ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ಅನ್ಯ ಕೋಮಿನ ಯುವಕರ ಗುಂಪೊಂದು ಪ್ಲೇವುಡ್ ವ್ಯಾಪಾರಿಯೊಬ್ಬರಿಗೆ ಚಾಕು ಇರಿದಿರುವ ಘಟನೆ ಜಿಲ್ಲೆಯ ಭದ್ರಾವತಿಯ ಖಾಜಿ ಮೊಹಲ್ಲಾದಲ್ಲಿ ನಡೆದಿದೆ.
ಚಾಕು ಇರಿತಕ್ಕೊಳಗಾದ ವ್ಯಾಪಾರಿಯನ್ನು ಹನುಮ್ ಸಿಂಗ್ ಎಂದು ಗುರುತಿಸಲಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇದೀಗ ಘಟನೆ ಖಂಡಿಸಿ ಭದ್ರಾವತಿಯ ಡಿವೈಎಸ್‍ಪಿ ಕಚೇರಿ ಎದುರು ಹಿಂದೂ ಪರ ಸಂಘಟನೆಯವರು ಹಾಗೂ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದ್ದಾರೆ. ಈ ಕೂಡಲೇ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಆರೋಪಿಗಳ ಬಂಧಿಸುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದರು.
- Advertisement 2-
- Advertisement 3-
ಈ ವೇಳೆ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜ್ ಅವರು ಆರೋಪಿಗಳ ಪತ್ತೆಗಾಗಿ ಈಗಾಗಲೇ ತಂಡ ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಿ, ವಶಕ್ಕೆ ಪಡೆದುಕೊಳ್ಳುತ್ತೇವೆ. ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮನವಿಗೆ ಸ್ಪಂದಿಸಿದ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದುಕೊಂಡರು.