ನವದೆಹಲಿ: ಆಮ್ ಆದ್ಮಿ ಪಕ್ಷದ ಶಾಸಕರನ್ನು ಖರೀದಿಸುವುದು ಸುಲಭವಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಗುಡುಗಿದ್ದಾರೆ.
ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮೋದಿ ಜಿ, ರಾಜ್ಯಗಳಲ್ಲಿ ವಿರೋಧ ಪಕ್ಷದ ಶಾಸಕರನ್ನು ಖರೀದಿಸುವ ಮೂಲಕ ನೀವು ಸರ್ಕಾರವನ್ನು ಉರುಳಿಸುತ್ತೀರಾ? ಇದು ನಿಮ್ಮ ಪ್ರಜಾಪ್ರಭುತ್ವದ ವ್ಯಾಖ್ಯಾನವೇ? ಶಾಸಕರು ಖರೀದಿಸಲು ಇಷ್ಟೊಂದು ಹಣವನ್ನು ಎಲ್ಲಿಂದ ತರುತ್ತಿರುವಿರಿ ಎಂದು ಪ್ರಶ್ನಿಸಿದ್ದಾರೆ.
ನೀವು ಈ ಹಿಂದೆ ಅನೇಕ ಬಾರಿ ನಮ್ಮ ಪಕ್ಷದ ಶಾಸಕರನ್ನು ಖರೀದಿಸಲು ಯತ್ನಿಸಿದ್ದೀರಿ. ಆದರೆ ಇದು ಖರೀದಿಸುವುದು ಸುಲಭದ ಮಾತಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಅರವಿಂದ್ ಕೇಜ್ರಿವಾಲ್ ಚುನಾವಣಾ ಪ್ರಚಾರದ ವೇಳೆ ಈ ಹಿಂದೆಯೂ ಬಿಜೆಪಿ ವಿರುದ್ಧ ಆರೋಪ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ಮುಖಂಡ ವಿಜಯ್ ಗೋಯಲ್ ಅವರು, ಎಎಪಿಯ ಯಾವುದೇ ಶಾಸಕರನ್ನು ಸೆಳೆಯುವ ಪ್ರಯತ್ನವನ್ನು ನಾವು ಮಾಡಿಲ್ಲ. ಆದರೆ ಎಎಪಿ ತನ್ನ ಮೂಲ ಉದ್ದೇಶವನ್ನೇ ಮರೆತಿದೆ. ಹೀಗಾಗಿ 14 ಎಎಪಿ ಶಾಸಕರು ಪಕ್ಷ ತೊರೆಯಲು ಮುಂದಾಗಿದ್ದಾರೆ ಎಂದು ಹೇಳಿದ್ದರು.
ಯೋಗೇಂದ್ರ ಯಾದವ್, ಪ್ರಶಾಂತ್ ಭೂಷಣ್, ಶಾಜಿಯಾ ಇಮ್ಲಿ ಸೇರಿದಂತೆ ಅನೇಕರು ಈಗಾಗಲೇ ಎಎಪಿ ಪಕ್ಷದಿಂದ ಹೊರ ಬಂದಿದ್ದಾರೆ. ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣವಿದೆ ಎಂದು ಹೇಳಿಕೊಂಡಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಡಲು ಅಧಿಕಾರಕ್ಕೆ ಬಂದ ಪಕ್ಷ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ವಿಜಯ್ ಗೋಯಲ್ ಆರೋಪಿಸಿದ್ದರು.
ದೆಹಲಿಯಲ್ಲಿ ಒಟ್ಟು 7 ಲೋಕಸಭಾ ಕ್ಷೇತ್ರಗಳಿದ್ದು, ಕಾಂಗ್ರೆಸ್ ಹಾಗೂ ಎಎಪಿಗಳು ಏಕಾಂಗಿಯಾಗಿ ಸ್ಪರ್ಧಿಸುತ್ತಿವೆ. ಈ ಏಳು ಕ್ಷೇತ್ರಗಳ ಮತದಾನವು ಮೇ 12ರಂದು ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.