ಬೆಂಗಳೂರು: ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತಿ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು (Medical College), ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ (Multi Speciality Hospital) ನಿರ್ಮಿಸುವುದು ನನ್ನ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಹಾಗೂ ಗೃಹ ವೈದ್ಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಉದ್ಘಾಟನೆ, ಬೆಳಗಾವಿ ಸ್ಮಾರ್ಟ್ ಸಿಟಿ ಅನುದಾನದಲ್ಲಿ ನಿರ್ಮಾಣಗೊಂಡ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಬಸ್ ನಿಲ್ದಾಣದ ಉದ್ಘಾಟನೆ, ರಾಣಿ ಚನ್ನಮ್ಮ ವಿವಿಯ ಹಿರೇಬಾಗೇವಾಡಿ ಹೊಸ ಆವರಣದಲ್ಲಿ ಪಿ.ಎಂ ಉಷಾ ವಿವಿಧ ಕಟ್ಟಡಗಳ ಹಾಗೂ ರಾಷ್ಟ್ರೀಯ ಹೆದ್ದಾರಿಯಿಂದ ವಿವಿಯ ನೂತನ ಆವರಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಇದನ್ನೂ ಓದಿ: ಸಿಎಂ ಜೊತೆ ತೆರೆದ ಜೀಪ್‌ನಲ್ಲಿ ಮೊಮ್ಮೊಗ ಪ್ರಯಾಣ; ಪ್ರೋಟೋಕಾಲ್ ವ್ಯಾಪ್ತಿಗೆ ಬರಲ್ಲ ಎಂದ ಹೆಚ್‌ಸಿಎಂ
ಬರೀ ಆಸ್ಪತ್ರೆ ಕಟ್ಟಡ ಕಟ್ಟಿದರೆ ಸಾಲದು. ಅದಕ್ಕೆ ತಕ್ಕಂತೆ ತಜ್ಞ ವೈದ್ಯರನ್ನೂ ನೇಮಿಸುತ್ತೇವೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದ್ದೇವೆ ಎಂದರು. ಇದನ್ನೂ ಓದಿ: ಅಂಕಲಗಿ ದುರ್ಗಾದೇವಿ ಜಾತ್ರೆಯಲ್ಲಿ ಗಲಾಟೆ ವೇಳೆ ಏರ್‌ಫೈರ್ – ಎರಡು ಗುಂಪುಗಳ 14 ಮಂದಿ ಅರೆಸ್ಟ್
ಸದ್ಯ ಪ್ರಭಾಕರ್ ಕೋರೆ ಅವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಸರ್ಕಾರಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕಾಗಿ ಕೋರೆ ಅವರಿಗೆ ಅಭಿನಂದಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಬೆಂಗ್ಳೂರಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ಥಿಪಂಜರ ಪತ್ತೆ – 6 ತಿಂಗಳ ಹಿಂದೆ ಮೃತಪಟ್ಟ ಶಂಕೆ
ನಮ್ಮ ಸರ್ಕಾರ ಅಸಮಾನತೆಯನ್ನು ಅಳಿಸುವ ದಿಕ್ಕಿನಲ್ಲಿ ತಳ ಸಮುದಾಯಗಳಿಗೆ ಅವಕಾಶ ಮತ್ತು ಅನುಕೂಲಗಳನ್ನು ಕಲ್ಪಿಸುತ್ತಿದೆ. ಅಸಮಾನತೆ ಇರುವವರೆಗೆ ತಳ ಸಮುದಾಯಗಳ ಜನ ಮುಖ್ಯವಾಹಿನಿಗೆ ಬರಲು ಸಾಧ್ಯವಿಲ್ಲ ಎನ್ನುವ ಮಾತುಗಳನ್ನು ನೆನಪಿನಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ನುಡಿದರು. ಇದನ್ನೂ ಓದಿ: ನೆಲಮಂಗಲ | ಬೆಳ್ಳಂಬೆಳಗ್ಗೆ ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗಾಹುತಿ