ಮಂಗಳೂರು: ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಕುಮಾರಧಾರಾ ಮತ್ತು ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ.
ಕುಮಾರಾಧಾರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ನೆಲ್ಯಾಡಿ ಸಮೀಪದ ಉದನೆಯಲ್ಲಿ ಹೆದ್ದಾರಿಗೆ ನೀರು ನುಗ್ಗಿದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಸದ್ಯಕ್ಕೆ ಬಂದ್ ಆಗಿದೆ. ಹೆದ್ದಾರಿಯಲ್ಲಿ ಉದ್ದಕ್ಕೂ ವಾಹನಗಳ ಸರತಿ ಸಾಲಿನಲ್ಲಿ ನಿಂತುಕೊಂಡಿದ್ದು, ಉಪ್ಪಿನಂಗಡಿ ಪೊಲೀಸರು ಹೆದ್ದಾರಿಯಲ್ಲಿ ಬಂದೋಬಸ್ತ್ ಕಲ್ಪಿಸಿದ್ದಾರೆ.
Advertisement
Advertisement
ಸುಬ್ರಹ್ಮಣ್ಯ ಸಮೀಪದ ಕುಲ್ಕುಂದದಲ್ಲಿ ಕುಮಾರಧಾರಾ ನದಿ ನೀರು ನುಗ್ಗಿದ ಪರಿಣಾಮ ನಾಲ್ಕು ಮನೆಗಳಿಗೆ ತೊಂದರೆಯಾಗಿದೆ. ಮನೆಯವರು ಮುಂಜಾಗ್ರತಾ ಕ್ರಮವಾಗಿ ಬೇರೆಡೆಗೆ ಸ್ಥಳಾಂತರಗೊಂಡಿದ್ದು, ಸಂತ್ರಸ್ತರಿಗೆ ಗಂಜಿ ಕೇಂದ್ರದ ವ್ಯವಸ್ಥೆ ಮಾಡಲಾಗುತ್ತಿದೆ.
Advertisement
ಕುಮಾರಧಾರಾ ನದಿ ನೀರು ಸುಬ್ರಹ್ಮಣ್ಯ ಸ್ನಾನಘಟ್ಟದ ಬಳಿ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಗೂ ನುಗ್ಗಿದ್ದು, ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಅಲ್ಲದೆ ಸುಳ್ಯ-ಸುಬ್ರಹ್ಮಣ್ಯ-ಸಕಲೇಶಪುರ ಸಂಪರ್ಕಿಸುವ ಬಿಸಿಲೆ ಘಾಟ್ ರಸ್ತೆಯಲ್ಲೂ ಮರ ಹಾಗೂ ಗುಡ್ಡ ಕುಸಿದ ಪರಿಣಾಮ ಬಿಸಿಲೆ ಘಾಟ್ ರಸ್ತೆಯಲ್ಲೂ ಸಂಚಾರಕ್ಕೆ ತೊಡಕಾಗಿದೆ.
Advertisement
ಮತ್ತೆ ಕುಸಿತ: ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ನಾಲ್ಕು ಕಡೆಗಳಲ್ಲಿ ಗುಡ್ಡೆ ರಸ್ತೆಗೆ ಜಾರಿದೆ. 6 ಜೆಸಿಬಿ ಯಂತ್ರದ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ. ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ರಸ್ತೆ ಸಂಚಾರವನ್ನು ನಿಷೇಧಿಸಲಾಗಿದೆ.