ಚೆನ್ನೈ: ವ್ಯಕ್ತಿಯೊಬ್ಬ ನ್ಯಾಯಾಧೀಶರ ಎದುರೇ ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ. ಮಂಗಳವಾರ ಮದ್ರಾಸ್ ಕೌಟುಂಬಿಕ ನ್ಯಾಯಾಲಯದಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯನ್ನು ಕೂಡಲೇ ಸ್ಟಾನಲೆ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾಂಚಿಪುರಂ ಜಿಲ್ಲೆಯ ಶ್ರೀಪರೆಂಬದೂರು ನಿವಾಸಿಗಳಾದ ಶರವಣ ಮತ್ತು ವರಲಕ್ಷ್ಮಿ ವಿಚ್ಛೇಧನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಮಂಗಳವಾರ ಮಧ್ಯಾಹ್ನ ದಂಪತಿ ನ್ಯಾಯಾಧೀಶರ ಮುಂದೆ ಹಾಜರಾಗಿದ್ದರು. ನ್ಯಾಯಾಲಯಕ್ಕೆ ಚಾಕು ಸಹಿತ ಬಂದಿದ್ದ ಶರವಣ ಪತ್ನಿಯ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಬಸ್ ಚಾಲಕನಾಗಿರುವ ಶರವಣ ಪೊಲೀಸ್ ಬಿಗಿ ಭದ್ರತೆಯಲ್ಲಿಯೂ ಮಾರಕಾಸ್ತ್ರಗಳೊಂದಿಗೆ ಆಗಮಿಸಿದ್ದು ಅಚ್ಚರಿಗೆ ಕಾರಣವಾಗಿದೆ. 2009ರಿಂದಲೂ ವಿಚ್ಛೇಧನ ಪ್ರಕರಣ ನ್ಯಾಯಾಲಯದಲ್ಲಿತ್ತು.
Advertisement
ಮಹಿಳೆಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಹಲ್ಲೆಗೊಳಗಾದ ಭಾಗದಲ್ಲಿ ಹೊಲಿಗೆ ಹಾಕಲಾಗಿದೆ. ಹಲ್ಲೆಗೈದ ಶರವಣನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಕೌಟುಂಬಿಕ ನ್ಯಾಯಾಲಯಕ್ಕೆ ಹೆಚ್ಚಿನ ಭದ್ರತೆ ಒದಗಿಸಬೇಕು. ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಎಚ್ಚರವಹಿಸಬೇಕು ಎಂದು ನ್ಯಾಯಾಧೀಶರು ಸೂಚಿಸಿದ್ದಾರೆ.
Advertisement