ಬೆಂಗಳೂರು: ರಾಜ್ಯ ಸರ್ಕಾರ ತುಂಗಭದ್ರಾ ಡ್ಯಾಂ (Tungabhadra Dam) ಕ್ರಸ್ಟ್ ಗೇಟ್‌ಗಳನ್ನು ಸರಿಯಾಗಿ ನಿರ್ವಹಣೆ ಮಾಡದೇ ನಿರ್ಲಕ್ಷಿಸಿದ ಪರಿಣಾಮ ಈ ಪರಿಸ್ಥಿತಿ ಎದುರಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತಾಡಿದ ಬೊಮ್ಮಾಯಿ, ಡ್ಯಾಂ ಮ್ಯಾನೇಜ್‌ಮೆಂಟ್ ಕಮಿಟಿಯ ಸದಸ್ಯರು ಕೇಂದ್ರ ಸರ್ಕಾರದಿಂದ ಬಂದು ಹಲವು ಸಲಹೆ ಕೊಟ್ಟಿರ್ತಾರೆ. ಅವರ ಸಲಹೆಗಳನ್ನು ರಾಜ್ಯ ಸರ್ಕಾರ ಒತ್ತು ಕೊಟ್ಟು ಜಾರಿ ಮಾಡಬೇಕು. ಆದರೆ ಸರ್ಕಾರ ಗಂಭೀರವಾಗಿ ಅವರ ಸಲಹೆ ತೆಗೆದುಕೊಂಡಿಲ್ಲ ಅನ್ಸುತ್ತೆ. ಇಲ್ಲದಿದ್ದರೆ ಈ ಪರಿಸ್ಥಿತಿ ಬರ್ತಿರಲಿಲ್ಲ ಎಂದರು. ಇದನ್ನೂ ಓದಿ: Tungabhadra Dam | ಹೈದರಾಬಾದ್‌ನಿಂದ ಹೊಸ ಗೇಟ್ ತರಿಸಲು ಪ್ಲ್ಯಾನ್ – ಆಂಧ್ರ, ತೆಲಂಗಾಣದ ಕೆಲ ಜಿಲ್ಲೆಗಳಿಗೂ ಆತಂಕ!
ಸರ್ಕಾರ ಈ ಕೂಡಲೇ ಚೈನ್ ಅಷ್ಟೇ ಅಲ್ಲ, ಸಂಪೂರ್ಣ ಗೇಟ್ ಭದ್ರಗೊಳಿಸಬೇಕು. ಹಣ ಬಿಡುಗಡೆ ಮಾಡಿ ಗೇಟ್ ದುರಸ್ತಿ ಕೆಲಸ ಮಾಡಬೇಕು. ಡ್ಯಾಂ ಹಾಗೂ ಜನರ ಸುರಕ್ಷತೆಯನ್ನು ಸರ್ಕಾರ ಗಮನಿಸಬೇಕು. ಸ್ವತಂತ್ರ ಪೂರ್ವದಲ್ಲಿ ನಿರ್ಮಾಣ ಆಗಿರುವ ಟಿಬಿ ಡ್ಯಾಂ ಕಾಲ ಕಾಲಕ್ಕೆ ಹಲವಾರು ಸಮಸ್ಯೆ ಎದುರಿಸುತ್ತಾ ಬಂದಿದೆ. ಹೂಳು ತುಂಬಿರುವ ಬಗ್ಗೆ ಬಹಳ ದೊಡ್ಡ ಸಮಸ್ಯೆ ಆಗಿತ್ತು. ಸಮಾನಾಂತರವಾದ ಡ್ಯಾಂ ಕಟ್ಟಬೇಕು ಅಂತಾ ನಮ್ಮ ಡಿಪಿಆರ್ ಮಾಡಿ ಸಿದ್ಧತೆ ಮಾಡಲಾಗಿತ್ತು ಎಂದು ತಿಳಿಸಿದರು.
ಬಳ್ಳಾರಿ ಜಿಲ್ಲೆಯ ತುಂಗ-ಭದ್ರಾ ಡ್ಯಾಮ್‌ನ ಕ್ರಸ್ಟ್ ಗೇಟ್ ಕಟ್ಟಾಗಿ ನದಿ ಪಾತ್ರದ 30ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದ್ದು, ಪ್ರವಾಹ ಎದುರಾಗುವ ಆತಂಕ ಜನರಲ್ಲಿ ಮನೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: KRS ಡ್ಯಾಂನಲ್ಲೂ ಸ್ಟಾಫ್ ಲಾಕ್ ಗೇಟ್ ಇಲ್ಲ – ಈಗಲೇ ಎಚ್ಚೆತ್ತುಕೊಳ್ಳೋದು ಒಳ್ಳೆಯದು: ಹೆಚ್‌ಡಿಕೆ
ಬರಗಾಲದಿಂದ ನಿರಂತರ ತತ್ತರಿಸಿದ್ದ ಜನತೆಗೆ ಅಣೆಕಟ್ಟು ತುಂಬಿದ ಖುಷಿಯಲ್ಲಿರುವಾಗಲೇ ಕ್ರಸ್ಟ್ ಗೇಟ್ ಕಟ್ಟಾಗಿರುವುದರ ಪರಿಣಾಮ ಸಂಗ್ರಹಿತ ನೀರು ಹೊರಹೋದರೆ ಮುಂದೆ ಕೃಷಿಗೆ ತೊಂದರೆಯಾಗುವ ಆತಂಕ ಆರಂಭವಾಗಿದೆ. ಇಂಥ ಬಹುದೊಡ್ಡ ಡ್ಯಾಮ್ ನಿರ್ವಹಣೆಯನ್ನು ಸೂಕ್ಷ್ಮವಾಗಿ ನಿರ್ವಹಿಸಬೇಕಿದ್ದ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣ ನೆರೆ ಭೀತಿಯಲ್ಲಿರುವ ಗ್ರಾಮಗಳ ಜನರನ್ನು ಸ್ಥಳಾಂತರಿಸಿ, ಕೂಡಲೇ ಜಲಾಶಯದ ಕ್ರಸ್ಟ್ ಗೇಟ್ ಸರಿಪಡಿಸಲು ಕ್ರಮ ಕೈಗೊಳ್ಳಬೇಕೆಂದು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.
ಪ್ರತಿಪಕ್ಷ ನಾಯಕ ಆರ್.ಅಶೋಕ್ ಕೂಡಾ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್ ಚೈನ್ ಲಿಂಕ್ ಮುರಿದು ಬಿದ್ದಿದ್ದು, ಡ್ಯಾಂನ ಹೊರಹರಿವು ಏರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿರುವುದರಿಂದ ನದಿ ಪಾತ್ರದ ರೈತರನ್ನು ಚಿಂತೆಗೀಡು ಮಾಡಿದೆ. ಕಳೆದ ವರ್ಷವೆಲ್ಲ ಬರಗಾಲದಿಂದ ತತ್ತರಿಸಿದ್ದ ರೈತರು ಈ ವರ್ಷ ಉತ್ತಮ ಮಳೆಯಾಗಿ ಜಲಾಶಯ ಭರ್ತಿಯಾಗಿರುವುದರಿಂದ ಎರಡು ಬೆಳೆ ತೆಗೆಯಬಹುದು ಎಂದು ನಿಟ್ಟುಸಿರು ಬಿಡುತ್ತಿರುವಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಈಗ ಬಿತ್ತನೆಯಾಗಿರುವ ಒಂದು ಬೆಳೆಯೂ ಸಹ ಕೈತಪ್ಪಬಹುದು ಎಂದು ಆರ್.ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ.
ನೀರಾವರಿ ಸಚಿವರೂ ಆಗಿರುವ ಡಿಸಿಎಂ ಅವರಿಗೆ ತಮ್ಮ ಇಲಾಖೆಗಳ ನಿರ್ವಹಣೆಗಿಂತ ಕಾಂಗ್ರೆಸ್ ಹೈಕಮಾಂಡ್ ಏಜೆಂಟ್ ಕೆಲಸವೇ ಹೆಚ್ಚಾಗಿದೆ. ಪ್ರಜೆಗಳ ಹಿತಕ್ಕಿಂತ, ಪಕ್ಷದ ಹಿತವೇ ಆದ್ಯತೆಯಾಗಿದೆ. ಭ್ರಷ್ಟಾಚಾರ, ರಾಜಕೀಯ ಮೇಲಾಟ, ಬಣ ಬಡಿದಾಟ, ಪಕ್ಕದ ರಾಜ್ಯಗಳ ಚುನಾವಣೆಗೆ ಹಣ ಹೊಂದಿಸುವಲ್ಲಿ ಬ್ಯುಸಿಯಾಗಿರುವ ಉಪಮುಖ್ಯಮಂತ್ರಿಗಳಿಗೆ ಇಲಾಖೆಯ ಕರ್ತವ್ಯ ನಿರ್ವಹಿಸಲು ಪಾಪ ಸಮಯ ಎಲ್ಲಿದೆ? ಕಾಲಕಾಲಕ್ಕೆ ಜಲಾಶಯದ ತಾಂತ್ರಿಕ ಸಮಿತಿಯ ಸಭೆ ಮಾಡಿ ಡ್ಯಾಂನ ಸುರಕ್ಷತೆ, ನಿರ್ವಹಣೆ ಬಗ್ಗೆ ಗಮನ ಹರಿಸದಿದ್ದರೆ ಇವತ್ತು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಕಳೆದ ವರ್ಷ ಬರಗಾಲದಿಂದ ಜಲಾಶಯ ಖಾಲಿಯಾಗಿದ್ದಾಗ ಡ್ಯಾಂನ ದುರಸ್ತಿ ಕಾರ್ಯ ಮಾಡಲು ಸಮಯವೂ ಇತ್ತು, ಅವಕಾಶವೂ ಇತ್ತು. ಆದರೆ ಸಿಎಂ ಕುರ್ಚಿ ಮೇಲೆ ಟವಲ್ ಹಾಕೋದರಲ್ಲೇ ಸದಾಕಾಲ ಬ್ಯುಸಿಯಾಗಿರುವ ಡಿಸಿಎಂ ಸಾಹೇಬರಿಗೆ ಡ್ಯಾಂ ರಿಪೇರಿ ಮಾಡಿಸಲು ಸಮಯ ಎಲ್ಲಿದೆ? ಆಸಕ್ತಿ ಎಲ್ಲಿದೆ? ಅಧಿಕಾರದ ತೆವಲಿಗೆ ರೈತರ ಬದುಕಿನ ಜೊತೆ ಇನ್ನೆಷ್ಟು ದಿನ ಹೀಗೆ ಚೆಲ್ಲಾಟವಾಡುತ್ತೀರಿ? ನಿಮ್ಮ ದುರಾಡಳಿತದಿಂದ ಉತ್ತಮ ಮಳೆಯಾಗಿದ್ದರೂ ಇವತ್ತು ನಾಡಿನ ರೈತರು ಕಣ್ಣೀರಿಡುವ ಪರಿಸ್ಥಿತಿ ಬಂದಿದೆ. ನಿಮ್ಮ ದುರಾಡಳಿತದಿಂದ ಕನ್ನಡಿಗರಿಗೆ ಆದಷ್ಟು ಬೇಗ ಮುಕ್ತಿ ಬೇಕಿದೆ. ನಾಡಿನ ಅನ್ನದಾತರ ಶಾಪ ತಟ್ಟುವ ಮುನ್ನ ರಾಜೀನಾಮೆ ಕೊಟ್ಟು ತೊಲಗಿ ಎಂದು ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.