ಬೆಂಗಳೂರು: ಕಳೆದ ಒಂದು ವರ್ಷದಿಂದ ಆಪರೇಷನ್ ಕಮಲದ ಮಾತುಗಳು ರಾಜ್ಯ ರಾಜಕೀಯದಲ್ಲಿ ಕೇಳಿ ಬರುತ್ತಿವೆ. ಇಷ್ಟು ದಿನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲೇ ಆಪರೇಷನ್ ಕಮಲ ನಡೆಯುತ್ತಿದೆ ಎನ್ನಲಾಗಿತ್ತು. ಯಡಿಯೂರಪ್ಪನವರು ಆಪರೇಷನ್ ಕಮಲದಲ್ಲಿ ಹಿನ್ನಡೆ ಕಾಣುತ್ತಿರುವ ಪರಿಣಾಮ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೊಸ ಕ್ಯಾಪ್ಟನ್ ನೇಮಕಕ್ಕೆ ಮುಂದಾಗಿದ್ದಾರೆ ಎಂಬ ಮಾತುಗಳು ರಾಜ್ಯ ಬಿಜೆಪಿ ಅಂಗಳದಲ್ಲಿ ಕೇಳಿ ಬರುತ್ತಿವೆ.
Advertisement
ಯಾರು ಹೊಸ ಕ್ಯಾಪ್ಟನ್?
ಶಾಸಕ ಅರವಿಂದ್ ಲಿಂಬಾವಳಿ ಅವರನ್ನ ಆಪರೇಷನ್ ಕಮಲದ ನಾಯಕರನ್ನಾಗಿ ಮಾಡಲು ಅಮಿತ್ ಶಾ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷರ ಪಟ್ಟಿಯಲ್ಲಿಯೂ ಅರವಿಂದ್ ಲಿಂಬಾವಳಿ ಅವರ ಹೆಸರು ಮುಂಚೂಣಿಯಲ್ಲಿದೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿರುವ ಅರವಿಂದ್ ಲಿಂಬಾವಳಿ ಅವರು ಆಪರೇಷನ್ ಕಮಲದ ಕುರಿತು ಅಮಿತ್ ಶಾ ಜೊತೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
Advertisement
Advertisement
ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಮತ್ತು ವಿಪಕ್ಷ ನಾಯಕರಾಗಿ ಬಿ.ಎಸ್.ಯಡಿಯೂರಪ್ಪ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ರಾಜ್ಯಾಧ್ಯಕ್ಷ ಬದಲಾವಣೆಯ ಕುರಿತು ಮಾತುಗಳು ಬಿಜೆಪಿ ಅಂಗಳದಲ್ಲಿ ಕೇಳಿ ಬರುತ್ತಿದೆ. ಈಗಾಗಲೇ ಅರವಿಂದ್ ಲಿಂಬಾವಳಿ ಅವರ ಹೆಸರನ್ನು ಯಡಿಯೂರಪ್ಪ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಮಾಜಿ ಡಿಸಿಎಂ ಆರ್ ಅಶೋಕ್ ಮತ್ತು ಶಾಸಕ ಸಿ.ಟಿ ರವಿ ಅವರ ಹೆಸರನ್ನು ಆರ್‍ಎಸ್‍ಎಸ್ ಮತ್ತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿರುವ ಬಿ.ಎಲ್ ಸಂತೋಷ್ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.