ಬೆಂಗಳೂರು: ಅತೃಪ್ತ ಶಾಸಕರ ಬಣದಲ್ಲಿ ಗುರುತಿಸಿಕೊಂಡಿರುವ ಚಿಂಚೋಳಿ ಶಾಸಕ ಉಮೇಶ್ ಜಾಧವ್ ರಾಜೀನಾಮೆ ಸಲ್ಲಿಸೋದು ಬಹುತೇಕ ಖಚಿತವಾಗಿದೆ. ಸೋಮವಾರ ಬೆಂಗಳೂರಿಗೆ ಆಗಮಿಸಲಿರುವ ಉಮೇಶ್ ಜಾಧವ್ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳಿವೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉಮೇಶ್ ಜಾಧವ್ ರಾಜೀನಾಮೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರಂತೆ. ಕಾಂಗ್ರೆಸ್ ಭದ್ರಕೋಟೆ ಎಂದೇ ಗುರುತಿಸಲ್ಪಡುವ ಕಲಬುರಗಿ ಲೋಕಸಭಾ ಕ್ಷೇತ್ರವನ್ನು ವಶಪಡಿಸಿಕೊಳ್ಳಲು ಬಿಜೆಪಿ ಉಮೇಶ್ ಜಾಧವ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಈ ಮೂಲಕ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕ್ಷೇತ್ರವನ್ನು ವಶಪಡಿಸಿಕೊಳ್ಳಲು ಬಿಜೆಪಿ ಚುನಾವಣಾ ರಣತಂತ್ರಗಳನ್ನು ರೂಪಿಸಲು ಮುಂದಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ.
ಒಂದು ವಾರದ ಹಿಂದೆಯೇ ಉಮೇಶ್ ಜಾಧವ್ ಬಿಜೆಪಿ ಸೇರಲಿದ್ದು, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಠಕ್ಕರ್ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಮುಂಬೈನಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರೊಂದಿಗೆ ಕಾಣಿಸಿಕೊಂಡಿರುವ ಉಮೇಶ್ ಜಾಧವ್ ಶುಕ್ರವಾರ ನಡೆದ ಶಾಸಕಾಂಗ ಸಭೆಗೆ ಗೈರಾಗಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಸಭೆಗೆ ಹಾಜರಾಗುತ್ತಿಲ್ಲ ಎಂಬ ಪತ್ರವನ್ನು ರವಾನೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು.
ಸಭೆಗೆ ಗೈರಾಗಿರುವ ಶಾಸಕರಿಗೆ ಕಾಂಗ್ರೆಸ್ ನೋಟಿಸ್ ಕಳುಹಿಸಿದೆ. ಅತೃಪ್ತ ಶಾಸಕರು ಗೊಂದಲದಲ್ಲಿ ಸಿಲುಕಿದ್ದು, ರಾಜೀನಾಮೆ ನೀಡಬೇಕಾ? ಮತ್ತೆ ಮಾತೃ ಪಕ್ಷಕ್ಕೆ ಶರಣಾಗಾಬೇಕಾ? ಎಂಬ ವಿಷಮ ಪರಿಸ್ಥಿತಿಯಲ್ಲಿ ಸಿಲುಕಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಉಮೇಶ್ ಜಾಧವ್‍ರನ್ನು ನೋಡಿಕೊಳ್ಳಲು ಬಂದಿದ್ದ ಬಿಜೆಪಿ ನಾಯಕ ಬಾಬುರಾವ್ ಚಿಂಚನಸೂರ್ ಬಿಪಿ ಜಾಸ್ತಿಯಾಗಿ ಅಸ್ವಸ್ಥಗೊಂಡಿದ್ದಾರೆ. ಪವಾಯ್ ಹೋಟೆಲ್‍ನಲ್ಲಿ ತಂಗಿದ್ದ ಉಮೇಶ್ ಜಾಧವ್ ಕಾವಲಿಗೆ ಬಿಜೆಪಿ ಚಿಂಚನ್‍ಸೂರ್ ರನ್ನು ನೇಮಿಸಿತ್ತು. ಆದ್ರೀಗ ಚಿಂಚನಸೂರ್ ಅವರೇ ಜಾಧವ್‍ರಿಂದಲೇ ಚಿಕಿತ್ಸೆ ಪಡೆಯುವಂತಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv