ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಉಗ್ರರ ದಾಳಿ ಪ್ರಕರಣ – ತನಿಖೆ ಎನ್‍ಐಎ ಹೆಗಲಿಗೆ

Public TV
2 Min Read
Pak backed Lashkar front claims responsibility for JK bus terror attack

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಇತ್ತೀಚೆಗೆ ಬಸ್ ಮೇಲೆ ನಡೆದ ಉಗ್ರರ ದಾಳಿಯ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ( Union Home Ministry) ರಾಷ್ಟ್ರೀಯ ತನಿಖಾ ಸಂಸ್ಥೆಗೆ (National Investigation Agency) ಹಸ್ತಾಂತರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿ ಮತ್ತು ಅಮರನಾಥ ಯಾತ್ರೆಯ ಸಿದ್ಧತೆಗಳ ಬಗ್ಗೆ ಭಾನುವಾರ ಸಭೆ ನಡೆಸಿದ್ದರು. ಅಲ್ಲದೇ ರಿಯಾಸಿ ಜಿಲ್ಲೆಯಲ್ಲಿ ಬಸ್ ಮೇಲೆ ನಡೆದ ಭಯೋತ್ಪಾದಕ ದಾಳಿ ಮತ್ತು ಇತರ ಕೆಲವು ಭಯೋತ್ಪಾದಕ ಘಟನೆಗಳ ಹಿನ್ನೆಲೆಯಲ್ಲಿ ಈ ಸಭೆಯನ್ನು ಕರೆಯಲಾಗಿತ್ತು. ಸಭೆಯ ಬಳಿಕ ಈ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ಪೋಕ್ಸೋ ಕೇಸ್‌ – ಸತತ 2 ಗಂಟೆ ಸಿಐಡಿ ವಿಚಾರಣೆ ಎದುರಿಸಿದ ಬಿಎಸ್‌ವೈ

ಜೂನ್ 9 ರಂದು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಉಗ್ರರು ಬಸ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಬಸ್ ಆಳವಾದ ಕಂದಕಕ್ಕೆ ಉರುಳಿ ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದರು. ಘಟನೆಯಲ್ಲಿ 41 ಜನ ಗಾಯಗೊಂಡಿದ್ದರು. ಬಸ್‍ನಲ್ಲಿದ್ದ ಯಾತ್ರಾರ್ಥಿಗಳು ಶಿವ ಖೋರಿ ದೇವಸ್ಥಾನದಿಂದ ಕತ್ರಾದಲ್ಲಿರುವ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿತ್ತು.

ಜೂನ್ 11 ರಂದು ಭದೇರ್ವಾಹ್‍ನ ಚಟರ್‍ಗಲ್ಲದಲ್ಲಿ ರಾಷ್ಟ್ರೀಯ ರೈಫಲ್ಸ್ ಮತ್ತು ಪೊಲೀಸರ ಚೆಕ್‍ಪೋಸ್ಟ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಜೂನ್ 12 ರಂದು ದೋಡಾ ಜಿಲ್ಲೆಯ ಗಂಡೋ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆ ವೇಳೆ ಉಗ್ರರು ನಡೆಸಿದ ಗುಂಡಿನ ದಾಳಿಯಿಂದ ಓರ್ವ ಪೊಲೀಸ್ ಸೇರಿದಂತೆ ಏಳು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು.

ಈ ಘಟನೆಗಳ ಬಳಿಕ, ಪ್ರಧಾನಿ ನರೇಂದ್ರ ಮೋದಿಯವರು ಜೂನ್ 13 ರಂದು ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಈ ವೇಳೆ ಭಯೋತ್ಪಾದಕರ ನಿಗ್ರಹಕ್ಕೆ ಭದ್ರತಾ ಪಡೆಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸುವಂತೆ ಅವರು ಸೂಚಿಸಿದ್ದರು. ಇದನ್ನೂ ಓದಿ: ರಾಜಕಾಲುವೆಯಲ್ಲಿ ರೇಣುಕಾಸ್ವಾಮಿ ಮೊಬೈಲ್‌ ಹುಡುಕಾಟ

Share This Article