Connect with us

Corona

ಲಾಕ್‍ಡೌನ್ ಬಳಿಕ ತೆರೆದ ಕಾರ್ಖಾನೆಯಲ್ಲಿ ಗ್ಯಾಸ್ ಸೋರಿಕೆ- ಸಾವಿನ ಸಂಖ್ಯೆ 8ಕ್ಕೆ ಏರಿಕೆ

Published

on

– ಆಂಧ್ರದ ವಿಶಾಖಪಟ್ಟಣಂನಲ್ಲಿ ದುರಂತ
– ರಸ್ತೆಯಲ್ಲಿ ಕುಸಿದು ಬೀಳುತ್ತಿರೋ ಜನರು

ಹೈದರಾಬಾದ್: ಆಂಧ್ರ ಪ್ರದೇಶದ ವಿಶಾಖಪಟ್ಟಣದ ಬಹುರಾಷ್ಟ್ರೀಯ ಸಂಸ್ಥೆಯ ರಾಸಾಯನಿಕ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆಯಾದ ಪರಿಣಾಮ ಮಗು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 200ಕ್ಕೂ ಅಧಿಕ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಮುಂಜಾನೆ ಜಿಲ್ಲೆಯ ಆರ್.ಆರ್.ವೆಂಕಟಪುರಂನ ಎಲ್.ಜಿ. ಪಾಲಿಮರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ರಾಸಾಯನಿಕ ಅನಿಲ ಕಾಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು, ಗಾಳಿಯಲ್ಲಿ ವಿಷಾನಿಲ ಸುತ್ತಮುತ್ತಲಿನ ಪ್ರದೇಶಗಳಿಗೆ ಹರಡಿದೆ. ಪರಿಣಾಮ ಬೆಳಗ್ಗೆ ವಾಕಿಂಗ್ ಮತ್ತು ಇತರೆ ಕೆಲಸಗಳಿಗೆ ಬಂದಿದ್ದ ಜನರು ವಿಷಾನಿಲ ಸೇವಿಸಿ ಕೂಡಲೇ ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ದುರ್ಘಟನೆಯಲ್ಲಿ ಇದುವರೆಗೂ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮಾಹಿತಿ ತಿಳಿದ ತಕ್ಷಣ ಅಂಬುನೆಲ್ಸ್, ಅಗ್ನಿಶಾಮಕ ದಳ ಮತ್ತು ಪೊಲೀಸರು ರಾಸಾಯನಿಕ ಕಾರ್ಖಾನೆಯತ್ತ ದೌಡಾಯಿಸಿದ್ದು, ಜನರನ್ನು ರಕ್ಷಿಸುವಲ್ಲಿ ನಿರತರಾಗಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ವಿಶಾಖಪಟ್ಟಣಂ ಮಹಾನಗರ ಪಾಲಿಕೆ “ಗೋಪಾಲಪಟ್ಟಣದಲ್ಲಿ ಎಲ್‍ಜಿ ಪಾಲಿಮರ್ಸ್ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯನ್ನು ಗುರುತಿಸಲಾಗಿದೆ. ಹೀಗಾಗಿ ಸುರಕ್ಷತಾ ಮುನ್ನೆಚ್ಚರಿಕೆಗಾಗಿ ಸುತ್ತಮುತ್ತಲಿನ ನಾಗರಿಕರು ಮನೆಗಳಿಂದ ಹೊರಬರದಂತೆ” ಮನವಿ ಮಾಡಿಕೊಂಡಿದೆ.

ಈ ಘಟನೆಯ ಬಗ್ಗೆ ಕೆಲವರು ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಅದರಲ್ಲಿ ರಸ್ತೆಯಲ್ಲಿ ನಿಂತಿದ್ದ, ವಾಕಿಂಗ್ ಮಾಡುತ್ತಿದ್ದವರು ಇದ್ದಕ್ಕಿದ್ದಂತೆ ವಿಷಾನಿಲ ಸೇವಿಸಿ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಜೊತೆಗೆ ಉಸಿರಾಡಲು ತೊಂದರೆ ಪಡುತ್ತಿರುವ ಜನರನ್ನು ಮಾಸ್ಕ್ ಧರಿಸಿರುವವರು ರಕ್ಷಿಸಿ ಅಂಬುಲೆನ್ಸ್ ಬರುವವರೆಗೂ ರಸ್ತೆಯ ಡಿವೈಡರ್ ಮೇಲೆ ಕೂರಿಸುತ್ತಿರುವುದನ್ನು ಕಾಣಬಹುದಾಗಿದೆ.

ಇತ್ತ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ”ವಿಶಾಖಪಟ್ಟಣಂನಲ್ಲಿ ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

Click to comment

Leave a Reply

Your email address will not be published. Required fields are marked *

www.publictv.in