ಮುಂಬೈ: ವಿದ್ಯಾರ್ಥಿಗಳನ್ನು (Students) ಮನೆಗೆ ಕರೆದೊಯ್ಯುತ್ತಿದ್ದ ಶಾಲಾ ಬಸ್ (School Bus) ಮೇಲೆ ಬೃಹತ್ ಮರ ಬಿದ್ದು, ಓರ್ವ ವಿದ್ಯಾರ್ಥಿ ಸಾವನ್ನಪ್ಪಿ, 10 ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ಮುಂಬೈನ (Mumbai) ಚೆಂಬೂರ್ ಪ್ರದೇಶದಲ್ಲಿ ನಡೆದಿದೆ. ಓರ್ವ ಬಾಲಕ ಇನ್ನೂ ಬಸ್‌ನಲ್ಲೇ ಸಿಲುಕಿದ್ದಾನೆ. ಆತನ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ವರದಿಯಾಗಿದೆ.
ಚೆಂಬೂರಿನ 11ನೇ ನಂಬರ್ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಶಾಲಾ ಬಸ್‌ನಲ್ಲಿ ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ಮರ ಇದ್ದಕ್ಕಿದ್ದಂತೆ ಬಸ್ ಮೇಲೆ ಬಿದ್ದಿದೆ ಎಂದು ತಿಳಿದುಬಂದಿದೆ. ಈ ಅವಘಡದಲ್ಲಿ 10 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಅಲ್ಲದೇ 10 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಬ್ಬ ಬಾಲಕ ಬಸ್ಸಿನೊಳಗೆ ಸಿಲುಕಿಕೊಂಡಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ಮದುವೆಯಾದ ಎರಡೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ
ರಕ್ಷಣಾ ತಂಡಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಗೊಂಡ ಮಕ್ಕಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಇದನ್ನೂ ಓದಿ: ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಹೊತ್ತಿ ಉರಿದ ಆಪರೇಷನ್ ಥಿಯೇಟರ್
ಹಿಂದೆ ಸಹ ಈ ಪ್ರದೇಶದಲ್ಲಿ ಇದೇ ರೀತಿಯ ಘಟನೆ ಸಂಭವಿಸಿದೆ. ಮರಗಳನ್ನು ಕತ್ತರಿಸುವಂತೆ ಅಥವಾ ತೆರವುಗೊಳಿಸುವಂತೆ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್‌ಗೆ (ಬಿಎಂಸಿ) ಪತ್ರ ಬರೆಯಲಾಗಿದೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
