Connect with us

Bengaluru City

ಮನೆ ಮನೆಗೆ ಪತ್ರಿಕೆ ಹಂಚಿ ಪರೀಕ್ಷೆ ಶುಲ್ಕ ಕಟ್ಟಿದ್ದ ಮಾಸ್ಟರ್ ಹಿರಣ್ಣಯ್ಯ

Published

on

ಬೆಂಗಳೂರು: ರಂಗಭೂಮಿ ಕಲಾವಿದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಇಂದು ವಿಧಿವಶರಾಗಿದ್ದಾರೆ.

ಬಾಲ್ಯ:
ಮಾಸ್ಟರ್ ಹಿರಣ್ಣಯ್ಯ ಅವರು ಫೆಬ್ರವರಿ 15, 1934 ರಂದು ಮೈಸೂರಿನಲ್ಲಿ ಜನಿಸಿದರು. ಇವರ ಮೂಲ ಹೆಸರು ನರಸಿಂಹಮೂರ್ತಿ. ಕಲ್ಚರ್ಡ್ ಕಮೆಡಿಯನ್ ಎಂದು ಪ್ರಖ್ಯಾತರಾಗಿದ್ದ ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಯ ಒಬ್ಬನೇ ಮಗನಾಗಿದ್ದರು. ಹಿರಣ್ಣಯ್ಯ ಅವರು ಇಂಟರ್ ಮೀಡಿಯೆಟ್‍ವರೆಗೆ(ಪಿಯುಸಿ) ವ್ಯಾಸಂಗ ಮಾಡಿದ್ದಾರೆ. 1952ರಲ್ಲಿ ತಂದೆಯೊಂದಿಗೆ ಕೂಡಿಕೊಂಡು ಅವರಿಂದಲೇ ರಂಗ ಶಿಕ್ಷಣ ಪಡೆದರು. ಮಾಸ್ಟರ್ ಹಿರಣ್ಣಯ್ಯನವರು ಬಾಲ್ಯದಲ್ಲಿರುವಾಗ ಅವರ ತಂದೆ ಮದರಾಸಿನಲ್ಲಿ ಬದುಕನ್ನರಸಿ ತಮ್ಮ ಕುಟುಂಬವನ್ನು ಅಲ್ಲಿಗೆ ಕರೆದುಕೊಂಡು ಹೋಗಿದ್ದರು. ಹೀಗಾಗಿ ಅವರು ತಮಿಳು, ತೆಲುಗು ಮತ್ತು ಇಂಗ್ಲಿಷ್ ಭಾಷೆಗಳನ್ನು ಕಲಿತ್ತಿದ್ದರು.

ಜೊತೆಗೆ ಮನೆಯಲ್ಲಿ ಕನ್ನಡದ ಬಾಯಿಪಾಠ ಮತ್ತು ಸಂಸ್ಕೃತದ ಸ್ತೋತ್ರ ಪಾಠ ಕೂಡ ಮಾಡಿದ್ದರು. ನಂತರದಲ್ಲಿ ಮೈಸೂರಿಗೆ ಬಂದು ಬನುಮಯ್ಯ ಮಾಧ್ಯಮಿಕ ಶಾಲೆಗೆ ಸೇರಿದ್ದರು. ನಂತರ `ಸಾಧ್ವಿ’, `ಮೈಸೂರು ಪತ್ರಿಕೆ’ಯನ್ನು ಮನೆ ಮನೆಗೆ ಹಂಚಿ ಆ ಸಂಪಾದನೆಯಿಂದ ಶಾಲಾ ಪರೀಕ್ಷೆಗಳ ಶುಲ್ಕಕ್ಕೆ ದಾರಿ ಮಾಡಿಕೊಂಡಿದ್ದರು. ಮುಂದೆ ಇಂಟರ್ ಮೀಡಿಯೆಟ್ ಓದಿಗಾಗಿ ಶಾರದಾವಿಲಾಸ ಕಾಲೇಜು ಸೇರಿದ್ದರು.

ರಂಗಭೂಮಿ:
ಇವರ ತಂದೆ ಕೆ. ಹಿರಣ್ಣಯ್ಯನವರು 1940ರಲ್ಲಿ ರಚಿಸಿ, ನಿರ್ದೇಶಿಸಿದ ಚಲನಚಿತ್ರ `ವಾಣಿ’ಯಲ್ಲಿ ಹಿರಣ್ಣಯ್ಯನವರು ನಟಿಸುವ ಮೂಲಕ ಬಣ್ಣದ ಬದುಕಿಗೆ ಪಾದಾರ್ಪಣೆ ಮಾಡಿದ್ದರು. 1948ರಲ್ಲಿ ರಂಗಭೂಮಿಯಲ್ಲಿ ಚಿಕ್ಕ ಪಾತ್ರಮಾಡಲು ಹೋಗಿ ಸೋತಿದ್ದರು. ಆದರೂ ಛಲದಿಂದ ಕಾಲೇಜಿನಲ್ಲಿ ಸಂಘ ಕಟ್ಟಿ `ಆಗ್ರಹ’ ಎಂಬ ನಾಟಕವನ್ನು ಪ್ರದರ್ಶಿಸಿ ಅದ್ಭುತ ಅಭಿನಯದಿಂದ ನಾಟಕ ಗೆದ್ದಿತ್ತು. 1953ರಲ್ಲಿ ತಂದೆ ಕೆ. ಹಿರಣ್ಣಯ್ಯ ಅವರು ನಿಧನರಾದ್ದು, ತಂದೆಯ ನಿಧನದ ನಂತರ ಅ.ನ.ಕೃ. ಮತ್ತು ಮಿತ್ರರ ಸಹಾಯದಿಂದ ನಾಟಕ ಕಂಪನಿ ಕಟ್ಟಿದ್ದರು. ಆದರೆ ಅದರಲ್ಲೂ ನಷ್ಟ ಅನುಭವಿಸಿದರು. ಬಳಿಕ ತಂದೆ ನಡೆಸುತ್ತಿದ್ದ `ಹಿರಣ್ಣಯ್ಯ ಮಿತ್ರ ಮಂಡಳಿ’ ಯನ್ನು ಪುನಃ ಆರಂಭಿಸಿ `ಲಂಚಾವತಾರ’ ನಾಟಕವನ್ನು ರಚಿಸಿ ರಂಗ ಪ್ರಯೋಗ ಮಾಡಿದರು. ಜನಪ್ರಿಯತೆಯ ಜೊತೆಗೆ ಮಹಾರಾಜರಿಂದ ಸನ್ಮಾನ ಮತ್ತು `ನಟರತ್ನಾಕರ’ ಎಂದು ಬಿರುದನ್ನು ಪಡೆದುಕೊಂಡರು.

`ನಡುಬೀದಿ ನಾರಾಯಣ’ದಲ್ಲಿ ತೀರ್ಥರೂಪುವಾಗಿ, `ಭ್ರಷ್ಟಾಚಾರ’ದಲ್ಲಿ ಧಫೇದಾರ್ ಮುರಾರಿಯಾಗಿ, `ಸದಾರಮೆ’ಯಲ್ಲಿ ಕಳ್ಳನಾಗಿ, ಆದಿಮೂರ್ತಿಯಾಗಿ, `ಕಪಿಮುಷ್ಠಿ’ಯಲ್ಲಿ ಜಾರ್ಜ್ ಆಗಿ, ಕಸ್ತೂರಿಯಾಗಿ, `ಮಕ್ಮಲ್ ಟೋಪಿ’ಯಲ್ಲಿ ನಾಣಿಯಾಗಿ ಹಿರಣ್ಣಯ್ಯನವರು ಜನರನ್ನು ಆಕರ್ಷಿಸಿದರು. ಈ ನಾಟಕಗಳೇ ಅಲ್ಲದೆ `ದೇವದಾಸಿ’, `ಅನಾಚಾರ’, `ಅತ್ಯಾಚಾರ’, `ಕಲ್ಕ್ಯಾವತಾರ’, `ಅಮ್ಮಾವ್ರ ಅವಾಂತರ’, `ಪುರುಷಾಮೃಗ’ ಹೀಗೆ 25ಕ್ಕೂ ಹೆಚ್ಚು ನಾಟಕಗಳನ್ನು ರಂಗಕ್ಕೆ ತಂದು ಅಪಾರ ಕೀರ್ತಿಗಳಿಸಿದರು. ಅವರ `ಲಂಚಾವತಾರ’ ನಾಟಕವೊಂದೇ 10,000ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡ ದಾಖಲೆಯನ್ನು ನಿರ್ಮಿಸಿದೆ.

ಪ್ರಶಸ್ತಿ ಗೌರವಗಳು:
ಮಾಸ್ಟರ್ ಹಿರಣ್ಣಯ್ಯನವರಿಗೆ ಹಲವಾರು ಬಿರುದುಗಳೂ ಅತ್ಯುನ್ನತ ರಂಗ ಪ್ರಶಸ್ತಿಯಾದ ಡಾ. ಗುಬ್ಬೀ ವೀರಣ್ಣ ಪ್ರಶಸ್ತಿಯೂ ಸೇರಿದಂತೆ ಪ್ರಶಸ್ತಿಗಳು ಲಭ್ಯವಾಗಿವೆ. ಇವೆಲ್ಲಕ್ಕೂ ಮಿಗಿಲಾಗಿ ದೇಶ ವಿದೇಶಗಳಲ್ಲಿರುವ ಕನ್ನಡಿಗರು ಅವರನ್ನು ಗೌರವಿಸಿದ್ದಾರೆ.

ಪ್ರಮುಖ ನಾಟಕಗಳು: ಮಕ್ಮಲ್ ಟೋಪಿ, ಕಪಿಮುಷ್ಟಿ, ದೇವದಾಸಿ, ನಡುಬೀದಿ ನಾರಾಯಣ, ಲಂಚಾವತಾರಮ ಪಶ್ಚಾತ್ತಾಪ, ಭ್ರಷ್ಟಾಚಾರ, ಚಪಲಾವತಾರ, ಡಬ್ಬಲ್ ತಾಳಿ, ಲಾಟರಿ ಸರ್ಕಾರ, ಸನ್ಯಾಸಿ ಸಂಸಾರ, ಸದಾರಮೆ, ಎಚ್ಚಮ ನಾಯಕ ಪ್ರಮುಖ ನಾಟಕಗಳಾಗಿವೆ.

ಚಲನಚಿತ್ರಗಳಲ್ಲಿ ಹಿರಣ್ಣಯ್ಯ:
ಹಿರಣ್ಣಯ್ಯ ಮಿತ್ರ ಮಂಡಳಿ ಪ್ರಮುಖ ನಾಟಕಗಳಲ್ಲೊಂದಾದ ‘ದೇವದಾಸಿ’ ಚಲನಚಿತ್ರವಾಗಿದ್ದು, ಅದರಲ್ಲಿ ಹಿರಣ್ಣಯ್ಯನವರು ಅಭಿನಯಿಸಿದ್ದರು. ಸಂಪ್ರದಾಯ, ಆನಂದ ಸಾಗರ ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಅಷ್ಟೇ ಅಲ್ಲದೇ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪುಣ್ಯಕೋಟಿ’, ‘ಅಮೃತ ವಾಹಿನಿ’ ಧಾರಾವಾಹಿಗಳಲ್ಲಿಯೂ ಮಾಸ್ಟರ್ ಹಿರಣ್ಣಯ್ಯನವರು ಅಭಿನಯಿಸಿದ್ದಾರೆ.

ಪ್ರಶಸ್ತಿ-ಪುರಸ್ಕಾರಗಳ:
ರಾಜ್ಯೋತ್ಸವ ಪ್ರಶಸ್ತಿ, ನಾಟಕ ಅಕಾಡೆಮಿ ಪ್ರಶಸ್ತಿ, ರಂಗಭೂಮಿ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ ಮತ್ತು ನವರತ್ನ ರಾಂ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಜೊತೆಗೆ ಕಲಾಗಜ ಸಿಂಹ ಮತ್ತು ನಟ ರತ್ನಾಕರ ಎಂದ ಬಿರುವುದನ್ನು ಪಡೆದುಕೊಂಡಿದ್ದಾರೆ.