ಮುಂಬೈ: ಮಹಾರಾಷ್ಟ್ರ ಸರ್ಕಾರ ರಚನೆಯ ಹಗ್ಗಜಗ್ಗಾಟ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ಸರ್ಕಾರ ರಚಿಸುವಂತೆ ರಾಜ್ಯಪಾಲರು ಆಹ್ವಾನ ನೀಡಿದ್ದಾರೆ.
ವಿಧಾನಸಭಾ ಚುನಾವಣೆ ನಡೆದು 15 ದಿನ ಕಳೆದರು ಇನ್ನೂ ಯಾವುದೇ ಪಕ್ಷ ಸರ್ಕಾರ ರಚಿಸುವ ಕುರಿತು ಹಕ್ಕು ಮಂಡಿಸದೇ ಇದ್ದ ಕಾರಣ ಬಿಜೆಪಿ ನಾಯಕ, ಉಸ್ತುವಾರಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‍ಗೆ ಹಕ್ಕು ಮಂಡಿಸಿ ಸರ್ಕಾರ ರಚಿಸಲು ಅವಕಾಶ ನೀಡಿದ್ದು ಸೋಮವಾರದೊಳಗೆ ಬಹುಮತ ಸಾಬೀತಿಗೆ ಸೂಚಿಸಲಾಗಿದೆ. ಇದು ಸಾಧ್ಯವಾಗದಿದ್ದರೆ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುವ ಸಾಧ್ಯತೆ ಇದೆ.
ಬಿಜೆಪಿ ಹಾಗೂ ಶಿವಸೇನೆ ಪಕ್ಷಗಳು ತಾವು ಸರ್ಕಾರ ರಚಿಸಲು ಸಿದ್ಧ ಎಂದು ಹೇಳಿವೆ. ಅಕ್ಟೋಬರ್ 21ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, ಶಿವಸೇನೆ ಪಕ್ಷಗಳು 161 ಸ್ಥಾನಗಳನ್ನು ಗೆದ್ದುಕೊಂಡಿವೆ. ಆದರೆ, ಅಧಿಕಾರ ಹಂಚಿಕೆ ಕುರಿತು ಎರಡೂ ಪಕ್ಷಗಳಲ್ಲಿ ಭಿನ್ನಾಭಿಪ್ರಾಯ ಉಂಟಾಗಿ ಇದುವರೆಗೂ ಸರ್ಕಾರ ರಚಿಸಲು ಸಾಧ್ಯವಾಗಿಲ್ಲ. ಎರಡೂವರೆ ವರ್ಷಗಳ ಅವಧಿಗೆ ಮುಖ್ಯಮಂತ್ರಿ ಹುದ್ದೆ ಕೊಡಲೇಬೇಕು ಎಂದು ಶಿವಸೇನೆ ಹಠ ಹಿಡಿದಿರುವುದು ಬಿಜೆಪಿ ಪಾಲಿಗೆ ಮುಳುವಾಗಿದೆ.
ಶುಕ್ರವಾರ ವಿಧಾನಸಭಾ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಫಡ್ನವಿಸ್ ರಾಜೀನಾಮೆ ನೀಡಿದ್ದರು. ಮಧ್ಯಾಹ್ನ ದಕ್ಷಿಣ ಮುಂಬೈನಲ್ಲಿರುವ ರಾಜ್ ಭವನದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ದೇವೇಂದ್ರ ಫಡ್ನವೀಸ್ ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮಗೆ ಇಷ್ಟು ದಿನ ಆಡಳಿತ ನಡೆಸಲು ಅವಕಾಶ ಕೊಟ್ಟಿದ್ದಕ್ಕಾಗಿ ಪ್ರಜೆಗಳಿಗೆ ಧನ್ಯವಾದ ಹೇಳಿದರು. ಜೊತೆಗೆ 5 ವರ್ಷಗಳ ತಮ್ಮ ಸರ್ಕಾರದ ಸಾಧನೆಗಳನ್ನು ತಿಳಿಸಿದರು. ನಾವು ಮಹಾರಾಷ್ಟ್ರದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ. ಹಾಗಾಗಿಯೇ ಈ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷವು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಹೇಳಿದ್ದರು.
ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಗೆ ಕರೆ ಮಾಡಿದರೂ ಅವರು ಸ್ವೀಕರಿಸಲಿಲ್ಲ. 50 -50 ಸೂತ್ರದ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ಮೈತ್ರಿ ಮಾಡಿಕೊಂಡಿದ್ದರೂ ಚುನಾವಣಾ ಫಲಿತಾಂಶ ಬಂದ ದಿನವೇ ಶಿವಸೇನೆ ಎಲ್ಲ ಅವಕಾಶಗಳ ಬಾಗಿಲು ತೆರೆಯುತ್ತೇವೆ ಎಂದು ಹೇಳಿದ್ದು ಸರಿಯಲ್ಲ ಎಂದು ನೇರವಾಗಿಯೇ ಹೇಳಿ ಟೀಕಿಸಿದ್ದರು.