ಮಂಗಳೂರು: ಇಂದು ಬೆಳಿಗ್ಗೆ ಸುರಿದ ಭಾರೀ ಮಳೆಗೆ ಮಂಗಳೂರಿನ ಟೇಬಲ್ ಟಾಪ್ ವಿಮಾನ ನಿಲ್ದಾಣದ ರನ್ ವೇ ತಡೆಗೋಡೆ ಕುಸಿದು ಬಿದ್ದಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರನ್ ವೇ ಸುರಕ್ಷತೆಯ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಸೂಕ್ತ ರೀತಿಯ ಕ್ರಮ ಕೈಗೊಂಡು ಉತ್ತಮ ತಡೆಗೋಡೆ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದಾರೆ.
Advertisement
Advertisement
ಮಂಗಳೂರು ವಿಮಾನ ನಿಲ್ದಾಣ ಟೇಬಲ್ ಟಾಪ್ ವಿಮಾನ ನಿಲ್ದಾಣವಾಗಿದ್ದು, ಲ್ಯಾಂಡಿಂಗ್ ಮತ್ತು ಟೇಕಾಫ್ ವೇಳೆ ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ. 2010 ರಲ್ಲಿ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆ ರನ್ ವೇ ಬಿಟ್ಟು ಮುಂದೆ ಲ್ಯಾಂಡ್ ಆದ ಪರಿಣಾಮ ಪ್ರಪಾತಕ್ಕೆ ಬಿದ್ದು 158 ಪ್ರಯಾಣಿಕರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಸುತ್ತಲೂ ಭದ್ರವಾದ ತಡೆಗೋಡೆಗಳನ್ನು ನಿರ್ಮಾಣ ಮಾಡಿತ್ತು. ಇಂದು ಸುರಿದ ಭಾರೀ ಮಳೆಗೆ ಭೂ ಕುಸಿತದಿಂದ ರನ್ ವೇ ಸಮೀಪದ ತಡೆಗೋಡೆ ಕುಸಿದು ಬಿದ್ದಿದೆ.
Advertisement
ಏನಿದು ಟೇಬಲ್ ಟಾಪ್ ವಿಮಾನ ನಿಲ್ದಾಣ?
ಸುತ್ತಲೂ ಆಳ ಕಣಿವೆಯಿಂದ ಕೂಡಿ, ಬೆಟ್ಟದ ತುದಿಯಲ್ಲಿ ರನ್ ವೇ ಇರುವ ನಿಲ್ದಾಣಗಳನ್ನು ಟೇಬಲ್ ಟಾಪ್ ವಿಮಾನ ನಿಲ್ದಾಣ ಎಂದು ಗುರುತಿಸಲಾಗಿದೆ. ಮಂಗಳೂರು ಹೊರತು ಪಡಿಸಿ ದೇಶದಲ್ಲಿ ಕೋಝಿಕ್ಕೋಡು ಮತ್ತು ಲೆಂಗ್‍ಪುಯಿನಲ್ಲಿ ಈ ರೀತಿಯ ವಿಮಾನ ನಿಲ್ದಾಣಗಳನ್ನು ಕಾಣಬಹುದು.