ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ (Money laundering case) ಸಂಸದೆ ಶೋಭಾ ಕರಂದ್ಲಾಜೆ (Shobha Karandlaje) ಅವರಿಗೆ 82ನೇ ಜನಪ್ರತಿನಿಧಿಗಳ ನ್ಯಾಯಾಲಯ (Court) ಬಿಗ್ ರಿಲೀಫ್ ನೀಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 24ನೇ ಆರೋಪಿಯಾಗಿದ್ದ ಅವರು, ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ. ಪ್ರಕರಣದಿಂದ ಬಿಡುಗಡೆಗೊಳಿಸಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರಕರಣದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ.
ಏನಿದು ಪ್ರಕರಣ?: 2014ರ ಮಾರ್ಚ್‍ನಲ್ಲಿ, 24 ಜನರ ವಿರುದ್ಧ ಮನಿ ಲಾಂಡರಿಂಗ್ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಕೆಐಡಿಬಿಯ 360 ಎಕರೆಯ ಡಿನೋಟಿಫಿಕೇಷನ್ ಅಕ್ರಮಕ್ಕೆ ಸಂಬಂಧಿಸಿದಂತೆ ಇ.ಡಿ ಪ್ರಕರಣ ದಾಖಲಿಸಿತ್ತು. ಖಾಸಗಿ ಕಂಪೆನಿ ಮುಖಾಂತರ ಶೋಭಾ ಕರಂದ್ಲಾಜೆ ಅವರ ಖಾತೆಗೆ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು.
ಪ್ರಕರಣದಲ್ಲಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸಹ ಸೇರಿದ್ದಾರೆ. ಶೋಭಾ ಕರಂದ್ಲಾಜೆಯವರ ವಿರುದ್ಧ 44 ಕೋಟಿ ರೂ.ಗಳ ಹಗರಣದ ಹಣವನ್ನು ಲಾಂಡರಿಂಗ್ ಮಾಡಿದ್ದಾರೆ ಎಂದು ಇಡಿ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು.