ಕಾಂಗ್ರೆಸ್ಸಿನಲ್ಲೇ ಒಡಕು – ಕೇಂದ್ರದ ನಿರ್ಧಾರವನ್ನು ಬೆಂಬಲಿಸಿದ ಜ್ಯೋತಿರಾದಿತ್ಯ ಸಿಂಧಿಯಾ

Public TV
3 Min Read
Jyotiraditya Scindia 1

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವುದ್ದಕ್ಕೆ ಕಾಂಗ್ರೆಸ್ ಭಾರೀ ವಿರೋಧ ವ್ಯಕ್ತಪಡಿಸುತ್ತಾ ಬಂದಿದೆ. ಆದರೆ ಕಾಂಗ್ರೆಸ್‍ನ ಮಾಜಿ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕೇಂದ್ರ ಸರ್ಕಾರಕ್ಕೆ ತಮ್ಮ ಬೆಂಬಲ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಂಸದರು, ಜಮ್ಮು-ಕಾಶ್ಮೀರ ಹಾಗೂ ಲಡಾಖ್ ಪ್ರದೇಶವನ್ನು ಭಾರತದ ಒಕ್ಕೂಟಕ್ಕೆ ಸೇರಿಸುವುದಕ್ಕೆ ಬೆಂಬಲ ನೀಡುತ್ತೇನೆ. ಈ ಮೂಲಕ ಭಾರತವು ಸಂಪೂರ್ಣ ಏಕೀಕರಣವಾಗಲಿದೆ. ಆದರೆ ಸಾಂವಿಧಾನಿಕ ಪ್ರಕ್ರಿಯೆಯನ್ನು ಅನುಸರಿಸಿದ್ದರೆ ಚೆನ್ನಾಗಿರುತ್ತಿತ್ತು. ಆಗ ಯಾವುದೇ ಪ್ರಶ್ನೆಗಳನ್ನು ಎತ್ತಲು ಸಾಧ್ಯವಾಗುತ್ತಿರಲಿಲ್ಲ. ಅದೇನೇ ಇದ್ದರೂ, ಇದು ನಮ್ಮ ದೇಶದ ಹಿತಾಸಕ್ತಿ ಮತ್ತು ನಾನು ಇದನ್ನು ಬೆಂಬಲಿಸುತ್ತೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

https://twitter.com/JM_Scindia/status/1158729410507182080

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹೀಗಾಗಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಜ್ಯೋತಿರಾದಿತ್ಯ ಸಿಂಧಿಯಾ ಅವರ ಹೆಸರು ಕೇಳಿ ಬಂದಿತ್ತು. ಆದರೆ ಜ್ಯೋತಿರಾದಿತ್ಯ ಸಿಂಧಿಯಾ ಅವರು, ಅದನ್ನು ಅಲ್ಲಗಳೆದಿದ್ದರು. ಕಾಂಗ್ರೆಸ್ ಹಿರಿಯ ನಾಯಕರು, ಸಂಸದರು 370 ವಿಧಿ ರದ್ದುಗೊಳಿಸುವುದಕ್ಕೆ ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬೆಂಬಲ ನೀಡುವ ಮೂಲಕ ಭಾರೀ ಚರ್ಚೆಗೆ ಕಾರಣವಾಗಿದ್ದಾರೆ.

ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ ಅವರು, ಏಕಪಕ್ಷೀಯವಾಗಿ ಜಮ್ಮು ಮತ್ತು ಕಾಶ್ಮೀರವನ್ನು ಇಬ್ಭಾಗ ಮಾಡುವ ನಿರ್ಧಾರ ಕೈಗೊಳ್ಳುವುದು, ಜನಪ್ರತಿನಿಧಿಗಳನ್ನು ಬಂಧಿಸುವುದು ಹಾಗೂ ಸಂವಿಧಾನವನ್ನು ಉಲ್ಲಂಘಿಸುವ ಮೂಲಕ ರಾಷ್ಟ್ರದ ಏಕೀಕರಣವನ್ನು ಹೆಚ್ಚಿಸಲು ಸಾಧ್ಯವಿಲ್ಲ. ಜನರಿಂದ ದೇಶ ನಿರ್ಮಾಣವಾಗಿದೆ. ಇದು ಕೇವಲ ತುಂಡು ಭೂಮಿಯಲ್ಲ. ಆಡಳಿತಾತ್ಮಕ ಅಧಿಕಾರದ ದುರುಪಯೋಗ ಮಾಡಿರುವುದು ರಾಷ್ಟ್ರೀಯ ಭದ್ರತೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಹೇಳಿದ್ದರು.

ರಾಹುಲ್ ಗಾಂಧಿ ಅವರು ತಾಯಿ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಸಂಸದರು ಹಾಗೂ ನಾಯಕರೊಂದಿಗೆ ನಡೆದ ಸಭೆ ಬಳಿಕ ಟ್ವೀಟ್ ಮಾಡಿ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದರು.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸುವ ಕುರಿತು ಸೋಮವಾರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಘೋಷಣೆ ಮಾಡಿದರು. ಈ ವೇಳೆ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸುವಲ್ಲಿ ಎಡವಿದ್ದರಿಂದ ರಾಹುಲ್ ಗಾಂಧಿ ಚಕಾರ ಎತ್ತಿರಲಿಲ್ಲ.

ಅಮಿತ್ ಶಾ 370ನೇ ವಿಧಿ ಹಾಗೂ 35ಎ ರದ್ದು ಪಡಿಸುವ ಘೋಷಣೆ ಕೂಗುತ್ತಿದ್ದಂತೆ ಕಾಂಗ್ರೆಸ್ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ನಾಯಕರು ಗದ್ದಲ ಎಬ್ಬಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಲು ಪ್ರಾರಂಭಿಸಿದ್ದರು. ಅಲ್ಲದೆ, ಕಾಂಗ್ರೆಸ್ ನಾಯಕರು ಈ ನಿರ್ಧಾರವನ್ನು ‘ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದು ಸಂಸತ್ ಹೊರಗಡೆ ಘೋಷಣೆ ಕೂಗಿದ್ದರು. ಇದಕ್ಕೆ ಜನಾರ್ಧನ್ ದ್ವಿವೇದಿ ಹಾಗೂ ದೀಪೇಂದರ್ ಹೂಡಾರಂತಹ ನಾಯಕರು ಸಹ ಬೆಂಬಲ ವ್ಯಕ್ತಪಡಿಸಿದ್ದರು.

Amit Shah

ಈ ಮಹತ್ವದ ಬೆಳವಣಿಗೆ ಹಿನ್ನೆಲೆ ತುರ್ತು ಸಭೆ ಕರೆಯುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ್ದ ರಾಹುಲ್ ಗಾಂಧಿ, ನಾನು ಕಾಂಗ್ರೆಸ್ ಅಧ್ಯಕ್ಷನಲ್ಲದ ಕಾರಣ ಯಾವುದೇ ಸಭೆ ಕರೆಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು. ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗದ ಕಾರಣ ರಾಹುಲ್ ಗಾಂಧಿ ಅವರು ಮೇನಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಇಂದು ಬೆಳಗ್ಗೆ ಕಾಂಗ್ರೆಸ್ ವರಿಷ್ಠೆ, ರಾಹುಲ್ ಗಾಂಧಿ ಅವರ ತಾಯಿ ಸೋನಿಯಾ ಗಾಂಧಿ ಅವರು ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಚರ್ಚಿಸಲು ಸಭೆ ಕರೆದಿದ್ದರು. ಸಭೆಯಲ್ಲಿ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಬೇಕೇ ಅಥವಾ ಬೆಂಬಲಿಸಬೇಕೇ ಎಂಬುದರ ಕುರಿತು ಚರ್ಚೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ನಡೆಯನ್ನು ನಾವು ವಿರೋಧಿಸುತ್ತೇವೆ. ಆದರೆ, ನಮ್ಮ ವಿರೋಧವು ಜಮ್ಮು ಮತ್ತು ಕಾಶ್ಮೀರದ ಜನತೆ ಹಾಗೂ ರಾಜ್ಯದ ವಿಧಾನಸಭೆಯನ್ನು ಸಂಪರ್ಕಿಸದಿರುವುದನ್ನು ಆಧರಿಸಿದೆ ಎಂದು ಕಾಂಗ್ರೆಸ್ ಸಂಸದರು ಹಾಗೂ ನಾಯಕರಿಗೆ ಸಭೆಯಲ್ಲಿ ಸ್ಪಷ್ಟಪಡಿಸಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *