ನವದೆಹಲಿ: ಸೆ.9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ (CP Radhakrishnan) ಅವರಿಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಸಚಿವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೇ ಇದು ಎನ್‌ಡಿಎ ಕೂಟದ ಒಗ್ಗಟಿನ ಪ್ರದರ್ಶನವೂ ಆಗಿದೆ.
ಮಹಾರಾಷ್ಟ್ರದ ಹಾಲಿ ರಾಜ್ಯಪಾಲರು ಆಗಿರುವ ರಾಧಾಕೃಷ್ಣನ್ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸುವ ವೇಳೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಆರೋಗ್ಯ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಉಪಸ್ಥಿತರಿದ್ದು ಬೆಂಬಲ ಸೂಚಿಸಿದ್ದಾರೆ. ಒಟ್ಟು 4 ಸೆಟ್ ಅರ್ಜಿಯನ್ನು ಅಲ್ಲಿಸಲಾಗಿದ್ದು, ಮೊದಲ ಸೆಟ್‌ನಲ್ಲಿ ದಾಖಲೆ ಸಲ್ಲಿಸುವ ವೇಳೆ ಮೋದಿ ಮುಖ್ಯ ಪ್ರತಿಪಾದಕರಾಗಿದ್ದರು.
ನಾಮಪತ್ರ ಸಲ್ಲಿಕೆಗೂ ಮುನ್ನ ರಾಧಾಕೃಷ್ಣನ್ ಅವರು ಸಂಸತ್ ಆವರಣದಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆ ನಮಸ್ಕರಿಸಿದರು. ಜೊತೆಗೆ ಮಹಾನ್ ವ್ಯಕ್ತಿಗಳ ಪುತ್ಥಳಿಗೆ ಗೌರವ ಸಲ್ಲಿಸಿದರು. ಇದನ್ನೂ ಓದಿ: ದೆಹಲಿ ಸಿಎಂಗೆ ಕಪಾಳಮೋಕ್ಷ – ತಿಹಾರ್ ಜೈಲಿನಲ್ಲಿದ್ದ ತನ್ನ ಸಂಬಂಧಿ ಬಿಡಿಸೋದಕ್ಕಾಗಿ ರೇಖಾ ಗುಪ್ತಾ ಭೇಟಿಗೆ ಬಂದಿದ್ದ ವ್ಯಕ್ತಿ
ಕಳೆದ ಭಾನುವಾರ ಸಿ.ಪಿ ರಾಧಾಕೃಷ್ಣನ್ ಅವರನ್ನ ಎನ್‌ಡಿಎ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿತ್ತು. ಪಕ್ಷದ ಸಂಸದೀಯ ಮಂಡಳಿ ಸಭೆಯ ನಂತರ ಜೆ.ಪಿ. ನಡ್ಡಾ ಅವರು ಎನ್‌ಡಿಎ ಒಮ್ಮತದ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದರು. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ – ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್ ರಿಯಾಕ್ಷನ್
ಯಾರು ಸಿಪಿ ರಾಧಾಕೃಷ್ಣನ್?
* ತಮಿಳುನಾಡಿನಲ್ಲಿ ಜನಿಸಿದ ರಾಧಾಕೃಷ್ಣನ್, ಕಳೆದ ವರ್ಷ ಜುಲೈನಿಂದ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
* 68 ವರ್ಷ ವಯಸ್ಸಿನ ಅವರು ಈ ಹಿಂದೆ ಫೆಬ್ರವರಿ 2023 ರಿಂದ ಜುಲೈ 2024 ರವರೆಗೆ ಜಾರ್ಖಂಡ್ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಮಾರ್ಚ್ ಮತ್ತು ಜುಲೈ 2024 ರ ನಡುವೆ ಅವರು ತೆಲಂಗಾಣ ರಾಜ್ಯಪಾಲರಾಗಿ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿಯನ್ನು ಹೊಂದಿದ್ದರು.
* 2023 ರಲ್ಲಿ ಜಾರ್ಖಂಡ್ ರಾಜ್ಯಪಾಲರಾಗಿ ನೇಮಕಗೊಂಡ ಮೊದಲ ನಾಲ್ಕು ತಿಂಗಳೊಳಗೆ, ರಾಧಾಕೃಷ್ಣನ್ ಅವರು ರಾಜ್ಯದ ಎಲ್ಲಾ 24 ಜಿಲ್ಲೆಗಳಿಗೆ ಪ್ರಯಾಣಿಸಿ ನಾಗರಿಕರು ಮತ್ತು ಜಿಲ್ಲಾ ಅಧಿಕಾರಿಗಳೊಂದಿಗೆ ಸಂವಹನ ನಡೆಸಿದ್ದರು.
* ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ಭಾರತೀಯ ಜನ ಸಂಘದೊಂದಿಗೆ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದ ಇವರು 1998 ಮತ್ತು 1999 ರಲ್ಲಿ ಎರಡು ಬಾರಿ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.
* ತಮಿಳುನಾಡು ಬಿಜೆಪಿ ಮುಖ್ಯಸ್ಥರಾಗಿದ್ದಾಗ(2004-2007) ಅವರು 93 ದಿನಗಳ ಕಾಲ 19 ಸಾವಿರ ಕಿಮೀ ‘ರಥ ಯಾತ್ರೆ’ಯನ್ನು ಕೈಗೊಂಡಿದ್ದರು. ಭಾರತದ ಎಲ್ಲಾ ನದಿಗಳ ಜೋಡಣೆ, ಭಯೋತ್ಪಾದನೆ ನಿರ್ಮೂಲನೆ, ಏಕರೂಪ ನಾಗರಿಕ ಸಂಹಿತೆ ಜಾರಿ, ಅಸ್ಪೃಶ್ಯತೆಯನ್ನು ಹೋಗಲಾಡಿಸುವುದು ಮತ್ತು ಮಾದಕ ದ್ರವ್ಯಗಳ ಪಿಡುಗನ್ನು ಎದುರಿಸುವುದು ಮುಂತಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಯಾತ್ರೆಯನ್ನು ಆಯೋಜಿಸಲಾಗಿತ್ತು. ಅವರು ವಿಭಿನ್ನ ಕಾರಣಗಳಿಗಾಗಿ ಇನ್ನೂ ಎರಡು ಪಾದಯಾತ್ರೆಗಳನ್ನು ಕೈಗೊಂಡಿದ್ದರು.
* ನಾಲ್ಕು ದಶಕಗಳಿಗೂ ಹೆಚ್ಚು ಅನುಭವ ಹೊಂದಿರುವ ರಾಧಾಕೃಷ್ಣನ್ ಅವರು ತಮಿಳುನಾಡಿನ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಗೌರವಾನ್ವಿತ ಹೆಸರನ್ನು ಹೊಂದಿದ್ದಾರೆ.
*1957 ರಲ್ಲಿ ತಮಿಳುನಾಡಿನ ತಿರುಪ್ಪೂರಿನಲ್ಲಿ ಜನಿಸಿದ ಅವರು ಕೊಯಮತ್ತೂರಿನ ಚಿದಂಬರಂ ಕಾಲೇಜಿನಿಂದ ಬಿಬಿಎ ಪದವಿ ಪಡೆದಿದ್ದಾರೆ. ಒಬ್ಬ ಉತ್ಸಾಹಿ ಕ್ರೀಡಾಪಟುವಾಗಿರುವ ಇವರು ಟೇಬಲ್ ಟೆನ್ನಿಸ್‌ನಲ್ಲಿ ಕಾಲೇಜು ಚಾಂಪಿಯನ್ ಆಗಿದ್ದರು. ಅಷ್ಟೇ ಅಲ್ಲದೇ ಓಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿದ್ದರು.
* ಸಂಸದರಾಗಿದ್ದಾಗ ಅವರು ಜವಳಿ ಸ್ಥಾಯಿ ಸಮಿತಿಯ ಅಧ್ಯಕ್ಷತೆ ವಹಿಸಿದ್ದರು ಮತ್ತು ಹಣಕಾಸು ಮತ್ತು ಸಾರ್ವಜನಿಕ ಉದ್ಯಮಗಳಿಗೆ ಸಂಬಂಧಿಸಿದ ಹಲವಾರು ಸಮಿತಿಗಳಿಗೆ ಕೊಡುಗೆ ನೀಡಿದ್ದಾರೆ.
* ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ (2004) ಸಂಸದೀಯ ನಿಯೋಗದ ಭಾಗವಾಗಿದ್ದರು ಮತ್ತು ತೈವಾನ್‌ಗೆ ತೆರಳಿದ್ದ ಮೊದಲ ಭಾರತೀಯ ನಿಯೋಗದ ಭಾಗವಾಗಿದ್ದರು. ಇದನ್ನೂ ಓದಿ: ದೆಹಲಿ ಸಿಎಂ ರೇಖಾ ಗುಪ್ತಾಗೆ ವ್ಯಕ್ತಿಯಿಂದ ಕಪಾಳಮೋಕ್ಷ – ಹಲ್ಲೆ ಖಂಡಿಸಿದ ಅತಿಶಿ