ನದಿ ನೀರಿನ ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಪ್ರತಿಬಾರಿಯೂ ನೆರೆ ರಾಜ್ಯಗಳು ಖ್ಯಾತೆಯನ್ನು ತೆರೆಯುವುದು ಸಾಮಾನ್ಯವಾಗಿಬಿಟ್ಟಿದೆ. ಕೊಡಗಿನ ತಲಕಾವೇರಿಯಲ್ಲಿ ಹುಟ್ಟುವ ಕಾವೇರಿ ನದಿಗೆ ತಮಿಳುನಾಡು ಕಿರಿಕ್ ಮಾಡುತ್ತಿದ್ದರೆ, ಇತ್ತ ಬೆಳಗಾವಿ ಹುಟ್ಟುವ ಮಹದಾಯಿ ನದಿಗೆ ಗೋವಾ ಕ್ಯಾತೆ ತೆಗೆಯುತ್ತಿದೆ. ಮಹದಾಯಿ ನದಿಯ ತಿರುವು ಯೋಜನೆಯಿಂದ ಗೋವಾಕ್ಕೆ ಮತ್ತು ಪರಿಸರಕ್ಕೆ ಯಾವುದೇ ಧಕ್ಕೆ ಆಗುವುದಿಲ್ಲ ಎಂದು ಅಧ್ಯಯನಗಳು ವರದಿ ನೀಡಿದರೂ ಗೋವಾ ಸರ್ಕಾರ ಮಾತ್ರ ತನ್ನ ಮೊಂಡುವಾದವನ್ನು ಮುಂದುವರೆಸಿಕೊಂಡೆ ಬಂದಿದೆ. ಆದರೆ ಉತ್ತರ ಕರ್ನಾಟಕದ ಜನ ಕುಡಿಯುವ ನೀರಿಗಾಗಿ ತತ್ತರಿಸಿ ಹೋಗಿದ್ದು, ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಈಗ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಮಹದಾಯಿ ಯೋಜನೆ ಎಂದರೆ ಏನು? ವಿವಾದ ಯಾಕೆ ಆರಂಭವಾಯಿತು ಮತ್ತು ಪ್ರಸ್ತುತ ಯೋಜನೆ ಸ್ಥಿತಿಗತಿ ಏನು ಎಂಬುದರ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಮಲಪ್ರಭಾ ನದಿ ಸಂಜೀವಿನಿ ಯಾಕೆ?
ಕಳಸಾ-ಬಂಡೂರಿ ನಾಲಾ ಜೋಡಣೆ ಅಥವಾ ಮಹದಾಯಿ ತಿರುವು ಹೆಸರಿನಿಂದ ಕರೆದುಕೊಳ್ಳುವ ಯೋಜನೆ ಕರ್ನಾಟಕ ಸರ್ಕಾರದ ಒಂದು ಮಹಾತ್ವಾಕಾಂಕ್ಷೆಯ ಯೋಜನೆ. ಈ ಯೋಜನೆಗಳನ್ನು ತಿಳಿದುಕೊಳ್ಳುವ ಮೊದಲು ಬೆಳಗಾವಿ, ಗದಗ್, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಯ ಸಂಜೀವಿನಿ ಎಂದೇ ಕರೆಯಿಸಿಕೊಳ್ಳುವ ಮಲಪ್ರಭಾ ನದಿಯ ಬಗ್ಗೆ ನೀವು ತಿಳಿದುಕೊಳ್ಳಬೇಕು. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಕಣಕುಂಬಿ ಗ್ರಾಮದ ಮಾವೋಲಿ ಪ್ರದೇಶದಲ್ಲಿ ಹುಟ್ಟುವ ಮಲಪ್ರಭಾ ನದಿ ಪಶ್ಚಿಮಾಭಿಮುಖವಾಗಿ ಹರಿಯುತ್ತದೆ. ಈ ರೀತಿಯಾಗಿ ಹರಿದು ಬರುವ ನದಿಗೆ ಬೆಳಗಾವಿ ಜಿಲ್ಲೆಯ ಸವದತ್ತಿ ಬಳಿಯ ನವಿಲುತೀರ್ಥ ಎಂಬಲ್ಲಿ ರೇಣುಕಾಸಾಗರ ಹೆಸರಿನಲ್ಲಿ ಅಣೆಕಟ್ಟನ್ನು ಕಟ್ಟಲಾಗಿದೆ. 1962 ರಲ್ಲಿ ಆರಂಭಿಸಿ, 1972 ರಲ್ಲಿ ಪೂರ್ಣಗೊಂಡ ಈ ಜಲಾಶಯದಲ್ಲಿ 37 ಟಿಎಂಸಿ ನೀರು ಸಂಗ್ರಹವಾಗುತಿತ್ತು. ಈ ಜಲಾಶಯದಲ್ಲಿ ಸಂಗ್ರಹವಾದ ನೀರು ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಕೆಲ ತಾಲೂಕಿನ ಗ್ರಾಮಗಳಿಗೆ ಸಿಗುತಿತ್ತು. ಆದರೆ ಮಳೆ ಕಡಿಮೆಯಾಗುತ್ತಿದ್ದಂತೆ ಈ ಭಾಗದಲ್ಲಿ ನೀರಿನ ಸಮಸ್ಯೆ ಹೆಚ್ಚಾಯಿತು. ಹೀಗಾಗಿ ನವಿಲು ತೀರ್ಥ ಜಲಾಶಯದ ನೀರಿನ ಸಮಸ್ಯೆಯನ್ನು ಪರಿಹರಿಸಲು ಸಿದ್ದವಾದ ಯೋಜನೆಯೇ ಮಹದಾಯಿ ತಿರುವು ಯೋಜನೆ.
ಏನಿದು ಮಹದಾಯಿ ಯೋಜನೆ?
ನವಿಲು ತೀರ್ಥ ಜಲಾಶಯ ನಿರ್ಮಾಣ ಮಾಡುವ ಮೊದಲೇ ಈ ಡ್ಯಾಂನಲ್ಲಿ ನೀರಿನ ಸಂಗ್ರಹ ಕಡಿಮೆ ಆಗಬಹುದು ಎನ್ನುವ ಮುಂದಾಲೋಚನೆ ಸರ್ಕಾರಕ್ಕಿತ್ತು. ಹೀಗಾಗಿ ಈ ಪ್ರದೇಶಗಳ ನದಿಗಳನ್ನು ಮೊದಲು ಜೋಡಿಸಿ, ನಂತರ ಅವುಗಳನ್ನು ಮಲಪ್ರಭೆಗೆ ಜೋಡಿಸಿ, ಕಟ್ಟಲು ಉದ್ದೇಶಿಸಿರುವ ಡ್ಯಾಂಗೆ ಮತ್ತಷ್ಟು ನೀರು ಸಂಗ್ರಹಿಸಲು ಯೋಜನೆ ರೂಪುಗೊಂಡಿತ್ತು. ಮಹದಾಯಿ ಕಣಿವೆಗೆ ಎಲ್ಲ ಉಪ ನದಿಗಳು ಸೇರುವ ಕಾರಣ ಈ ಯೋಜನೆಗೆ ‘ಮಹಾದಾಯಿ ಕಣಿವೆ ತಿರುವು ಯೋಜನೆ’ ಎಂದು ನಾಮಕರಣ ಮಾಡಲಾಯಿತು.
ಮಹದಾಯಿ ನದಿಯ ಪಾತ್ರ ಏನು?
ಮಲಪ್ರಭಾ ನದಿಯಂತೆ ಮಹದಾಯಿ ನದಿ ಕೂಡಾ ಬೆಳಗಾವಿ ಜಿಲ್ಲೆ ಖಾನಾಪೂರ ತಾಲೂಕಿನ ದೇವಗಾವುಡು ಗ್ರಾಮದ ಬಳಿ ಹುಟ್ಟುತ್ತದೆ. ಈ ಮಹದಾಯಿ ನದಿ ಕರ್ನಾಟಕದಲ್ಲಿ 35 ಕಿ.ಮೀ. ಹರಿದು ‘ಸುರಗ’ ಪ್ರದೇಶದಲ್ಲಿ ಗೋವಾ ರಾಜ್ಯ ಪ್ರವೇಶಿಸುತ್ತದೆ. ಗೋವಾದಲ್ಲಿ ‘ಮಾಂಡೋವಿ’ ಹೆಸರಿನಲ್ಲಿ ಕರೆಯುವ ನದಿ ಅಲ್ಲಿ ಸುಮಾರು 45 ಕಿ.ಮೀ. ಹರಿಯುತ್ತದೆ. ಮಹದಾಯಿ ನದಿ ಹಳತಾರಾ, ಕಳಸಾ, ಬಂಡೂರಿ, ಕಾರಂಜೋಳ, ಬೊಮ್ಮನರಿ ದೂದ ಸಾಗರ ಹೀಗೆ ಅನೇಕ ಉಪನದಿಗಳಿಂದ ಕೂಡಿದ ನದಿ ಕಣಿವೆ ಆಗಿದೆ. ಇದು ಹೆಚ್ಚು ಮಳೆಬೀಳುವ ಪ್ರದೇಶವಾಗಿದ್ದು ಸರಾಸರಿ 3,134 ಮಿಲಿಮೀಟರ್ ಮಳೆ ಬೀಳುತ್ತದೆ. ಮಹಾದಾಯಿ ನದಿ ಕಣಿವೆಯಿಂದ ಕಾಲುವೆ ಮೂಲಕ ಮಲಪ್ರಭಾ ನದಿಗೆ ನೀರು ವರ್ಗಾಯಿಸುವುದೇ ಈ ಯೋಜನೆಯ ಉದ್ದೇಶ.
ಮಹದಾಯಿ ನದಿಯಲ್ಲಿ ಯಾವ ರಾಜ್ಯಕ್ಕೆ ಎಷ್ಟು ಪಾಲು?
ಮಹದಾಯಿ ನದಿ 2032 ಚ.ಕಿ.ಮೀ ಜಲನಯನ ಪ್ರದೇಶ ಹೊಂದಿದ್ದು ಕರ್ನಾಟಕದಲ್ಲಿ 375 ಚ.ಕಿ.ಮೀ, ಮಹಾರಾಷ್ಟ್ರದಲ್ಲಿ 77 ಚ.ಕಿ.ಮೀ, ಗೋವಾದಲ್ಲಿ 1580 ಚ.ಕೀ.ಮೀ ಪ್ರದೇಶವನ್ನು ಹೊಂದಿದೆ.
ಕಾಲುವೆ ಜೋಡಣೆ ಹೇಗೆ?
ಗದಗ್, ಧಾರವಾಡ, ಬೆಳಗಾವಿ ಜನರ ನೀರಿನ ಸಮಸ್ಯೆ ಪರಿಹಾರಿಸಲು ಸರ್ಕಾರ ಕಳಸಾ ಹಾಗೂ ಬಂಡೂರಿ ಎಂಬ ಎರಡು ಹೊಸ ಯೋಜನೆಗಳನ್ನು ಆರಂಭಿಸಲು ಮುಂದಾಯಿತು. ಇದಕ್ಕಾಗಿ ಕಳಸಾ ಯೋಜನೆಯಲ್ಲಿ ಮೊದಲು ಕಳಸಾ ನದಿಗೆ ಅಣೆಕಟ್ಟು ಹಾಗೂ 4.8 ಕಿ.ಮಿ. ಉದ್ದದ ಕಾಲುವೆ ನಿರ್ಮಾಣ ಮಾಡುವುದು, ಇನ್ನೊಂದು ಹಳತಾರಾ ನದಿಗೆ ಅಣೆಕಟ್ಟು ನಿರ್ಮಿಸಿ ಅಲ್ಲಿ ಸಂಗ್ರಹವಾದ ನೀರನ್ನು 5.5 ಕಿ.ಮೀ. ಉದ್ದದ ಕಾಲುವೆಯ ಮೂಲಕ ಕಳಸಾ ಅಣೆಕಟ್ಟೆಗೆ ಸಾಗಿಸುವ ಉದ್ದೇಶದೊಂದಿಗೆ ಈ ಕಾಮಗಾರಿ ಆರಂಭವಾಯಿತು. ಬಂಡೂರಿ ಯೋಜನೆಯಲ್ಲಿ ಸಿಂಗಾರ ನಾಲಾ ಹಾಗೂ ವಾಟಿ ನಾಲಾಗಳಿಗೆ ಅಣೆಕಟ್ಟು ಕಟ್ಟಿ ಸಂಗ್ರಹವಾದ ನೀರನ್ನು ಬಂಡೂರಿ ಜಲಾಶಯಕ್ಕೆ ವರ್ಗಾಯಿಸುವುದು. ಇಲ್ಲಿ ಸಂಗ್ರಹವಾದ 4 ಟಿಎಂಸಿ ನೀರನ್ನು 5.15 ಕಿ.ಮೀ ಕಾಲುವೆ ಮೂಲಕ ಮಲಪ್ರಭಾ ನದಿಗೆ ವರ್ಗಾಯಿಸುವ ಯೋಜನೆಯನ್ನು ಸರ್ಕಾರ ರೂಪಿಸಿತು.
ಯೋಜನೆ ಆರಂಭಗೊಂಡು ಅರ್ಧದಲ್ಲಿ ನಿಂತ ಕಥೆ:
ಸಮುದ್ರಕ್ಕೆ ಹರಿದು ಹೋಗುವ ನೀರನ್ನು ಕುಡಿಯುವ ನೀರಿಗಾಗಿ ಬಳಸಿಕೊಳ್ಳುವ ಚಿಂತನೆ ಆರಂಭವಾದ ಹಿನ್ನೆಲೆಯಲ್ಲಿ 1978ರಲ್ಲಿ ಮುಖ್ಯಮಂತ್ರಿಯಾಗಿದ್ದ ಆರ್.ಗುಂಡೂರಾವ್ ಅವರು ಎಸ್.ಆರ್.ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ ವರದಿ ನೀಡುವಂತೆ ಸೂಚಿಸಿದರು. 1980ರಲ್ಲಿ ವರದಿ ನೀಡಿದ ಸಮಿತಿ ಯೋಜನೆಯನ್ನು ಜಾರಿಗೊಳಿಸಬಹುದು ಎಂದು ಸರ್ಕಾರಕ್ಕೆ ಶಿಫಾರಸು ಮಾಡಿತು. ಕರ್ನಾಟಕ ಸರ್ಕಾರ 1988ರಲ್ಲಿ ಯೋಜನೆಗೆ ಒಪ್ಪಿಗೆ ನೀಡಿತು. ಆದರೆ, ಗೋವಾ ಸರ್ಕಾರದಿಂದ ಇದಕ್ಕೆ ವಿರೋಧ ವ್ಯಕ್ತವಾಯಿತು. ಈ ವೇಳೆ ಎಸ್.ಆರ್.ಬೊಮ್ಮಾಯಿ ಅವರು 1989ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಅಂದಿನ ಗೋವಾ ಮುಖ್ಯಮಂತ್ರಿ ಪ್ರತಾಪ್ ಸಿಂಗ್ ರಾಣಾ ಜೊತೆ ಮಾತುಕತೆ ನಡೆಸಿದರು. ಮಾತುಕತೆ ಫಲಪ್ರದವಾಗಿ ಯೋಜನೆಗೆ ಗೋವಾ ಒಪ್ಪಿಗೆ ನೀಡಿತು. 2000ದಲ್ಲಿ ಕಳಸಾ-ಬಂಡೂರಿ ನಾಲೆ ಯೋಜನೆಗೆ ಅರಣ್ಯ ಇಲಾಖೆಯೂ ಅನುಮತಿ ನೀಡಿತು. ಬಂಡೂರಿ ನಾಲಾ ಯೋಜನೆಗೆ 49.20 ಕೋಟಿ ರೂ. ಕಳಸಾ ನಾಲಾ ಯೋಜನೆಗೆ 44.78 ಕೋಟಿ ರೂ. ವೆಚ್ಚ ಮಾಡಲು ಆಡಳಿತಾತ್ಮಕ ಒಪ್ಪಿಗೆ ಸಿಕ್ಕಿತು. 2002ರ ಏ.30ರಂದು ಕಳಸಾ ಬಂಡೂರಿ ಕಾಲುವೆ ಮೂಲಕ ನೀರನ್ನು ಹರಿಸಲು ವಾಜಪೇಯಿ ನೃತೃತ್ವದ ಕೇಂದ್ರ ಸರ್ಕಾರದ ಜಲಸಂಪನ್ಮೂಲ ಸಚಿವಾಲಯವೂ ಒಪ್ಪಿಗೆ ನೀಡಿತು. ಆದರೆ 2002ರ ಮೇನಲ್ಲಿ ಗೋವಾ ಸರ್ಕಾರ ಯೋಜನೆ ಬಗ್ಗೆ ತಕರಾರು ಎತ್ತಿದ ಪರಿಣಾಮ ಈ ಯೋಜನೆ ಈಗ ಅರ್ಧದಲ್ಲೇ ನಿಂತಿದೆ.
ಕಾಮಗಾರಿಗೆ ತಡೆ ನೀಡುತ್ತಿರುವ ಗೋವಾದ ವಾದವೇನು?
ಮೊದಲನೆಯದಾಗಿ ಮಹದಾಯಿ ನೀರಿನ ಕೊರತೆಯನ್ನು ಅನುಭವಿಸುತ್ತಿರುವ ಒಂದು ಕಣಿವೆ ಪ್ರದೇಶ. ಹೀಗಾಗಿ ಈ ಕಣಿವೆಯಲ್ಲಿ ಹರಿಯುವ ನೀರನ್ನು ವರ್ಗಾಯಿಸಬಾರದು. ಎರಡನೇಯದಾಗಿ ಮಹದಾಯಿ ನದಿಯನ್ನು ತಿರುವು ಮಾಡಿದರೆ ಪಶ್ಚಿಮ ಘಟ್ಟದ ಪರಿಸರದ ಮೇಲೆ ಪರಿಣಾಮ ಬೀರುತ್ತದೆ. ಮೂರನೇಯದಾಗಿ ಈ ನೀರಿನಲ್ಲಿ ವಾಸ ಮಾಡುತ್ತಿರುವ ಸಿಗಡಿ ಮೀನು ನಮಗೆ ಅಮೂಲ್ಯವಾಗಿದೆ. ಸಿಹಿ ನೀರಿನಲ್ಲಿ ಮಾತ್ರ ಬದುಕಬಲ್ಲ ಈ ಮೀನು ಗೋವಾಕ್ಕೆ ಬರುವ ಪ್ರವಾಸಿಗರಿಗೆ ಅಚ್ಚುಮೆಚ್ಚು. ಒಂದು ವೇಳೆ ನೀರಿನ ಸಮಸ್ಯೆಯಾಗಿ ಮೀನು ಉತ್ಪಾದನೆ ಕಡಿಮೆಯಾದರೆ ಪ್ರವಾಸೋದ್ಯಮದ ಮೇಲೆ ನೇರ ಹೊಡೆತ ಬೀಳುತ್ತದೆ. ಹೀಗಾಗಿ ಮಹಾದಾಯಿ ನದಿಯ ನೀರು ತನ್ನ ರಾಜ್ಯದ ಮೂಲಕವೇ ಹಾದು ಹೋಗಬೇಕೆಂಬ ವಾದವನ್ನು ಮುಂದಿಟ್ಟುಕೊಂಡು ಬಂದಿದೆ.
ಮಹಾರಾಷ್ಟ್ರದ ಕಿರಿಕ್ ಏನು?
ಮಹಾರಾಷ್ಟ್ರದಲ್ಲಿ 77 ಚ.ಕಿ.ಮೀನಷ್ಟು ದೂರದವರೆಗೆ ಮಹದಾಯಿ ನದಿ ಹರಿಯುತ್ತದೆ. ಮಲಪ್ರಭಾ ಅಚ್ಚುಕಟ್ಟು ಪ್ರದೇಶದಲ್ಲಿ ಯಾವುದೇ ತಡೆಗೋಡೆಗಳನ್ನ ನಿರ್ಮಿಸಬಾರದೆಂಬ ಕೇಂದ್ರ ಜಲ ಮಂಡಳಿ ಆದೇಶ ನೀಡಿದ್ದರೂ ಮಹಾರಾಷ್ಟ್ರ ಸರ್ಕಾರ ತನ್ನ ವ್ಯಾಪ್ತಿಯಲ್ಲಿ ಒಟ್ಟು 9 ಬ್ಯಾರೇಜ್ ನಿರ್ಮಿಸಿ, ಅದಕ್ಕೆ ತಿಲಹರಿ ಜಲಾಶಯ ಎಂದು ಹೆಸರಿಟ್ಟಿತು. ಈ ಪೈಕಿ 7 ಬ್ಯಾರೇಜ್ ನೀರು, ಕರ್ನಾಟಕದ ಅರಣ್ಯ ಪ್ರದೇಶವನ್ನ ಹಾಳು ಮಾಡಿತು. ಒಂದು ವೇಳೆ ಮಹದಾಯಿ ನದಿ ತಿರುವುಗೊಂಡರೆ ನಮ್ಮ ರಾಜ್ಯದ ಜನರಿಗೆ ಸಮಸ್ಯೆ ಆಗುತ್ತದೆ ಎನ್ನುವ ವಾದವನ್ನು ಮಂಡಿಸಿದೆ.
ಕರ್ನಾಟಕದ ವಾದ ಏನು?
ನಾವು ಈ ಯೋಜನೆಯನ್ನು ವಿದ್ಯುತ್ ಅಥವಾ ಇನ್ಯಾವುದೇ ಯೋಜನೆಗಾಗಿ ಆರಂಭಿಸಿಲ್ಲ. ಕುಡಿಯುವ ನೀರಿಗಾಗಿ ನಾವು ಈ ಯೋಜನೆಯನ್ನು ಆರಂಭಿಸಿದ್ದೇವೆ. ನದಿ ನೀರಿನ ಹಂಚಿಕೆ ವಿಚಾರದಲ್ಲಿ ಕುಡಿಯುವ ನೀರಿಗೆ ಮೊದಲು ಆದ್ಯತೆ ನೀಡಬೇಕೆಂದು ಅಂತಾರಾಷ್ಟ್ರೀಯ ಜಲ ನೀತಿ ಹೇಳಿದೆ. ಅಷ್ಟೇ ಅಲ್ಲದೇ ಈ ಯೋಜನೆ ಆರಂಭಗೊಂಡರೂ ಗೋವಾ ರಾಜ್ಯಕ್ಕೆ ಯಾವುದೇ ಸಮಸ್ಯೆ ಆಗುವುದಿಲ್ಲ. ಹೀಗಾಗಿ ನಮ್ಮ ಯೋಜನೆ ನ್ಯಾಯಸಮ್ಮತವಾಗಿದೆ ಎಂದು ವಾದವನ್ನು ನ್ಯಾಯಾಲಯಕ್ಕೆ ತಿಳಿಸಿತ್ತು.
ಯೋಜನೆಯಿಂದ ಪರಿಸರದ ಮೇಲೆ ಹಾನಿ ಆಗುತ್ತಾ?
ಗೋವಾ ಸರ್ಕಾರ ಈ ಯೋಜನೆ ಆರಂಭಗೊಂಡರೆ ಪರಿಸರ ಹಾಳಾಗುತ್ತದೆ ಎನ್ನುವ ವಾದ ಮಂಡಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ಈ ಯೋಜನೆಯ ಬಗ್ಗೆ ಅಧ್ಯಯನ ನಡೆಸಬೇಕೆಂದು ಕೇಳಿಕೊಂಡಿತ್ತು. ಹೀಗಾಗಿ ಕೇಂದ್ರ ಸರ್ಕಾರದ ಸಲಹೆಯಂತೆ ‘ನೀರಿ’ ಸಂಸ್ಥೆ 1997ರಲ್ಲಿ ಅಧ್ಯಯನ ನಡೆಸಿತು. ತನ್ನ ವರದಿಯಲ್ಲಿ ನೀರಿ, ಈ ಯೋಜನೆಯಿಂದ ಪರಿಸರದ ಮೇಲೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ, ಮುಂಗಾರು ನಂತರದ ನದಿಯ ನೀರಿನ ಹರಿವಿನಲ್ಲೂ ಯಾವುದೇ ವ್ಯತ್ಯಾಸ ಆಗುವುದಿಲ್ಲ ಎಂದು ತಿಳಿಸಿದೆ. ನೀರಿ ಅಲ್ಲದೇ ಕೇಂದ್ರ ಜಲ ಆಯೋಗದ ಅಧ್ಯಯನದಲ್ಲಿ 200 ಟಿಎಂಸಿ ನೀರು ಯಾವುದೇ ನೆರೆ ರಾಜ್ಯಗಳು ಬಳಸದೇ ಅನುಪಯುಕ್ತವಾಗಿ ಅರಬ್ಬಿ ಸಮುದ್ರವನ್ನು ಸೇರುತ್ತದೆ ಎಂದು ತಿಳಿಸಿತ್ತು. ಅಧ್ಯಯನಗಳು ವರದಿ ನೀಡಿದರೂ ಗೋವಾ ಈಗಲೂ ತನ್ನ ಮೊಂಡುವಾದವನ್ನು ಮುಂದುವರೆಸಿಕೊಂಡೆ ಬಂದಿದೆ.
ನ್ಯಾಯಾಧಿಕರಣ ರಚಿಸಲು ಗೋವಾ ಪಟ್ಟು:
ಈ ವಿಚಾರ ಇತ್ಯರ್ಥ ಆಗಬೇಕಾದರೆ ಅದು ನ್ಯಾಯಾಧಿಕರಣದಿಂದ ಮಾತ್ರ. ಹೀಗಾಗಿ ನ್ಯಾಯಾಧಿಕರಣ ರಚಿಸಿ ಎಂದು 2002ರಲ್ಲಿ ಕೇಂದ್ರ ಸರ್ಕಾರವನ್ನು ಗೋವಾ ಕೇಳಿಕೊಂಡಿತು. 2006ರಲ್ಲಿ ಕರ್ನಾಟಕ ಆರಂಭಿಸಿರುವ ಕಳಸಾ ಬಂಡೂರಿ ಯೋಜನೆಗೆ ತಡೆ ನೀಡಿ ಮತ್ತು ನ್ಯಾಯಾಧಿಕರಣವನ್ನು ರಚಿಸುವುಂತೆ ಸುಪ್ರೀಂ ಕೋರ್ಟ್‍ನಲ್ಲಿ ಮನವಿ ಮಾಡಿಕೊಂಡಿತು. 2006ರಲ್ಲಿ ಕೇಂದ್ರದ ಪರಿಸರ ಮಂತ್ರಾಲಯ, ಈ ಯೋಜನೆಯನ್ನು ಮಾತುಕತೆ ಮೂಲಕ ಬಗೆ ಹರಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ 1956ರ ಅಂತರ್ ರಾಜ್ಯ ಜಲ ವಿವಾದ ಕಾಯ್ದೆಯ ಮೆರೆಗೆ ಮುಂದಿನ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಕರ್ನಾಟಕ ಸರ್ಕಾರಕ್ಕೆ ತಿಳಿಸಿತು. 2010 ಜೂನ್‍ನಲ್ಲಿ ಕರ್ನಾಟಕ, 2010ರ ಅಕ್ಟೋಬರ್ ನಲ್ಲಿ ಮಹಾರಾಷ್ಟ್ರ ಸರ್ಕಾರ ಕೇಂದ್ರಕ್ಕೆ ನ್ಯಾಯಾಧಿಕರಣ ರಚಿಸುವಂತೆ ಮನವಿ ಮಾಡಿತು. ಅಂತಿಮವಾಗಿ ಕೇಂದ್ರ ಸರ್ಕಾರ ನವೆಂಬರ್ 16 ರಂದು 2010ರಂದು ‘ಮಹದಾಯಿ ಜಲ ವಿವಾದ ನ್ಯಾಯಧಿಕರಣ’ವನ್ನು ರಚಿಸಿದ್ದು, ಈಗ ಈ ಯೋಜನೆ ವಿವಾದ ನ್ಯಾಯಾಧಿಕರಣದ ಅಂಗಳದಲ್ಲಿದೆ. ಮೂರು ರಾಜ್ಯ ಸರ್ಕಾರಗಳು ನ್ಯಾಯಾಧಿಕರಣ ನೀಡುವ ತೀರ್ಪಿಗೆ ನಾವು ಬದ್ಧರಾಗಿರುತ್ತೇವೆ ಎನ್ನುವ ಪ್ರಮಾಣಪತ್ರವನ್ನು ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿವೆ.
ಪ್ರಸ್ತುತ ಈ ಕಾಮಗಾರಿಗಳ ಸ್ಥಿತಿ ಗತಿ ಹೇಗಿದೆ?
ಗೋವಾ ಸರ್ಕಾರ ಕಿರಿಕಿರಿ ಮತ್ತು ನಮ್ಮ ರಾಜ್ಯ ಸರ್ಕಾರಗಳ ರಾಜಕೀಯದಿಂದಾಗಿ ಈ ಯೋಜನೆ ಆರಂಭವಾಗಲೇ ಇಲ್ಲ. ಆದರೆ 2006ರಲ್ಲಿ ಬಿಜೆಪಿ- ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನೀರಾವರಿ ಮಂತ್ರಿಯಾಗಿದ್ದ ಕೆ.ಎಸ್.ಈಶ್ವರಪ್ಪ ಕಳಸಾ ನಾಲಾ ಯೋಜನೆಗೆ ಚಾಲನೆ ನೀಡಿದರು. ಕುಂಟುತ್ತಾ, ತೆವಳುತ್ತಾ ಕಾಮಗಾರಿ ಆರಂಭವಾಯಿತು. ಈ ಯೋಜನೆಯಲ್ಲಿ ತಾತ್ಕಾಲಿಕ ಬಂಡ್ ನಿರ್ಮಾಣ ಅಗತ್ಯವಾಗಿತ್ತು. ಈ ತಾತ್ಕಾಲಿಕ ಬಂಡ್ ನಿರ್ಮಾಣಕ್ಕೆ ಕೇಂದ್ರ ಜಲ ಮಂಡಳಿ ಒಪ್ಪಿಗೆ ನೀಡಿತು. ಆದರೆ ಸುಮ್ಮನೇ ಕೂರದ ಗೋವಾ ರಾಜ್ಯ ಇದನ್ನ ವಿರೋಧಿಸಿರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಮೊರೆ ಹೋಗಿ, ಅಲ್ಲಿಂದ ತಡೆಯಾಜ್ಞೆಗೆ ಪ್ರಯತ್ನಿಸಿತು. ಆಗ ಸುಪ್ರೀಂಕೋರ್ಟ್ 6 ತಿಂಗಳ ಕಾಲಾವಧಿಯಲ್ಲಿ ಈ ಬಗ್ಗೆ ದಾಖಲೆಗಳನ್ನು ತಂದು ತೋರಿಸುವಂತೆ ಸೂಚಿಸಿತು. ಹೀಗೆ ಮೂರು ಬಾರಿ ವಿನಾಕಾರಣ ಕ್ಯಾತೆ ತೆಗೆದ ಗೋವಾ ಸರ್ಕಾರ ಒಂದೂವರೆ ವರ್ಷ ಹಾಳು ಮಾಡಿತು. ಮೂರು ಬಾರಿ 6 ತಿಂಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್, ಕೊನೆಗೆ ಛೀಮಾರಿ ಹಾಕಿ ಕೊನೆಗೆ ಗೋವಾದ ಅರ್ಜಿಯನ್ನು ವಜಾಗೊಳಿಸಿತು. ಆಗಲೇ ರಾಜ್ಯ ಸರಕಾರ ಈ ಕಾಮಗಾರಿ ಬಗ್ಗೆ ಗಂಭೀರವಾಗಿ ಚಿಂತಿಸಿ, ಶೀಘ್ರವಾಗಿ ಪೂರ್ಣಗೊಳಿಸಲು ಯೋಚಿಸಬಹುದಿತ್ತು. ಆದರೆ ರಾಜಕಾರಣದಿಂದಾಗಿ ಗುತ್ತಿಗೆದಾರರನ್ನು ಬದಲಾಯಿಸುವುದು ಮತ್ತೆ ಬೇರೆಯವರಿಗೆ ನೀಡಿದ ಕಾರಣ ಕಾಮಗಾರಿ ವಿಳಂಬವಾಯಿತು. ಪ್ರಸ್ತುತ ಕಳಸಾ ನಾಲದ 5.5 ಕಿ.ಮೀ ಉದ್ದದ ಕಾಮಗಾರಿಯಲ್ಲಿ ಶೇ.95 ಭಾಗ ಪೂರ್ಣಗೊಂಡಿದೆ. ಬಂಡೂರಿ ನಾಲಾ ಯೋಜನೆಯ ಕಾಮಗಾರಿಗೆ ಚಾಲನೆಯೇ ಸಿಕ್ಕಿಲ್ಲ.
ಪ್ರಸ್ತುತ ಕೇಂದ್ರ ಸರ್ಕಾರದ ನಿಲುವು ಏನಿದೆ?
ಪ್ರಧಾನಿ ಮಧ್ಯಸ್ಥಿಕೆ ವಹಿಸಿದ್ದಲ್ಲಿ ಸಮಸ್ಯೆ ಪರಿಹಾರವಾಗಬಹುದು ಎನ್ನುವ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ವಪಕ್ಷ ನಿಯೋಗ 2015 ಆಗಸ್ಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿತ್ತು. ಈ ವೇಳೆ ಪ್ರಧಾನಿ, “ಪ್ರಸ್ತುತ ವಿವಾದ ನ್ಯಾಯಾಧಿಕರಣದ ಮುಂದೆ ಇದೆ. ಮಹಾರಾಷ್ಟ್ರ, ಗೋವಾ ಹಾಗೂ ಕರ್ನಾಟಕದ ರಾಜ್ಯದ ಮೂವರು ಮುಖ್ಯಮಂತ್ರಿಗಳು ಸೇರಿ ಮೊದಲು ಮಾತನಾಡಿಕೊಂಡು ಬನ್ನಿ. ಅಷ್ಟೇ ಅಲ್ಲದೇ ಈ ರಾಜ್ಯಗಳ ವಿರೋಧ ಪಕ್ಷಗಳನ್ನು ಮನವೊಲಿಸಿ” ಎಂಬುದಾಗಿ ನಿಯೋಗಕ್ಕೆ ಸೂಚಿಸಿದ್ದಾರೆ ಎಂದು ಕರ್ನಾಟಕದ ಬಿಜೆಪಿ ನಾಯಕರು ತಿಳಿಸಿದ್ದರು.
2017ರ ಡಿಸೆಂಬರ್ ನಲ್ಲಿ ಏನಾಯ್ತು?
2018 ವಿಧಾನಸಭೆ ಚುನಾವಣೆ ನಡೆಯುವ ಕಾರಣ ಮಹದಾಯಿ ವಿಚಾರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡ ರಾಜ್ಯದ ಬಿಜೆಪಿ ನಾಯಕರು ದೆಹಲಿಯಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಜೊತೆ ಸಂಧಾನ ಸಭೆ ನಡೆಸಿದರು. ಈ ಸಂಧಾನ ಸಭೆಯ ಬಳಿಕ ಮಾನವೀಯತೆ ದೃಷ್ಟಿಯಿಂದ ನೀರು ಬಿಡಲು ಒಪ್ಪಿಗೆ ನೀಡುತ್ತೇನೆ ಎಂದು ಪರಿಕ್ಕರ್ ಬಿಎಸ್ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದರು. ಈ ಪತ್ರವನ್ನು ಬಿಎಸ್‍ವೈ ಹುಬ್ಬಳ್ಳಿಯಲ್ಲಿ ನಡೆದ ಪರಿವರ್ತನಾ ಯಾತ್ರೆಯಲ್ಲಿ ಓದಿದರು. ಆದರೆ ಮಹದಾಯಿ ಹೋರಾಟಗಾರರು ಈ ರೀತಿಯ ಪತ್ರ ಬರೆಯುದರಿಂದ ವಿವಾದ ಪರಿಹಾರವಾಗುವುದಿಲ್ಲ. ಕೂಡಲೇ ವಿವಾದವನ್ನು ಪರಿಹರಿಸುವಂತೆ ಆಗ್ರಹಿಸಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪ್ರತಿಭಟಿಸಿದರು. ಅಷ್ಟೇ ಅಲ್ಲದೇ ಡಿಸೆಂಬರ್ 27 ರಂದು ಉತ್ತರ ಕರ್ನಾಟಕ ಬಂದ್ ಗೆ ಕರೆ ನೀಡಿದರು.
ಬಿಜೆಪಿ ಆರೋಪ ಏನು?
ಗೋವಾದಲ್ಲಿರುವ ಬಿಜೆಪಿ ಮಹದಾಯಿ ನೀರನ್ನು ಹರಿಸಲು ಒಪ್ಪಿಗೆ ನೀಡಿದೆ. ಆದರೆ ಅಲ್ಲಿನ ಕಾಂಗ್ರೆಸ್ ಒಪ್ಪಿಗೆ ನೀಡಿಲ್ಲ. 2007ರಲ್ಲಿ ಚುನಾವಣಾ ಭಾಷಣದ ವೇಳೆ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರು ಮಹದಾಯಿ ನೀರನ್ನು ಕರ್ನಾಟಕಕ್ಕೆ ಹರಿಸಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ನಮ್ಮ ವಿರುದ್ಧ ಪ್ರತಿಭಟಿಸುವ ಬದಲು ಕಾಂಗ್ರೆಸ್ ವಿರುದ್ಧ ಪ್ರತಿಭಟಿಸಿ. ನಾವು ನೀರು ತರಲು ಸಿದ್ಧರಿದ್ದೇವೆ ಎಂದು ಹೇಳುತ್ತಿದ್ದಾರೆ.
ಕಾಂಗ್ರೆಸ್ ಆರೋಪ ಏನು?
ಈಗ ಕೇಂದ್ರದಲ್ಲಿ ಮತ್ತು ಗೋವಾದಲ್ಲಿ ಬಿಜೆಪಿ ಸರ್ಕಾರವಿದೆ. ಹೀಗಾಗಿ ರಾಜ್ಯದ ಬಿಜೆಪಿ ನಾಯಕರು ಮನಸ್ಸು ಮಾಡಿದರೆ ನೀರು ತರುವುದು ಸುಲಭ. ಪ್ರಧಾನಿ ಮೋದಿಗೆ ಒತ್ತಡ ಹಾಕಿದರೆ ಮಹದಾಯಿ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಆದರೆ ಮೋದಿ ಮಹದಾಯಿ ವಿಚಾರದಲ್ಲಿ ಮೌನಕ್ಕೆ ಶರಣಾಗಿದ್ದಾರೆ ಎಂದು ಆರೋಪಿಸುತ್ತಿದೆ. ಅಷ್ಟೇ ಅಲ್ಲದೇ ಗೋವಾದ ಸರ್ಕಾರಕ್ಕೆ ನಾವು ಪತ್ರ ಬರೆದರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಯಡಿಯೂರಪ್ಪನವರಿಗೆ ಪತ್ರ ಬರೆಯುವ ಮೂಲಕ ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದೆ.
– ಜಾವೇದ್ ಅಧೋನಿ, ಮುರಳೀಧರ್, ಅಶ್ವಥ್ ಸಂಪಾಜೆ