ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು, ಕರ್ನಾಟಕ ಮೈಕ್ರೋ ಫೈನಾನ್ಸ್ (ದಬ್ಬಾಳಿಕೆ ಮತ್ತು ಅಮಾನವೀಯ ಕ್ರಮಗಳ ನಿಯಂತ್ರಣ) ಮಸೂದೆಯನ್ನು (Micro Finance Bill) ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸರ್ಕಾರ ಸರ್ಕಸ್ ನಡೆಸಿದೆ. ಗುರುವಾರ ನಡೆದ ಸಂಪುಟ ಸಭೆಯು ಸುಗ್ರೀವಾಜ್ಞೆ ಹೊರಡಿಸಲು ಒಪ್ಪಿಗೆ ಸೂಚಿಸಿದೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ನಿವಾರಣೆ ಹಾಗೂ ಮೈಕ್ರೋ ಫೈನಾನ್ಸ್‌ಗಳ ಹಾವಳಿಗೆ ಕಡಿವಾಣ ಹಾಕುವ ಸಂಬಂಧ ಇಂದು ಕೃಷ್ಣಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳು:
•ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು… pic.twitter.com/rTx5vaCxwD
— Siddaramaiah (@siddaramaiah) January 30, 2025
ಈ ಬೆನ್ನಲ್ಲೇ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ, ಮಸೂದೆಯ ಸಾಧಕಬಾಧಕಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಲು, ಕೆಲವು ಬದಲಾವಣೆ ಮಾಡಲು ಕಾನೂನು ಮತ್ತು ಹಣಕಾಸು ಇಲಾಖೆಯ ನಾಲ್ವರು ಹಿರಿಯ ಅಧಿಕಾರಿಗಳ ತಂಡಕ್ಕೆ ಸೂಚಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ಇನ್ನೆರಡು ದಿನಗಳಲ್ಲಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮಸೂದೆಯನ್ನು ಅಂಗೀಕರಿಸುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್ (HK Patil), ಕಳೆದ ಕೆಲ ದಿನಗಳಿಂದ ಮೈಕ್ರೋ ಫೈನಾನ್ಸ್ ತೊಂದರೆ ವಿಚಾರ ಚರ್ಚೆ ಆಗಿತ್ತು. ಸಾಲ ವಸೂಲಿ ಪ್ರಕ್ರಿಯೆಯ ಘಟನೆ ನೋಡಿದರೆ ಬಹಳ ಅಮಾನವೀಯವಾಗಿ ನಡೆದಿದೆ. ಇದರಿಂದ ಆತ್ಮಹತ್ಯೆ ಕೂಡ ನಡೆದಿದೆ. ಹಾಗಾಗಿ ಮೈಕ್ರೋ ಫೈನಾನ್ಸ್‌ಗೆ ಕಡಿವಾಣ ಹಾಕಲು ಹೊಸ ಕಾನೂನು ತರುತ್ತಿದ್ದೇವೆ. ಈಗಾಗಲೇ ಮಸೂದೆ ಸಿದ್ಧವಾಗಿದ್ದು, ಮಸೂದೆಯಲ್ಲಿ ಕೆಲವು ವಿಚಾರಗಳನನ್ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ಅಲ್ಲದೇ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿ ನಿಗದಿಪಡಿಸುವ ವಿಚಾರವನ್ನು ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ರಾಮನಗರ ತಾಲ್ಲೂಕು, ಬಿಡದಿ ಹೋಬಳಿಯ ಬೈರಮಂಗಲ ಬನ್ನಿಗೆರೆ, ಹೊಸೂರು, ಕೆ.ಜಿ ಗೊಲ್ಲರಪಾಳ್ಯ, ಕಂಚುಗಾರನಹಳ್ಳಿ, ಅರಳಾಳುಸಂದ್ರ, ಕೆಂಪಯ್ಯನಪಾಳ ಕಂಚುಗಾರನಹಳ್ಳಿ ಕಾವಲು, ಮಂಡಲಹಳ್ಳಿ ಹಾಗೂ ಹಾರೋಹಳ್ಳಿ ಹೋಬಳಿಯ ವಡೇರಹಳ್ಳಿ ಗ್ರಾಮಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಗೆ ಸೇರಿಸಲು ಸಂಪುಟದ ಅನುಮೋದನೆ ನೀಡಿತು ಎಂದು ಸಚಿವರು ವಿವರಿಸಿದರು.
ಪ್ರಮುಖ ಕಾಮಗಾರಿಗಳಿಗೆ ಸಂಪುಟ
ಗುರುವಾರ ನಡೆದ ಸಂಪುಟ ಸಭೆಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಯಿತು.
* 83.72 ಕೋಟಿಗಳ ಪರಿಷ್ಕೃತ ಅಂದಾಜು ವೆಚ್ಚದಲ್ಲಿ ಹಾಸನ-ಹೊಳೆನರಸೀಪುರ ರೈಲು ಮಾರ್ಗದ ನಡುವಿನ ರೈಲ್ವೆ ಲೆವೆಲ್ ಕ್ರಾಸಿಂಗ್ ಕಾಮಗಾರಿಗೆ ಅನುಮೋದನೆ.
* ʻಹೊಂಬೆಳಕು ಯೋಜನೆʼಯಡಿ 25.00 ಕೋಟಿಗಳ ವೆಚ್ಚದಲ್ಲಿ 50 ಗ್ರಾಮ ಪಂಚಾಯತಿಗಳಲ್ಲಿ ಸೋಲಾರ್ ಬೀದಿ ದೀಪ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.
* 44.50 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕಡಣಿ ಗ್ರಾಮದ ಹತ್ತಿರ ಭೀಮಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.
* ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕ, 2024 ಹಿಂಪಡೆಯಲು ಸಂಪುಟ ನಿರ್ಧಾರ
* ʻಅಪ್ಸರಕೊಂಡ-ಮುಗಲಿ ಕಡಲ ವನ್ಯಜೀವಿಧಾಮʼ ಎಂದು ಘೋಷಣೆ ಸೇರಿದಂತೆ ಇನ್ನಿತರ ಪ್ರಮುಖ ಕಾರ್ಯಕ್ರಮಗಳಿಗೆ ಒಪ್ಪಿಗೆ ಸೂಚಿಸಲಾಯಿತು.