ಬೆಂಗಳೂರು: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿಯುತ್ತಿದ್ದು, ಪಕ್ಷವೇ ನನಗೆ ಸುಪ್ರೀಂ. ಆದ್ದರಿಂದ ಪಕ್ಷದ ಹೈಕಮಾಂಡ್ ಸಚಿವ ಸ್ಥಾನ ಬಿಟ್ಟು ಕೊಡಲು ಕೇಳಿದರೆ ಸಿದ್ಧ ಎಂದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಧರ್ಮ ಸಿಂಗ್ ಸರ್ಕಾರದ ವೇಳೆಯಲ್ಲಿ ನನಗೆ ಸಚಿವ ಸ್ಥಾನ ನೀಡಿರಲಿಲ್ಲ. ಅಂದು 6 ಬಾರಿ ನಾನು ಶಾಸಕನಾಗಿ ಆಯ್ಕೆ ಆಗಿದ್ದೆ. ಈಗ 7ನೇ ಬಾರಿ ಶಾಸಕನಾಗಿ ಆಯ್ಕೆ ಆಗಿದ್ದೇನೆ. ಸಿದ್ದರಾಮಯ್ಯ ಅವರು ಕೂಡ ನನಗೆ ಸಚಿವ ಸ್ಥಾನ ನೀಡಿರಲಿಲ್ಲ. ಆಗ ನಾನು ಬಾಯಿ ಮುಚ್ಚಿ ಸುಮ್ಮನಾಗಿ, ಕಾರ್ಯಕರ್ತನಾಗಿ ಪಕ್ಷದ ಕಾರ್ಯ ಮಾಡಿದ್ದೆ ಎಂದರು.
Advertisement
Advertisement
ಈಗಲೂ ಪಕ್ಷ ಸಚಿವ ಸ್ಥಾನ ಬಿಟ್ಟು ಕೊಡಲು ಕೇಳಿದರೆ ನಾನು ಸಿದ್ಧನಿದ್ಧೇನೆ. ನಾನು ಮಾತ್ರ ಅಲ್ಲ, ನಮ್ಮ ಪಕ್ಷದ ಎಲ್ಲಾ ಹಿರಿಯ ಶಾಸಕರು ಕೂಡ ಇದಕ್ಕೆ ಬದ್ಧರಾಗಿರುತ್ತಾರೆ ಎಂದು ಅಧಿಕಾರ ತ್ಯಾಗದ ಕುರಿತು ಸ್ಪಷ್ಟನೆ ನೀಡಿದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಡಿಕೆ ಶಿವಕುಮಾರ್ ಅವರನ್ನು ಸರ್ಕಾರದಿಂದ ಕೈಬಿಡಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ ಎಂಬ ಮಾಹಿತಿ ಲಭಿಸಿತ್ತು. ಇದರ ಬೆನ್ನಲ್ಲೆ ಡಿಕೆಶಿ ಅವರು ಅಧಿಕಾರ ತ್ಯಾಗದ ಕುರಿತು ಮಾತನಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
Advertisement
Advertisement
ಇದೇ ವೇಳೆ ಈಗಲ್ ಟನ್ ರೆಸಾರ್ಟ್ ಸರ್ಕಾರಕ್ಕೆ ಪಾವತಿ ಮಾಡಬೇಕಾದ 883 ಕೋಟಿ ರೂ. ಬಾಕಿ ಮೊತ್ತದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಡಿಕೆಶಿ ಉತ್ತರ ನೀಡಲು ನಿರಾಕರಿಸಿದರು. ಈ ವಿಷಯಕ್ಕೂ ನಮಗೂ ಸಂಬಂಧವಿಲ್ಲ, ಸರ್ಕಾರ ಈ ಕುರಿತು ಕ್ರಮಕೈಗೊಳ್ಳುತ್ತದೆ ಎಂದರು.
ಬಳ್ಳಾರಿ ಜಿಲ್ಲೆಗೆ ಸಂಬಂಧಿಸಿದಂತೆ ಬಿಡುಗಡೆ ಆಗಿರುವ ಅನುದಾನದ ಕುರಿತು ಚರ್ಚೆ ನಡೆಸಲು ಸಭೆ ಕರೆದಿರುವುದಾಗಿ ಸಚಿವ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದರು. ಸಭೆಯಲ್ಲಿ ಬಳ್ಳಾರಿ ಜಿಲ್ಲೆಯ ಶಾಸಕರಾದ ಆನಂದ್ ಸಿಂಗ್, ಭೀಮಾನಾಯಕ್, ಕಂಪ್ಲಿ ಗಣೇಶ್ ಹಾಗೂ ಸಚಿವರಾದ ತುಕಾರಾಂ, ಪಿ.ಟಿ ಪರಮೇಶ್ವರ್ ನಾಯ್ಕ್ ಸೇರಿದಂತೆ ಸಂಸದ ಉಗ್ರಪ್ಪ ಅವರು ಹಾಜರಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv