ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಭೇಟಿ ಮಾಡಿದ್ದಾರೆ.
ಭೇಟಿ ವೇಳೆ ಕೆಲಹೊತ್ತು ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಅಪರೂಪದ ಬೆಳವಣಿಗೆ ರಾಜಕೀಯ ವಲಯದಲ್ಲಿ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಮಳೆಹಾನಿ ಮತ್ತು ಪ್ರಗತಿ ಪರಿಶೀಲನಾ ಸಭೆ ನಡೆಸುವ ಸಲುವಾಗಿ ರೇವಣ್ಣ ಅವರು ಇಂದು ಮಂಗಳೂರಿಗೆ ಭೇಟಿ ನೀಡಿದ್ದರು. ಈ ವೇಳೆ ಉಜಿರೆಗೆ ತೆರಳಿದ ಅವರು ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಮೊದಲ ಬಾರಿಗೆ ಮಾಜಿ ಸಿಎಂ ಭೇಟಿ:
ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಸಚಿವ ಸ್ಥಾನ ವಿಚಾರದಲ್ಲಿ ರೇವಣ್ಣ ಹಾಗೂ ಸಿದ್ದರಾಮಯ್ಯ ಮಧ್ಯೆ ಅಸಮಾಧಾನ ಸೃಷ್ಟಿಯಾಗಿತ್ತು. ಹೀಗೆ ಭಿನ್ನಾಭಿಪ್ರಾಯ ಬಂದ ಮೇಲೆ ದೂರವೇ ಉಳಿದಿದ್ದ ಎಚ್ ಡಿ ರೇವಣ್ಣ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಒಟ್ಟಿನಲ್ಲಿ ಇದೀಗ ಇಬ್ಬರ ಭೇಟಿ ರಾಜಕೀಯ ವಲಯದಲ್ಲಿ ಚರ್ಚೆಗೆ ಎಡೆಮಾಡಿಕೊಟ್ಟಿದೆ.
10 ದಿನ ಚಿಕಿತ್ಸೆ:
10 ದಿನಗಳವರೆಗೆ ಧರ್ಮಸ್ಥಳದಲ್ಲಿ ಶಾಂತಿವನದ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರು, ಕಳೆದ ಭಾನುವಾರ ಧರ್ಮಸ್ಥಳಕ್ಕೆ ತೆರಳಿದ್ದಾರೆ. ಇದೀಗ ಮಾಜಿ ಸಿಎಂ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೊದಲು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ನನಗೇನು ಆರೋಗ್ಯ ತೊಂದರೆ ಇಲ್ಲ. ಸಾಮಾನ್ಯ ಚಿಕಿತ್ಸೆಗಾಗಿ ಆಗಮಿಸಿದ್ದೇನೆ. 10 ದಿನ ಸಾಮಾನ್ಯ ಚಿಕಿತ್ಸೆ ನಡೆಯಲಿದೆ ಅಂತಾ ಹೇಳಿದ್ದರು.