ಕೋಲ್ಕತ್ತಾ: ಜುಲೈ 1 ರಿಂದ ದೇಶದಲ್ಲಿ ಹೊಸ ಕ್ರಿಮಿನಲ್ ಕಾನೂನುಗಳು (New Criminal Laws) ಜಾರಿಗೆ ಬರಲಿವೆ. ಐಪಿಸಿ, ಇಂಡಿಯನ್ ಎವಿಡೆನ್ಸ್ ಆಕ್ಟ್, ಕ್ರಿಮಿನಲ್ ಪ್ರೊಸೀಜರ್ ಕೋಡ್ (CRPC) ಜಾಗದಲ್ಲಿ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಎಂಬ ಮೂರು ಮಾದರಿ ಕಾನೂನುಗಳು ಜಾರಿಗೆ ಬರಲಿವೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ (Arjun Ram Meghwal) ತಿಳಿಸಿದ್ದಾರೆ.
ಕೋಲ್ಕತ್ತಾದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೆ ಜಾರಿಗೊಳಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಮುಂದುವರಿದು ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿದ್ದು, ಅವುಗಳ ಅನುಷ್ಠಾನಕ್ಕೆ ಅಗತ್ಯ ತರಬೇತಿ ಈಗಾಗಲೇ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಇಂದಿನ ಕಾಲದ ಪರಿಸ್ಥಿತಿಗಳಿಗೆ ಅನುಗುಣವಾಗಿ ಈ ಮೂರು ಕಾಯ್ದೆಗಳನ್ನು ಜಾರಿ ಮಾಡಲಾಗುತ್ತದೆ. ಈಗಾಗಲೇ ಬಿಪಿಆರ್‌ಡಿ, ಜ್ಯೂಡಿಷಿಯಲ್ ಅಕಾಡೆಮಿಗಳು, ಕಾನೂನು ವಿಶ್ವವಿದ್ಯಾಲಯಗಳು ಅಧಿಕಾರಿಗಳಿಗೆ ತರಬೇತಿ ನೀಡುತ್ತಿವೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಸ್ಪೀಕರ್ ಹುದ್ದೆ ಬಿಜೆಪಿಗೆ, ಡೆಪ್ಯೂಟಿ ಸ್ಪೀಕರ್ ಹುದ್ದೆ ಎನ್‌ಡಿಎ ಮಿತ್ರ ಪಕ್ಷಕ್ಕೆ?
2023ರ ಡಿಸೆಂಬರ್‌ನಲ್ಲಿ ಈ ಮೂರು ಕಾನೂನುಗಳನ್ನು ಸಂಸತ್‌ನಲ್ಲಿ ಅಂಗೀಕರಿಸಲಾಗಿತ್ತು. ಬಳಿಕ ಈ ಮೂರು ಕಾಯ್ದೆಗಳಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದರು. ಆದ್ರೆ ಕೇಂದ್ರ ಸರ್ಕಾರ ಅಧಿಸೂಚನೆ ಮುಂದೂಡಿದ್ದರಿಂದ ಅಧಿಕೃತವಾಗಿ ಜಾರಿಗೆ ಬಂದಿರಲಿಲ್ಲ. ಪ್ರಸಕ್ತ ವರ್ಷಾರಂಭದಲ್ಲಿ ಮೂರು ಕಾನೂನುಗಳು ಜಾರಿಗೆ ಬರಲಿವೆ ಎಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದನ್ನೂ ಓದಿ: ಜಾರ್ಖಂಡ್‌ನಲ್ಲಿ ಎನ್‍ಕೌಂಟರ್ – ಹೊಂಚು ಹಾಕಿ ಕುಳಿತಿದ್ದ ನಾಲ್ವರು ನಕ್ಸಲರ ಹತ್ಯೆ