ಮೈಸೂರು: ಹಲ್ಲೆಗೆ ಒಳಗಾಗಿದ್ದ ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ವೀರ್ ಸೇಠ್ ಅವರು ಸೋಮವಾರ ರಾತ್ರಿ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ವೈದ್ಯರು ಡಿಸ್ಚಾರ್ಜ್ ಆಗುವಂತೆ ಸೂಚಿಸಿದ್ದು, ಮನೆಯಲ್ಲೆ ವಿಶ್ರಾಂತಿ ಪಡೆಯಲು ತಿಳಿಸಿದ್ದಾರೆ.
ಕಳೆದ ಎಂಟು ದಿನಗಳಿಂದ ಶಾಸಕರು ಚಿಕಿತ್ಸೆ ಪಡೆಯುತ್ತಿದ್ದರು. ಕೊಲೆ ಯತ್ನದಿಂದಾಗಿ ಶಾಸಕರ ಕುತ್ತಿಗೆ ಹಾಗೂ ಕಿವಿ ಭಾಗಕ್ಕೆ ಗಾಯವಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ನವೆಂಬರ್ 18ರ ರಾತ್ರಿಯಿಂದ ಶಾಸಕರಿಗೆ ಅಳವಡಿಸಿದ್ದ ವೆಂಟಿಲೇಟರ್ ತೆಗೆಯಲಾಗಿತ್ತು. ಇದೀಗ ತನ್ವೀರ್ ಆರೋಗ್ಯದಲ್ಲಿ ಆಸ್ಪತ್ರೆಯಿಂದ ಚೇತರಿಕೆ ಕಂಡಿದ್ದು, ಡಿಸ್ಚಾರ್ಜ್ ಆಗಿದ್ದಾರೆ.
ಈ ವಿಚಾರವಾಗಿ ಅಂದು ಮಾತನಾಡಿದ್ದ ಕೊಲಂಬಿಯಾ ಏಷಿಯಾ ಆಸ್ಪತ್ರೆ ವೈದ್ಯ ಡಾ.ಉಪೇಂದ್ರ ಶಣೈ, ಕುತ್ತಿಗೆ ಭಾಗಕ್ಕೆ ಚಾಕು ಹಾಕಿರುವ ಕಾರಣ ತೀವ್ರವಾಗಿ ಪೆಟ್ಟಾಗಿದೆ. ತನ್ವೀರ್ ಸೇಠ್ ಅವರ ರಕ್ತನಾಳ ನರಗಳಿಗೆ ತೀವ್ರ ಗಾಯವಾಗಿದೆ. ಬಿಪಿ, ಶುಗರ್ ಸಮಾನ್ಯ ಸ್ಥಿತಿಗೆ ತರಲು ಪ್ರಯತ್ನ ಪಡುತ್ತಿದ್ದೇವೆ. ಆಗಲೇ ಒಂದು ಶಸ್ತ್ರ ಚಿಕಿತ್ಸೆಯನ್ನು ಮಾಡಿದ್ದೇವೆ. ಮುಂದಿನ 48 ಗಂಟೆಯವರೆಗೂ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದರು.
ನವೆಂಬರ್ 17ರ ರಾತ್ರಿ ತನ್ವೀರ್ ಸೇಠ್ ಬನ್ನಿ ಮಂಟಪ ಸಮೀಪದ ಪಾರ್ಟಿ ಹಾಲಿಗೆ ತಮ್ಮ ಆತ್ಮೀಯ ಮಗನ ಮದುವೆಯ ಬೀಗರೂಟಕ್ಕೆ ಆಗಮಿಸಿದ್ದರು. ಈ ವೇಳೆ ಯುವಕ ಫರಾನ್ (24) ಚಾಕುವಿನಿಂದ ಹಲ್ಲೆ ಮಾಡಿದ್ದ. ಅವರ ಕತ್ತಿಗೆ ಭಾಗಕ್ಕೆ ಚಾಕು ಹಾಕಿ ಪರಾರಿಯಾಗುತ್ತಿದ್ದ ಆತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ನಂತರ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಸೇಠ್ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.