ನವದೆಹಲಿ: ಕೋವಿಡ್ ಇನ್ನೂ ಹೋಗಿಲ್ಲ. ಕೊರೊನಾ ಸಾಂಕ್ರಾಮಿಕ ವಿರುದ್ಧ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ತಿಂಗಳ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್‌ನ 83ನೇ ಕಂತಿನಲ್ಲಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು. ಈ ವೇಳೆ ಮುಂದಿನ ತಿಂಗಳು ನಡೆಯಲಿರುವ ನೌಕಾ ದಳ ದಿನ ಹಾಗೂ ರಾಷ್ಟ್ರೀಯ ಧ್ವಜಾ ದಿನಾಚರಣೆ ಹಿನ್ನೆಲೆಯಲ್ಲಿ ದೇಶದ ಯೋಧರಿಗೆ ಪ್ರಧಾನಿ ಮೋದಿ ನಮನ ಸಲ್ಲಿಸಿದರು. 1971ರ ಯುದ್ಧದ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಗೂ ಪ್ರಧಾನಿ ವಂದಿಸಿದರು. ಇದನ್ನೂ ಓದಿ: ಸರ್ಕಾರಿ ಶಾಲೆಯ 25 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು
ನಂತರ ಮಾತನಾಡಿದ ಅವರು, ಆಯುಷ್ಮಾನ್ ಭಾರತ್ ಹೆಲ್ತ್ ಮಿಷನ್ ಯೋಜನೆಯನ್ನು ದೇಶದ ಬಡ, ಮಧ್ಯಮ ವರ್ಗದ ಕುಟುಂಬಗಳಿ ಹಿತದೃಷ್ಟಿಯಿಂದ ಜಾರಿಗೊಳಿಸಲಾಗಿದೆ. ಫಲಾನುಭವಿಗಳು ಯೋಜನೆಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಸಂಬಂಧಪಟ್ಟವರು ಯೋಜನೆ ಕುರಿತು ಜನತೆಯಲ್ಲಿ ಅರಿವು ಮೂಡಿಸಬೇಕು ಎಂದು ಪ್ರಧಾನಿ ಕರೆ ನೀಡಿದರು.
ಇದೇ ಡಿ.6 ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿಬ್ಬಾಣದ ದಿನ. ಅವರ ಜೀವನಾದರ್ಶನಗಳನ್ನು ನಾವು ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕು. ಅಂಬೇಡ್ಕರರು ತಮ್ಮ ಇಡೀ ಜೀವನವನ್ನು ದೇಶ ಮತ್ತು ಸಮಾಜಕ್ಕಾಗಿ ಮುಡಿಪಾಗಿಟ್ಟರು. ನಮ್ಮ ಸಂವಿಧಾನವು ನಮ್ಮಿಂದ ಮೂಲಭೂತ ಕರ್ತವ್ಯಗಳನ್ನು ನಿರೀಕ್ಷಿಸುತ್ತದೆ ಎಂಬುದನ್ನು ದೇಶವಾಸಿಗಳಾದ ನಾವು ಎಂದಿಗೂ ಮರೆಯಬಾರದು ಎಂದು ಕಿವಿಮಾತು ಹೇಳಿದರು. ಇದನ್ನೂ ಓದಿ: ಒಮಿಕ್ರಾನ್ ಆತಂಕ – ಮಾಸ್ಕ್ ಇಲ್ಲದವರಿಗೆ ಮೆಟ್ರೋಗೆ ನೋ ಎಂಟ್ರಿ
ಭಾರತದಲ್ಲಿ 70 ಕ್ಕೂ ಹೆಚ್ಚು ಸ್ಟಾರ್ಟ್ ಅಪ್‌ಗಳಿದ್ದು (ನವೋದ್ಯಮ), ಅವುಗಳ ಮೌಲ್ಯ 1 ಮಿಲಿಯನ್‌ಗೂ ಹೆಚ್ಚು ದಾಟಿದೆ. ಅನೇಕ ಭಾರತೀಯರು ತಮ್ಮ ಸ್ಟಾರ್ಟ್ ಅಪ್‌ಗಳ ಮೂಲಕ ಜಾಗತಿಕ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಇದು ಸ್ಟಾರ್ಟ್ ಅಪ್ ಯುಗ. ಈ ಕ್ಷೇತ್ರದಲ್ಲಿ ಭಾರತವು ಜಗತ್ತನ್ನು ಮುನ್ನಡೆಸುತ್ತಿದೆ. ವರ್ಷದಿಂದ ವರ್ಷಕ್ಕೆ ಸ್ಟಾರ್ಟ್ ಅಪ್‌ಗಳು ದಾಖಲೆ ಪ್ರಮಾಣದಲ್ಲಿ ಹೂಡಿಕೆಯನ್ನು ಪಡೆಯುತ್ತಿವೆ. ಈ ವಲಯವು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ದೇಶದ ಸಣ್ಣ ನಗರಗಳಲ್ಲೂ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.