Connect with us

Cinema

ಅತ್ಯಾಚಾರಿಗಳನ್ನು ಗಲ್ಲಿಗೇರಿಸುವುದಕ್ಕೆ ನನ್ನ ಸಹಮತವಿಲ್ಲ – ಪವನ್ ಕಲ್ಯಾಣ್

Published

on

– ಇದು ಬೇಜವಾಬ್ದಾರಿ ಹೇಳಿಕೆ ಎಂದು ಭಾರೀ ವಿರೋಧ
– ಕ್ಷಮೆಯಾಚಿಸುವಂತೆ ಆಗ್ರಹ

ಹೈದರಾಬಾದ್: ಪಶುವೈದ್ಯೆ(ದಿಶಾ) ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ಬಗ್ಗೆ ನಟ ಹಾಗೂ ಜನ ಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ನೀಡಿದ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಅವರು ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ. ಇದು ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆಯಾಗಿದೆ ತಕ್ಷಣ ಕ್ಷಮೆಯಾಚಿಸಬೇಕು ಎಂಬ ಕೂಗು ಕೇಳಿಬರುತ್ತಿದೆ.

ಜನಸೇನೆ ಕಾರ್ಯಕರ್ತರನ್ನುದ್ದೇಶಿಸಿ ಮಾತಾಡುವ ವೇಳೆ ಪವನ್ ಕಲ್ಯಾಣ್, ಸಹೋದರಿ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಪ್ರಕರಣದಲ್ಲಿ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಇಡೀ ದೇಶವೇ ಒತ್ತಾಯಿಸುತ್ತಿದೆ. ಜನ ಆಕ್ರೋಶಕ್ಕೊಳಗಾಗಿ ಹೀಗೆ ಆಗ್ರಹಿಸುತ್ತಿದ್ದಾರೆ. ಸಂವಿಧಾನ ಯಾರಿಗೂ ಯಾರನ್ನು ಕೊಲ್ಲುವ ಹಕ್ಕು ನೀಡಿಲ್ಲ. ಆದ್ದರಿಂದ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಬದಲಿಗೆ ಸಿಂಗಾಪುರ್ ಮಾದರಿಯಲ್ಲಿ ಶಿಕ್ಷೆ ನೀಡಬೇಕು. ಅತ್ಯಾಚಾರಿಗಳನ್ನು ಗಲ್ಲಿಗೇರಿಸುವ ವಿಚಾರಕ್ಕೆ ನನ್ನ ಸಹಮತವಿಲ್ಲ ಎಂದು ಹೇಳಿಕೆ ಕೊಟ್ಟಿದ್ದರು. ಸಿಂಗಾಪುರ್ ನಲ್ಲಿ ಅತ್ಯಾಚಾರಿಗಳಿಗೆ 20 ವರ್ಷ ಜೈಲು ಶಿಕ್ಷೆ, ದಂಡ ಹಾಗೂ ಕಬ್ಬಿನಿಂದ ಹೊಡೆಯುವ ಶಿಕ್ಷೆ ವಿಧಿಸಲಾಗುತ್ತದೆ. ಇದನ್ನೂ ಓದಿ: ಶೀಘ್ರದಲ್ಲೇ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ

ಪವನ್ ಕಲ್ಯಾಣ್ ಹೇಳಿಕೆಗೆ ಈಗ ಪರ-ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಈ ಬಗ್ಗೆ ವೈಎಸ್‍ಆರ್ ಕಾಂಗ್ರೆಸ್ ಸಂಸದ ವಿಜಯ್ ಸಾಯ್ ರೆಡ್ಡಿ ಪ್ರತಿಕ್ರಿಯಿಸಿ, ಪವನ್ ಕಲ್ಯಾಣ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಇಂತಹ ಹೇಳಿಕೆಗಳು ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಇಡೀ ದೇಶವೇ ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ ಎಂದು ಆಗ್ರಹಿಸುತ್ತಿದೆ ಎಂದು ಕಿಡಿಕಾರಿದ್ದರು. ಇದನ್ನೂ ಓದಿ: ಮಹಿಳೆಯರು ತಮ್ಮ ಜೊತೆ ಕಾಂಡೋಮ್ ಇಟ್ಟುಕೊಂಡು ಅತ್ಯಾಚಾರಿಗಳಿಗೆ ಸಹಕರಿಸಬೇಕು: ನಿರ್ದೇಶಕ

ಈ ಬೆನ್ನಲ್ಲೇ ಆಂಧ್ರ ಪ್ರದೇಶ ಸಚಿವರು ಕೂಡ ಪವನ್ ಕಲ್ಯಾಣ್ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಂಧ್ರ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವೆ ಪವನ್ ಕಲ್ಯಾಣ್ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಅವರ ಹೇಳಿಕೆಯನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ದಿಶಾ ಪ್ರಕರಣದ ಬಗ್ಗೆ ಪವನ್ ಅವರು ನೀಡಿರುವ ಹೇಳಿಕೆ ತಪ್ಪು. ಅತ್ಯಾಚಾರಿಗಳಿಗೆ ಕಬ್ಬಿನಿಂದ ಹೊಡೆದರೆ ಅವರ ಕೃತ್ಯಗಳನ್ನು ನಿಯಂತ್ರಿಸಲು ಆಗುತ್ತಾ ಎಂದು ಪ್ರಶ್ನಿಸಿದ್ದಾರೆ.

ದೇಶದೆಲ್ಲೆಡೆ ಈ ಪ್ರಕರಣದ ಆರೋಪಿಗಳನ್ನು ಗಲ್ಲಿಗೇರಿಸಿ ಎಂಬ ಕೂಗು ಕೇಳಿಬರುತ್ತಿದೆ. ಹೀಗಿರುವಾಗ ಪವನ್ ಅವರು ಈ ರೀತಿ ಬೇಜವಾಬ್ದಾರಿ ಹೇಳಿಕೆ ಕೊಡುವುದು ಅವರು ಹೆಣ್ಣುಮಕ್ಕಳನ್ನು ಎಷ್ಟು ಗೌರವಿಸುತ್ತಾರೆ ಎನ್ನುವುದನ್ನು ತೋರಿಸುತ್ತದೆ. ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ದಿಶಾ ಪ್ರಕರಣದ ಬಗ್ಗೆ ಕೇಳಿದಾಗ ಬೇಸರವ್ಯಕ್ತಪಡಿಸಿದ್ದರು. ಅಲ್ಲದೆ ಈ ರೀತಿ ನೀಚ ಕೃತ್ಯವೆಸೆಗುವವರ ವಿರುದ್ಧ ಕಠಿಣ ಕ್ರಮ ತೆಗದುಕೊಳ್ಳುವುದಾಗಿ ಹೇಳಿದ್ದರು ಎಂದು ತಿಳಿಸಿ ಕಿಡಿಕಾರಿದ್ದಾರೆ.

ಇನ್ನೊಂದು ಪತ್ರಿಕಾಗೋಷ್ಠಿಯಲ್ಲಿ ವೈಎಸ್‌ಆರ್‌ಸಿ ಶಾಸಕ ಮಾತನಾಡಿ, ಪವನ್ ಕಲ್ಯಾಣ್ ಅವರ ಹೇಳಿಕೆಯಿಂದ ಜನರು ಗೊಂದಲ ಹಾಗೂ ಆಶ್ಚರ್ಯಕ್ಕಿಡಾಗಿದ್ದಾರೆ. ಹಿಂದೊಮ್ಮೆ ಅವರು ತಮ್ಮ ಕೋಪದ ಬಗ್ಗೆ ಹೇಳುತ್ತಾ, ತಮ್ಮ ಸಹೋದರಿಯನ್ನು ಯಾರೋ ರೇಗಿಸಿದ್ದಕ್ಕೆ ಅವರನ್ನು ಹೊಡೆಯಲು ಕತ್ತಿ ತರಲು ಮನೆಗೆ ಓಡಿಹೋಗಿದ್ದ ಪ್ರಸಂಗದ ಬಗ್ಗೆ ತಿಳಿಸಿದ್ದರು. ಆದರೆ ಈಗ ದಿಶಾ ಪ್ರಕರಣ ಆರೋಪಿಗಳನ್ನು ಗಲ್ಲಿಗೇರಿಸಲು ಸಹಮತವಿಲ್ಲ ಎಂದಿದ್ದಾರೆ. ಇದು ಜನರಲ್ಲಿ ಗೊಂದಲ ಮೂಡಿಸಿದೆ ಎಂದು ಹೇಳಿದ್ದಾರೆ.