ರಾಮನಗರ: ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆ ನಡೆಸಿ ನಂತರ ತಲೆಯ ಮೇಲೆ ಕಲ್ಲು ಎತ್ತಾಕಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಘಟನೆ ರಾಮನಗರ ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಯರೇಹಳ್ಳಿ ಗ್ರಾಮದ ನಿವಾಸಿ ಪುಟ್ಟರಾಜು (45) ಕೊಲೆಯಾದ ವ್ಯಕ್ತಿ. ಬುಧವಾರ ತಡರಾತ್ರಿ ಗ್ರಾಮದಲ್ಲಿಯೇ ಬೈಕ್ ನಲ್ಲಿ ತೆರಳುತ್ತಿದ್ದ ಪುಟ್ಟರಾಜುರನ್ನ ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ. ನಂತರ ಅವರ ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆ ನಡೆಸಿದ್ದಾರೆ.
ಅಷ್ಟೇ ಅಲ್ಲದೇ ದುಷ್ಕರ್ಮಿಗಳು ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಮಾಹಿತಿ ತಿಳಿದು ರಾಮನಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.