ಮಂಗಳೂರು: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕೊನೆಗೂ ರಾತ್ರಿ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶ ಪ್ರಕಟಿಸಿ, 24 ಗಂಟೆಯೂ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನಗಳು ಮಾತ್ರ ಸಂಚರಿಸಬಹುದು ಎಂದು ತಿಳಿಸಿದ್ದಾರೆ. ಈ ಮೂಲಕ ಎರಡು ತಿಂಗಳ ಬಳಿಕ ರಾತ್ರಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಚಾರ್ಮಾಡಿ ಘಾಟ್ನಲ್ಲಿ ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳು ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದವು. ಹೀಗಾಗಿ ಕೆಲ ದಿನಗಳು ಸಂಪೂರ್ಣವಾಗಿ ವಾಹನ ಸಂಚಾರ ನಿಷೇಧಿಸಲಾಗಿತ್ತು. ಇದರಿಂದಾಗಿ ಚಿಕ್ಕಮಗಳೂರು- ಮಂಗಳೂರು ಸಂಪರ್ಕ ಕಡಿತಗೊಂಡಿತ್ತು. ಬಳಿಕ ಸೆಪ್ಟೆಂಬರ್ 15ರಂದು ಷರತ್ತು ವಿಧಿಸಿ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಈಗ ದಿನದ 24 ಗಂಟೆಯೂ ಸಂಚಾರಕ್ಕೆ ಮುಕ್ತವಾಗಿದ್ದು, ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಷರತ್ತು ಏನು?
ಘಾಟಿಯಲ್ಲಿ ಪ್ರತಿ ಗಂಟೆಗೆ 20 ಕಿ.ಮೀ ವೇಗದಲ್ಲಿ ವಾಹನ ಚಲಾಯಿಸುವುದು, ಭೂ ಕುಸಿತದಿಂದ ರಸ್ತೆಗೆ ಸಮಸ್ಯೆ ಆಗಿರುವುದರಿಂದ ಜಾಗರೂಕತೆಯಿಂದ ಚಾಲನೆ ಮಾಡುವುದು, ಫೋಟೋಗ್ರಫಿ, ಸೆಲ್ಫಿ ತೆಗೆಯುವುದಕ್ಕೆ ನಿಷೇಧ ವಿಧಿಸಲಾಗಿದೆ.
ಕಾರುಗಳು, ಜೀಪು, ಟೆಂಪೋ, ವ್ಯಾನ್, ಎಲ್ಸಿವಿ(ಮಿನಿ ವ್ಯಾನ್), ಅಂಬುಲೆನ್ಸ್, ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಬುಲೆಟ್ ಟಾಂಕರ್ಸ್, ಷಿಪ್ ಕಾರ್ಗೋ ಕಾಂಟೈನರ್, ಲಾಂಗ್ ಚಾಸೀಸ್ ವಾಹನಗಳು, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಎಕ್ಸೆಲ್ ಟ್ರಕ್, ಸಾರ್ವಜನಿಕರು ಸಂಚರಿಸುವ ಎಲ್ಲ ಸರ್ಕಾರಿ, ಖಾಸಗಿ ಬಸ್ಸುಗಳ ಸಂಚಾರವನ್ನು ನಿಷೇಧಿಸಲಾಗಿದೆ.