ಜಗನ್ಮಾತೆ ದುರ್ಗೆಯ ಐದನೇ ಸ್ವರೂಪವನ್ನು ಸ್ಕಂದಮಾತಾ ಎಂಬ ಹೆಸರಿನಿಂದ ಕರೆಯಲಾಗುತ್ತದೆ. ವಾಸ್ತವಿಕವಾಗಿ ಇದು ಜಗತ್ ಕಲ್ಯಾಣ ರೂಪ. ತಾರಕಾಸುರನ ಉಪಟಳದಿಂದ ದೇವತೆಗಳು, ಭೂಮಿಯ ಜನರು ದುಃಖಪೀಡಿತರಾಗಿರುತ್ತಾರೆ. ತಾರಕಾಸುರನು ಬ್ರಹ್ಮನ ವರಬಲದಿಂದ ಕೊಬ್ಬಿರುತ್ತಾನೆ. ಶಿವ ಪಾರ್ವತಿಯರ ಕಂದನಿಂದ ಮಾತ್ರವೇ ತನಗೆ ಮರಣ ಎಂದು ಅವನು ವರ ಪಡೆದಿರುತ್ತಾನೆ. ಹಾಗಾಗಲು ಸಾಧ್ಯವಿಲ್ಲ ಎಂಬುದು ಅವನ ಎಣಿಕೆ. ಆದರೆ ಪಾರ್ವತಿ ಹಾಗೂ ಶಿವನ ಮದುವೆಯಾದ ಬಳಿಕ, ಸ್ಕಂದ ಅಥವಾ ಷಣ್ಮುಖನು ಜನ್ಮ ತಾಳುತ್ತಾನೆ. ಷಣ್ಮುಖನನ್ನೇ ತಮ್ಮ ದೇವಸೈನ್ಯಕ್ಕೆ ದೇವತೆಗಳು ಸೇನಾನಿಗಳಾಗಿಸಿಕೊಳ್ಳುತ್ತಾರೆ. ದೇವಿಯೂ ಸೇರಿದಂತೆ ಸರ್ವರೂ ಈತನಿಗೆ ತಮ್ಮ ಶಕ್ತಿಗಳನ್ನು ನೀಡುತ್ತಾರೆ. ಸ್ಕಂದನು ದೇವಸೇನಾ ಸಮೇತನಾಗಿ ತೆರಳಿ, ತಾರಕಾಸುರನನ್ನು ಘೋರ ಯುದ್ಧದಲ್ಲಿ ಕೊಂದು ಮರಳುತ್ತಾನೆ. ಹೀಗೆ ಜಗತ್ಕಲ್ಯಾಣಕಾರಕನಾದ ಸ್ಕಂದನನ್ನು ಹೆತ್ತು ಕೊಟ್ಟ ಈಕೆ ಸ್ಕಂದಮಾತೆ ಎನಿಸಿಕೊಳ್ಳುತ್ತಾಳೆ.
ಸ್ಕಂದ ಮಾತೆಯು ಬುಧಗ್ರಹದ ಮೇಲೆ ಅಧಿಪತ್ಯವನ್ನು ಹೊಂದಿರುತ್ತಾಳೆ. ಶುದ್ಧಮನಸ್ಸಿನಿಂದ, ಭಕ್ತಿಯಿಂದ ಯಾರು ಆರಾಧನೆ ಮಾಡುತ್ತಾರೋ ಅವರಿಗೆ ದೇವಿಯು ಹೆಸರು, ಸಂಪತ್ತು ಹಾಗೂ ಸಮೃದ್ಧಿಯನ್ನು ನೀಡುತ್ತಾಳೆ. ಜನ್ಮ ಕುಂಡಲಿಯಲ್ಲಿ ಬುಧನು ಪ್ರತಿಕೂಲ ಸ್ಥಾನದಲ್ಲಿದ್ದರೆ ಉಂಟಾಗುವ ತೊಂದರೆಯನ್ನು ದೇವಿಯು ನಿವಾರಿಸುತ್ತಾಳೆ.
Advertisement
ಸ್ಕಂದ ಮಾತೆಯ ರೂಪ:
ಸ್ಕಂದ ಮಾತೆಗೆ ನಾಲ್ಕು ಭುಜಗಳಿದ್ದು, ಒಂದು ಕೈಯಲ್ಲಿ ಸ್ಕಂದನನ್ನು ಹಾಗೂ ಎರಡು ಕೈಯಲ್ಲಿ ಕಮಲವನ್ನು ಹಿಡಿದಿರುತ್ತಾಳೆ. ಇನ್ನೊಂದು ಹಸ್ತವು ಅಭಯ ಮುದ್ರೆಯಲ್ಲಿದ್ದು, ಸದಾ ತನ್ನ ಭಕ್ತರಿಗೆ ಆಶೀರ್ವಾದ ಮಾಡುತ್ತಾಳೆ. ಇವಳ ಶರೀರದ ಬಣ್ಣವೂ ಸಂಪೂರ್ಣವಾಗಿ ಬೆಳ್ಳಗಿದ್ದು, ಕಮಲದ ಆಸನದಲ್ಲಿ ವಿರಾಜಮಾನಳಾಗಿದ್ದಾಳೆ. ಈ ಕಾರಣಕ್ಕಾಗಿ ಇವಳನ್ನು ಪದ್ಮಾಸನಾ ದೇವಿ ಎಂದು ಕರೆಯುತ್ತಾರೆ. ಸಿಂಹವು ಸ್ಕಂದಮಾತೆಯ ವಾಹನವಾಗಿದೆ.
Advertisement
ಸ್ಕಂದ ಮಾತೆಯ ಪೂಜಾ ವಿಧಾನ:
ಸ್ಕಂದ ಮಾತೆಗೆ ಕೆಂಪು ಬಣ್ಣದ ಹೂವು ವಿಶೇಷವಾಗಿ ಗುಲಾಬಿ ಹೂವು ಪ್ರಿಯವಾದುದು. ಸ್ಕಂದ ಮಾತೆ ಹಾಗೂ ಮಾತೆಯ ಪುತ್ರ ಸ್ಕಂದನ ಆಶೀರ್ವಾದಕ್ಕೆ ವಿಶೇಷ ಪೂಜೆಯನ್ನು ಈ ದಿನ ಮಾಡಬೇಕು. ಷೋಡಶೋಪಚಾರ ಪೂಜೆಯ ನಂತರ ಆರತಿಯೊಂದಿಗೆ ಪೂಜೆಯನ್ನು ಮುಕ್ತಾಯಗೊಳಿಸಬೇಕು. ಜೀವನದ ಸದ್ಗತಿಗೆ ಹಾಗೂ ಆಧ್ಯಾತ್ಮಿಕ ಸಂತುಷ್ಟಿಗಾಗಿ ಈ ಅವತಾರಕ್ಕೆ ಆರಾಧನೆ ಮಾಡಲಾಗುವುದು.
Advertisement
Advertisement
ನವರಾತ್ರಿಯ ಐದನೇ ದಿನದಂದು ಸ್ಕಂದಮಾತೆಯ ಪೂಜೆ ಮಾಡಿದರೆ ಮನಃಶುದ್ಧಿಯಾಗುವುದು. ದೇವಿಯು ಬುದ್ಧಿಶಕ್ತಿ ಹೆಚ್ಚುವಂತೆ ಆಶೀರ್ವಾದ ಮಾಡುತ್ತಾಳೆ. ಈ ದೇವಿಯ ಆರಾಧನೆಯಿಂದ ಭಕ್ತರು ಯಶಸ್ಸು ಹಾಗೂ ಖ್ಯಾತಿಯನ್ನು ಪಡೆಯುತ್ತಾರೆ. ಅಲ್ಲದೇ ಯಶಸ್ಸಿನ ಹಾದಿಯಲ್ಲಿ ಮುಂದುವರಿಯುತ್ತಾರೆ.
Web Stories