಕೇಂದ್ರಗಳು ಸಮರ್ಪಕವಾಗಿ ಚಿಕಿತ್ಸೆ ಸಿಗದ ಕಾರಣ ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವಂತಾಗಿದೆ ಎಂಬುದು ಆರೋಪಗಳು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.