ಕಲಬುರಗಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ ಐಎಎಸ್ ಅಧಿಕಾರಿ ಮೊಹಮ್ಮದ್ ಇಕ್ರಮುಲ್ಲಾ ಷರೀಫ್ (Mohammed Ikramulla Shariff) ಅವರು ನಿರ್ಗಮಿತ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರಿಂದ ಅಧಿಕಾರ ವಹಿಸಿಕೊಂಡರು.
ನಿರ್ಗಮಿತ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಹೂಗುಚ್ಛ ನೀಡಿ ಶುಭ ಕೋರಿದರು. ಸರ್ಕಾರ ಇತ್ತೀಚೆಗೆ ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರನ್ನು ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಯ ಆಯುಕ್ತರಾಗಿ ವರ್ಗಾಯಿಸಿ ಅವರ ಸ್ಥಾನಕ್ಕೆ ಹಣಕಾಸು ಇಲಾಖೆಯ ಜಂಟಿ ಕಾರ್ಯದರ್ಶಿ (ಆಯವ್ಯಯ ಮತ್ತು ಸಂಪನ್ಮೂಲ) ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಕ್ರಮ್ ಶರೀಫ್ ಅವರನ್ನು ನಿಯೋಜಿಸಿತ್ತು. ಇದನ್ನೂ ಓದಿ: ಮದ್ಯಪ್ರಿಯರಿಗೆ ಶಾಕ್ – ಇಂದಿನಿಂದ 20% ತೆರಿಗೆ ಹೆಚ್ಚಿಸಿದ ರಾಜ್ಯ ಸರ್ಕಾರ
ಕರ್ನಾಟಕ ಮೂಲದವರಾದ ಇಕ್ರಮುಲ್ಲಾ ಶರೀಫ್ ಅವರು ಬಿ.ಎ. (ಅರ್ಥಶಾಸ್ತ್ರ), ಎಂ.ಎ. (ಸಾರ್ವಜನಿಕ ಆಡಳಿತ) ಪದವಿ ಪಡೆದಿದ್ದಾರೆ. ಈ ಹಿಂದೆ ರಾಮನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಕೈಗೊಂಡ ಕ್ರಮಗಳು ಶ್ಲಾಘನೆಗೆ ಪಾತ್ರವಾಗಿತ್ತು. ಅಲ್ಲದೇ, ಬೆಸ್ಟ್ ಸಿಇಓ ಅವಾರ್ಡ್ ಸಹ ಪಡೆದಿದ್ದರು. ಕಳೆದ 3-4 ವರ್ಷದಿಂದ ಹಣಕಾಸು ಇಲಾಖೆಯಲ್ಲಿ ಆಯವ್ಯಯ ಸಿದ್ಧಪಡಿಸುವ ಮಹತ್ವದ ಜವಾಬ್ದಾರಿಯಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಜನಸ್ನೇಹಿ ಅಡಳಿತಕ್ಕೆ ಒತ್ತು
ಅಧಿಕಾರ ವಹಸಿಕೊಂಡ ನಂತರ ಮಾತನಾಡಿದ ಜಿಲ್ಲಾಧಿಕಾರಿ ಇಕ್ರಮುಲ್ಲಾ ಶರೀಫ್, ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವ ಮೂಲಕ ಜನಸ್ನೇಹಿ ಆಡಳಿತಕ್ಕೆ ಒತ್ತು ನೀಡಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸೇವೆ ಸಲ್ಲಿಸಲು ಅವಕಾಶ ದೊರೆತಿದ್ದು, ಜಿಲ್ಲೆಯಲ್ಲಿ ಆರೋಗ್ಯ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಜಿಲ್ಲೆಯಲ್ಲಿ ಅನೇಕ ಬೃಹತ್ ಯೋಜನೆಗಳು ಜಾರಿಯಲ್ಲಿದ್ದು, ಅದೆಲ್ಲವನ್ನು ಚುರುಕುಗೊಳಿಸಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು ಎಂದರು.
ಇದಲ್ಲದೇ, ಉದ್ಯೋಗ ದೊರಕಿಸುವ ಕೈಗಾರಿಕೆಗಳ ಸ್ಥಾಪನೆ, ಸ್ಥಳೀಯ ಯುವಕ-ಯುವತಿಯರಿಗೆ ಕೌಶಲ್ಯ ತರಬೇತಿ ಸೇರಿದಂತೆ ಒಟ್ಟಾರೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಗುರಿ ಹೊಂದಿದ್ದು, ಜಿಲ್ಲೆಯ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ಸಾರ್ವಜನಿಕರು ಸಹಕಾರ ನೀಡಬೇಕೆಂದು ಡಿಸಿ ಮನವಿ ಮಾಡಿದರು. ಇದನ್ನೂ ಓದಿ: ಸಾರಿಗೆ ನೌಕರರಿಗೆ ಗುಡ್‌ನ್ಯೂಸ್; ಹೊಸ ವೇತನ ಜು.1ರ ವೇತನದಲ್ಲಿ ಪಾವತಿಗೆ ಸರ್ಕಾರ ಆದೇಶ
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಭಂವರ್ ಸಿಂಗ್ ಮೀನಾ, ಎಸ್‌ಪಿ ಅಡ್ಡೂರು ಶ್ರೀನಿವಾಸುಲು, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತರಾದ ಸಾಹಿತ್ಯ ಆಲದಕಟ್ಟಿ, ಪ್ರಭುರೆಡ್ಡಿ ಸೇರಿದಂತೆ ತಾಲೂಕಿನ ತಹಶೀಲ್ದಾರರು, ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದು ನೂತನ ಜಿಲ್ಲಾಧಿಕಾರಿಗಳಿಗೆ ಶುಭಕೋರಿದರು.

