ಬೆಂಗಳೂರು: ಫೆ.28ಕ್ಕೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ (National Science Day) ಅಂಗವಾಗಿ ರಾಜ್ಯದ ಎಲ್ಲಾ ಶಾಲಾ – ಕಾಲೇಜುಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲು ರಾಜ್ಯ ಸರ್ಕಾರದ ವತಿಯಿಂದ ಸುತ್ತೋಲೆ ಹೊರಡಿಸಲಾಗಿದೆ ಎಂದು ಸಚಿವ ಎನ್.ಎಸ್ ಭೋಸರಾಜು (N.S Boseraju) ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಬೆಂಗಳೂರು ನಗರದ ಜವಾಹರ ಲಾಲ್ ನೆಹರು ತಾರಾಲಯದಲ್ಲಿ (Jawaharlal Nehru Planetarium) ಫೆ. 28 ರಂದು ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 10:30ಕ್ಕೆ ವೈಜ್ಞಾನಿಕ ಮನೋಭಾವನೆ ಮತ್ತು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಪ್ರತಿಜ್ಞಾ ವಿಧಿಯನ್ನು ಭೋಧಿಸಲಾಗುವುದು.
ಇದೇ ವೇಳೆ, ರಾಜ್ಯದ ಎಲ್ಲಾ ಶಾಲಾ – ಕಾಲೇಜುಗಳಲ್ಲೂ ವಿದ್ಯಾರ್ಥಿಗಳಿಗೆ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಏಕಕಾಲಕ್ಕೆ ಈ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಸುತ್ತೋಲೆಯನ್ನು ಹೊರಡಿಸಲಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಸಮೃದ್ದ ಶಾಂತಿಯುತ, ಪ್ರಗತಿಪರ ಸಮಾಜ ಮತ್ತು ದೇಶ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸಿದೆ. ಸಮಾಜದಲ್ಲಿ ಶಾಂತಿ ಮತ್ತು ಬ್ರಾತೃತ್ವವನ್ನು ಬೆಸೆಯುವ ಹಿನ್ನಲೆಯಲ್ಲಿ ವೈಜ್ಞಾನಿಕ ಮನೋಭಾವದ ನೆಲೆಗಟ್ಟನ್ನು ಸಾರ್ವಜನಿಕರಲ್ಲಿ ಬೆಳೆಸುವುದು ಅತ್ಯಾವಶ್ಯಕವಾಗಿದ್ದು ಭಾರತದ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ವಿಜ್ಞಾನ ದಿನವನ್ನ ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.