ಮಂಡ್ಯ: ಜಿಲ್ಲಾ ಕಾರಾಗೃಹದಲ್ಲಿ (Mandya Jail) ವಿಚಾರಣಾಧೀನ ಕೈದಿಯೊಬ್ಬನಿಗೆ ರಾಜಾತಿಥ್ಯ ಕಲ್ಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಿ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಭೂ ಅಕ್ರಮ ಪ್ರಕರಣದಲ್ಲಿ ಜೈಲು ಸೇರಿದ್ದ ವಿಚಾರಣಾಧೀನ ಕೈದಿ ಮಹಮದ್ ಹುಸೇನ್‌ಗೆ ಯಾವುದೇ ಕಾಯಿಲೆ ಇಲ್ಲದಿದ್ದರೂ ಬೆನ್ನು ನೋವಿನ ನೆಪವೊಡ್ಡಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನ್ಯಾಯಾಲಯಕ್ಕೂ ಯಾವುದೇ ಮಾಹಿತಿ ನೀಡದೆ ಆತನನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆಸ್ಪತ್ರೆಯಲ್ಲಿದ್ದ ಕೈದಿ ಹುಸೇನ್ ತನ್ನ ಗೆಳತಿಯೊಂದಿಗೆ ರಾಜಾತಿಥ್ಯ ಅನುಭವಿಸುತ್ತಿದ್ದ ವಿಚಾರ ಬೆಳಕಿಗೆ ಬಂದಿತ್ತು. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಲ್ಲಿಂದು ಕಾವೇರಿ ಕದನ – ಮಂಡ್ಯದಲ್ಲಿ ರೊಟ್ಟಿ ಚಳವಳಿ
ಮಂಡ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನ್ಯಾ. ಸಿ. ಚಂದ್ರಶೇಖರ್ ಅವರು ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಅಕ್ರಮ ಬಯಲಾಗಿದೆ. ನ್ಯಾಯಾಲಯಕ್ಕೆ ಮಾಹಿತಿ ನೀಡದೆ ಕೈದಿಯನ್ನು ಆಸ್ಪತ್ರೆಗೆ ಕಳುಹಿಸಿದ್ದಕ್ಕೆ ನ್ಯಾಯಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ, ಸ್ಥಳದಲ್ಲೇ ಜೈಲು ಅಧೀಕ್ಷಕಿ ಶಾಂತಮ್ಮ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.
ಈ ಪ್ರಕರಣದ ಕುರಿತು ಮಾಧ್ಯಮಗಳಲ್ಲಿ ವ್ಯಾಪಕ ವರದಿಗಳು ಪ್ರಸಾರವಾದ ಬೆನ್ನಲ್ಲೇ ಡಿಜಿಪಿ ಅಲೋಕ್ ಕುಮಾರ್ ಅವರು ಮಂಡ್ಯ ಜಿಲ್ಲಾ ಕಾರಾಗೃಹಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ತನಿಖೆ ವೇಳೆ ಅಧೀಕ್ಷಕಿ ಶಾಂತಮ್ಮ ಅವರ ಕರ್ತವ್ಯ ಲೋಪ ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿದೆ. ಇದನ್ನೂ ಓದಿ: ಇರಾನ್‌ನ ಲಾರಕ್ ದ್ವೀಪದ ಮೇಲೆ ಅಮೆರಿಕ ದಾಳಿ
