ಚಾಮರಾಜನಗರ: ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 20 ದಿನಗಳ ಅವಧಿಯಲ್ಲಿ 2.85 ಕೋಟಿ ರೂ. ಸಂಗ್ರಹವಾಗಿದೆ.
ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ನಿನ್ನೆ ರಾತ್ರಿ ಮುಕ್ತಾಯವಾಯಿತು.
ಅಮಾವಾಸ್ಯೆ ಸರ್ಕಾರಿ ರಜಾ ದಿನ, ಪಾದಯಾತ್ರಿಗಳು, ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಸೇರಿದಂತೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 2,85, 60,937 ರೂ. ನಗದು, 27 ಗ್ರಾಂ ಚಿನ್ನ ಹಾಗೂ 1,800 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.
ಇದಲ್ಲದೇ, ಇ-ಹುಂಡಿಯಿಂದ 2,75,204, ವಿದೇಶಿ 31 ನೋಟುಗಳ ಜೊತೆಗೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 1 ನೋಟನ್ನು ಭಕ್ತರು ಹುಂಡಿಯಲ್ಲಿ ಹಾಕಿದ್ದಾರೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ರಘು ಮಾಹಿತಿ ನೀಡಿದ್ದಾರೆ.