ನವದೆಹಲಿ: ದೆಹಲಿ ಹೈಕೋರ್ಟ್ (Delhi High Court) ನ್ಯಾಯಾಧೀಶ ಯಶವಂತ್ ವರ್ಮಾ (Justice Yashwant Varma) ಅವರ ನಿವಾಸದಲ್ಲಿ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ಸಮಯದಲ್ಲಿ ಯಾವುದೇ ನಗದು ಪತ್ತೆಯಾಗಿಲ್ಲ ಎಂದು ನಾನು ಹೇಳಿಲ್ಲ ಎಂದು ದೆಹಲಿ ಅಗ್ನಿಶಾಮಕ ದಳದ (ಡಿಎಫ್‌ಎಸ್) ಮುಖ್ಯಸ್ಥ ಅತುಲ್ ಗರ್ಗ್ (Atul Garg) ಸ್ಪಷ್ಟಪಡಿಸಿದ್ದಾರೆ.
ನ್ಯಾಯಾಧೀಶರ ಅಧಿಕೃತ ನಿವಾಸದಲ್ಲಿ ಬೆಂಕಿ ನಂದಿಸುವಾಗ ಯಾವುದೇ ನಗದು ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ ಎಂದು ತಮ್ಮ ಹೆಸರು ಉಲ್ಲೇಖಿಸಿ ಕೆಲವು ಮಾಧ್ಯಮಗಳು ವರದಿ ಮಾಡಿವೆ. ನನ್ನ ಹೆಸರು ಯಾಕೆ ಉಲ್ಲೇಖಿಸಿದ್ದಾರೆ ಎಂದು ಗೊತ್ತಿಲ್ಲ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಕಂತೆ ಕಂತೆ ನೋಟು ಪತ್ತೆಯಾದ ಜಡ್ಜ್ ಮೇಲೆ ದಾಖಲಾಗಿತ್ತು ಸಿಬಿಐ ಎಫ್‌ಐಆರ್
ಅಗ್ನಿಶಾಮಕ ದಳದವರು ಸ್ಥಳದಲ್ಲಿ ಯಾವುದೇ ನಗದು ಕಂಡುಬಂದಿಲ್ಲ ಎಂದು ಯಾವುದೇ ಮಾಧ್ಯಮಗಳಿಗೆ ಹೇಳಿಲ್ಲ. ವರದಿಗಳಲ್ಲಿ ಏಕೆ ನನ್ನ ಹೆಸರು ಉಲ್ಲೇಖಿಸಲಾಗಿದೆ ಎಂಬುದು ನನಗೆ ಏಕೆ ಗೊತ್ತಿಲ್ಲ. ಈಗಾಗಲೇ ಸುದ್ದಿ ಪ್ರಕಟಿಸಿದ ಮಾಧ್ಯಮ ಸಂಸ್ಥೆಗಳಿಗೆ ಸ್ಪಷ್ಟೀಕರಣ ಕೇಳಲಾಗಿದೆ ಎಂದು ಅವರು ಹೇಳಿದ್ದಾರೆ.
ಗುರುವಾರ ರಾತ್ರಿ ನಡೆದ ಅಗ್ನಿ ಅವಘಡದ ಸಂದರ್ಭದಲ್ಲಿ ನ್ಯಾಯಮೂರ್ತಿ ವರ್ಮಾ ಅವರ ಮನೆಯಲ್ಲಿ ಭಾರಿ ಪ್ರಮಾಣದ ನಗದು ಪತ್ತೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಇದಾದ ಬಳಿಕ ಸುಪ್ರೀಂ ಕೋರ್ಟ್ (Supreme Court) ಕೊಲಿಜಿಯಂ ಇಡೀ ಘಟನೆಯ ಬಗ್ಗೆ ತನಿಖೆ ಆರಂಭಿಸಿದೆ.
ನ್ಯಾಯಮೂರ್ತಿ ವರ್ಮಾ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ಶಿಫಾರಸು ಮಾಡಿದೆ ಎಂದು ವರದಿಯಾಗಿದೆ. ನ್ಯಾ.ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಿದ್ದಕ್ಕೂ ಅವರ ಅಧಿಕೃತ ನಿವಾಸದಲ್ಲಿ ನಗದು ಪತ್ತೆಯಾಗಿದ್ದಕ್ಕೂ ಸಂಬಂಧವಿಲ್ಲ ಎಂದು ಸುಪ್ರೀಂ ಕೋರ್ಟ ಸ್ಪಷ್ಟೀಕರಣ ನೀಡಿದೆ. ಈ ಬಗ್ಗೆ ನಡೆಯುತ್ತಿರುವ ತನಿಖೆಯಿಂದ ಸ್ವತಂತ್ರವಾಗಿ ವರ್ಗಾವಣೆ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ನ್ಯಾಯಾಲಯ ಒತ್ತಿ ಹೇಳಿದೆ. ಇದನ್ನೂ ಓದಿ: ದೆಹಲಿ ಹೈಕೋರ್ಟ್ ಜಡ್ಜ್ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ – ವರ್ಗಾವಣೆ ಕ್ರಮದ ಭಾಗವಲ್ಲ ಎಂದ ಸುಪ್ರೀಂ