ಯಾದಗಿರಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಯಾದಗಿರಿ ನಗರದ ಗಾಂಧಿ ವೃತ್ತದಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದರು.
ಗಾಂಧಿ ಚೌಕ್‍ನಲ್ಲಿ ಜಮಾಯಿಸಿದ ನೂರಾರು ಮುಸ್ಲಿಂ ಯುವಕರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಪೌರತ್ವ ಕಾಯ್ದೆ ತಿದ್ದುಪಡಿ ಮಾಡಬಾರದು ಎಂದು ಆಗ್ರಹಿಸಿದರು. ಪೌರತ್ವ ಕಾಯ್ದೆ ದೇಶದ ಹಿತಾಸಕ್ತಿ ಮತ್ತು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ದೇಶದ ಜಾತ್ಯಾತೀತ ತತ್ವವನ್ನು ನಾಶ ಮಾಡುವ ಕಾಯ್ದೆಯನ್ನು ಯಾರು ಬೆಂಬಲಿಸುವುದಿಲ್ಲ ಎಂದು ಹೇಳಿದರು.
Advertisement
Advertisement
ಪ್ರಜೆಗಳನ್ನು ಧರ್ಮ, ನಂಬಿಕೆಗಳ ನೆಲೆಯಲ್ಲಿ ವಿಭಜಿಸುವ ಕಾಯ್ದೆಗೆ ನಮ್ಮ ವಿರೋಧ ಇದೆ. ಕೂಡಲೇ ಕಾಯ್ದೆ ವಾಪಸ್ ಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಕೈಗೊಳ್ಳುತ್ತೇವೆ ಎಂಬ ಎಚ್ಚರಿಕೆ ನೀಡಿದರು.
Advertisement
ಈ ವೇಳೆ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಕೆಂಡಾಮಂಡಲವಾದ ಘಟನೆ ಸಹ ನಡೆಯಿತು. ಈ ವಿಚಾರಕ್ಕಾಗಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು, ಸ್ಥಳದಲ್ಲಿ ಕೆಲ ಹೊತ್ತು ಉದ್ವಿಗ್ನ ವಾತಾವರಣ ಸಹ ಏರ್ಪಟಿತ್ತು.
Advertisement
ಪೌರತ್ವ ತಿದ್ದುಪಡಿ ಮಸೂದೆಯನ್ನು ಡಿಸೆಂಬರ್ 9 ರಂದು ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಮಂಡಿಸಿದ್ದು, 311 ಮತಗಳಿಂದ ಪಾಸ್ ಸಹ ಆಗಿತ್ತು. ಆದರೆ ಅಂದು ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಭಾರೀ ಗದ್ದಲ ಎಬ್ಬಿಸಿದ್ದವು. ಈ ವೇಳೆ ಎಐಎಂಐಎಂ ಪಕ್ಷದ ನಾಯಕ ಅಸಾದುದ್ದಿನ್ ಓವೈಸಿ ಮಸೂದೆಯ ಪ್ರತಿಯನ್ನೇ ಹರಿದು ಹಾಕುವ ಮೂಲಕ ತೀವ್ರ ಚರ್ಚೆಗೆ ಕಾರಣರಾಗಿದ್ದರು. ಇದಾದ ಬಳಿಕ ಮಸೂದೆ ರಾಜ್ಯಸಭೆಯಲ್ಲೂ ಪಾಸ್ ಆಗಿತ್ತು. ಮಸೂದೆಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅಂಕಿತ ಹಾಕಿದ್ದು, ಶುಕ್ರವಾರ ಮಧ್ಯರಾತ್ರಿಯಿಂದಲೇ ಕಾಯ್ದೆ ಜಾರಿಗೆ ಬಂದಿತ್ತು. ಆ ಬಳಿಕ ದೇಶಾದ್ಯಂತ ಪರ ವಿರೋಧ ಚರ್ಚೆಗಳಾಗುತ್ತಿದ್ದು, ಹಲವೆಡೆ ಪ್ರತಿಭಟನೆಗಳು ಕೂಡ ನಡೆಯುತ್ತಿವೆ.