ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಇರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಬಗ್ಗೆ ಮೈಸೂರು ಪಾಲಿಕೆ ಹಾಗೂ ಜಿಲ್ಲಾಡಳಿತಕ್ಕೆ ಸಾಕಷ್ಟು ದೂರು ನೀಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ನಗರದ ಹೃದಯ ಭಾಗವಾದ ಕೆ.ಆರ್ ವೃತ್ತದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಇದೆ. ಅಮೃತ ಶಿಲೆಯಲ್ಲಿ ನಿರ್ಮಾಣವಾಗಿರುವ ಈ ಪ್ರತಿಮೆಯನ್ನು ನಾಲ್ವಡಿ ಕೃಷ್ಣರಾಜ ಒಡೆಯರ್ ನೆನಪಿನಾರ್ಥವಾಗಿ ಸರ್ ಎಂ. ವಿಶ್ವೇಶ್ವರಯ್ಯನವರು ಉದ್ಘಾಟಿಸಿದ್ದರು.
Advertisement
Advertisement
ಆದರೆ ಈಗ ಪ್ರತಿಮೆಯ ಮುಖ ಹಾಗೂ ಕುತ್ತಿಗೆ ಭಾಗದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಈ ಬಗ್ಗೆ ಪಾಲಿಕೆ ಹಾಗೂ ಜಿಲ್ಲಾಡಳಿತ ನಿರ್ಲಕ್ಷ್ಯವಹಿಸಿವೆ. ಪ್ರತಿಮೆ ಸರಿಪಡಿಸುವಂತೆ ಅಧಿಕಾರಿಗಳ ಬಳಿ ಮನವಿ ಮಾಡಿದರೂ ಪ್ರಯೋಜನ ಆಗಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ಇತ್ತ ಚಾಮುಂಡಿ ಬೆಟ್ಟದಲ್ಲಿನ ನಂದಿ ವಿಗ್ರಹದಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಕೆಲವರು ಆತಂಕ ಮತ್ತು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪುರಾತತ್ವ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ನಂದಿ ವಿಗ್ರಹ ಪರಿಶೀಲನೆ ನಡೆಸಿದೆ.
Advertisement
ಸುಮಾರು 400 ವರ್ಷಗಳ ಹಳೆಯದಾದ ನಂದಿ ವಿಗ್ರಹ ಇದ್ದಾಗಿದ್ದು, 1659-73ರಲ್ಲಿ ನಿರ್ಮಾಣಗೊಂಡಿದೆ ಎನ್ನುವ ಉಲ್ಲೇಖವಿದೆ. ಚಾಮುಂಡಿಬೆಟ್ಟದ ಪ್ರಮುಖ ಕೇಂದ್ರ ಬಿಂದು. ನಂದಿ ವಿಗ್ರಹದ ಕಾಲು, ಕುತ್ತಿಗೆ ಹಾಗೂ ಮುಖದ ಕೆಲವೆಡೆ ಬಿರುಕು ಕಾಣಿಸಿಕೊಂಡಿದೆ ಎಂದು ಭಕ್ತರು ಜಿಲ್ಲಾಡಳಿತಕ್ಕೆ ತಿಳಿಸಿದ್ದರು.
ಕಪ್ಪಾಗಿದ್ದ ನಂದಿ ವಿಗ್ರಹವನ್ನ ಪಾಲಿಶ್ ಮಾಡಿ ಹೊಸ ರೂಪ ಕೊಡಲಾಗಿತ್ತು. ಆ ಸಂದರ್ಭದಲ್ಲಿ ಬಿರುಕು ಕಾಣಿಸಿಕೊಂಡಿದ್ದು ಪತ್ತೆಯಾಗಿತ್ತು. ಹೀಗಾಗಿ ಜಿಲ್ಲಾಡಳಿತ ಪಾರಂಪರಿಕ ತಜ್ಞರ ಸಮಿತಿಯೊಂದನ್ನ ರಚಿಸಿ ವಿಗ್ರಹ ಪರಿಶೀಲನೆಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಶಿಲ್ಪಿ ತಂಡ ವಿಗ್ರಹ ಪರಿಶೀಲನೆ ನಡೆಸಿದೆ.
ಕೆಲವು ಕಡೆ ಬಿರುಕಿನ ರೀತಿ ಮೇಲ್ನೋಟಕ್ಕೆ ಕಾಣುತ್ತಿರೋದು ಬಿರುಕಲ್ಲ ಅದು ಕಲ್ಲಿನ ನೈಜತೆ ಎಂದು ಸಮಿತಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಂಪೂರ್ಣವಾಗಿ ಪರಿಶೀಲನೆ ನಡೆಸಿ ಸಮಿತಿಯು ವರದಿ ನೀಡಲಿದ್ದು, ವರದಿಯಲ್ಲಿ ಬಿರುಕು ಬಿಟ್ಟಿದೆ ಎಂದು ತಜ್ಞರು ಸ್ಪಷ್ಟಪಡಿಸಿದರೆ ನಂದಿ ವಿಗ್ರಹದ ಬಿರುಕು ಮುಚ್ಚಲು ಕೂಡ ಜಿಲ್ಲಾಡಳಿತ ಮುಂದಾಗಲಿದೆ.